ಹೊಸದಿಲ್ಲಿ/ಶಿವಮೊಗ್ಗ: ಕರ್ನಾಟಕದ ಶರಾವತಿಯಲ್ಲಿ ಕೈಗೊಳ್ಳಲಾಗುತ್ತಿರುವ 2 ಸಾವಿರ ಮೆಗಾ ವ್ಯಾಟ್ ಸಾಮರ್ಥ್ಯದ ಪಂಪ್ಡ್ ಸ್ಟೋರೇಜ್ ವಿದ್ಯುತ್ ಉತ್ಪಾದನೆ ಘಟಕ ನಿರ್ಮಾಣ ಯೋಜನೆಯ ವಿಸ್ತೃತ ವರದಿಗೆ (ಡಿಪಿಆರ್) ಕೇಂದ್ರೀಯ ವಿದ್ಯುತ್ ಪ್ರಾಧಿಕಾರ (ಸಿಇಎ) ದಾಖಲೆಯ ಅವಧಿಯಲ್ಲಿ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಇಂಧನ ಸಚಿವಾಲಯ ತಿಳಿಸಿದೆ.
ಶರಾವತಿ ನದಿಯಲ್ಲಿ ಕರ್ನಾಟಕ ವಿದ್ಯುತ್ ನಿಗಮವು ವಿದ್ಯುತ್ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಲಿಂಗನಮಕ್ಕಿ ಜಲಾಶಯದ ಕೆಳಭಾಗದಲ್ಲಿರುವ ಶಿವಮೊಗ್ಗದ ಲಿಂಗನಮಕ್ಕಿಯ ತಲಕಳಲೆ ಮತ್ತು ಉತ್ತರ ಕನ್ನಡ ಜಿಲ್ಲೆಯ ಗೇರುಸೊಪ್ಪ ಜಲಾಶಯಗಳ ಮಧ್ಯ ಭಾಗದಲ್ಲಿ ಶರಾವತಿ ಸ್ಟೋರೇಜ್ ಪಂಪ್ಡ್ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.
ದೇಶದಲ್ಲಿ ವಿದ್ಯುತ್ ಭದ್ರತೆಯನ್ನು ಹೆಚ್ಚಿಸುವುದಕ್ಕಾಗಿ ಇಂಧನ ಸಂಗ್ರಹ ವ್ಯವಸ್ಥೆಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತಿದೆ ಎಂದು ಕೇಂದ್ರ ಸರಕಾರವು ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಶರವಾತಿಯ ಪಂಪ್ಡ್ ಸ್ಟೋರೇಜ್ ವಿದ್ಯುತ್ ಉತ್ಪಾದನೆ ಘಟಕವು ದೇಶದ ಅತಿದೊಡ್ಡ ಪಂಪ್ಡ್ ಸ್ಟೋರೇಜ್ ಘಟಕ ಎನಿಸಿಕೊಳ್ಳಲಿದೆ.
ಈ ಹಿಂದಿನ ಸಿದ್ದರಾಮಯ್ಯ ಸರಕಾರದಲ್ಲಿ 4 ಸಾವಿರ ಕೋಟಿ ರೂ.ಗೂ ಅಧಿಕ ವೆಚ್ಚದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಪ್ರಸ್ತಾಪವನ್ನು ಸಿದ್ಧಪಡಿಸಲಾಗಿತ್ತು. ಆದರೆ ಅನಂತರ ಈ ಯೋಜನೆ ಹೆಚ್ಚು ಸದ್ದು ಮಾಡಿರಲಿಲ್ಲ. ಮತ್ತೆ 2ನೇ ಬಾರಿಗೆ ಸಿದ್ದರಾಮಯ್ಯ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಯೋಜನೆಗೆ ಮರುಜೀವ ಬಂದಿದೆ. ತಲಾ 250 ಮೆಗಾವ್ಯಾಟ್‌ನ 8 ವಿದ್ಯುತ್ ಉತ್ಪಾದನ ಘಟಕ ಇಲ್ಲಿ ಆರಂಭವಾಗಲಿದೆ.