Advertisement

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ ಆಚರಿಸಿ

06:30 PM Sep 04, 2021 | Team Udayavani |

ಯಾದಗಿರಿ: ಮಹಾಮಾರಿ ಕೊರೊನಾ ಹಬ್ಬುವ ಆತಂಕದಿಂದ ಈ ಬಾರಿ ಹಬ್ಬಗಳ ಆಚರಣೆಗೆ ಮಾರ್ಗಸೂಚಿಗಳನ್ನು ಸರ್ಕಾರ ಹೊರಡಿಸಿದ್ದು, ಈ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಿ, ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ ಆಚರಿಸಲು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ಸೂಚಿಸಿದರು.

Advertisement

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗೌರಿ-ಗಣೇಶ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ ಮಾರ್ಗಸೂಚಿಗಳನ್ನು ವಿವರಿಸಿದರು.

ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ತಮ್ಮ ಮನೆಗಳಲ್ಲಿ ಆಚರಿಸತಕ್ಕದ್ದು. ಇದನ್ನು ಹೊರತುಪಡಿಸಿ ಬೇರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ, ಹೊರಾಂಗಣಗಳಲ್ಲಿ, ಚಪ್ಪರ, ಪೆಂಡಾಲ್‌, ಶಾಮಿಯಾನ ವೇದಿಕೆಗಳನ್ನು ನಿರ್ಮಿಸಿ ಗೌರಿ-ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವಂತಿಲ್ಲ.

ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯ ಮೆರವಣಿಗೆ, ಮನೋರಂಜನಾ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಪಾರಂಪರಿಕ ಗೌರಿ-ಗಣೇಶ ಮೂರ್ತಿಯನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು ಅಥವಾ ಮೂರ್ತಿಗಳನ್ನು ಅತೀ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ, ಜಿಲ್ಲಾಡಳಿತ, ಹತ್ತಿರದ ಸ್ಥಳೀಯ ಸಂಸ್ಥೆಗಳ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ,ಕಲ್ಯಾಣಿ ಅಥವಾ ಮೊಬೈಲ್‌ ಟ್ಯಾಂಕ್‌ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್‌ಗಳಲ್ಲಿ ವಿಸರ್ಜಿಸತಕ್ಕದ್ದು. ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೈಜೇಸನ್‌ ಮಾಡತಕ್ಕದ್ದು. ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಸರ್‌ ಹಾಗೂ ಥರ್ಮಲ್‌ ಸ್ಕ್ರೀನಿಂಗ್‌ ವ್ಯವಸ್ಥೆ ಕಲ್ಪಿಸತಕ್ಕದ್ದು.

ದರ್ಶನಕ್ಕಾಗಿ ಬರುವ ಭಕ್ತರಿಗೆ ಕೋವಿಡ್‌-19 ಸಮುಚಿತ ವರ್ತನೆಯಂತೆ ಕಡ್ಡಾಯವಾಗಿ ಮುಖಗವಸವನ್ನು ಧರಿಸುವುದು, ಕನಿಷ್ಠ 6 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳತಕ್ಕದ್ದು. ಗಣೇಶೋತ್ಸವ ಆಚರಣೆ ಕಾಲಕ್ಕೆ ಸಂದರ್ಭಕ್ಕನುಗುಣವಾಗಿ ಸರ್ಕಾರ, ಜಿಲ್ಲಾಡಳಿತ, ಪೊಲೀಸ್‌, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲ ಆದೇಶ, ನಿರ್ದೇಶನ ಹಾಗೂ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. ಮನರಂಜನೆ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು
ಇತರೆ ಒಗ್ಗೂಡುವಿಕೆಗಳನ್ನು ಮತ್ತು ಬೃಹತ್‌ ಸಭೆ ಸಮಾರಂಭಗಳನ್ನು ನಿಷೇಧಿಸಲಾಗಿದ್ದು, ಜಾತ್ರೆಗಳು, ದೇವಾಲಯದ ಹಬ್ಬಗಳು, ಮೆರವಣಿಗೆ ಮತ್ತು ಸಭೆ ಸಮಾರಂಭಗಳಿಗೆ ಅನುಮತಿ ನೀಡಲಾಗಿರುವುದಿಲ್ಲ.

Advertisement

ಹಬ್ಬ ಹರಿದಿನಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಿಂದಲೇ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ, ಯಾದಗಿರಿ ಸಿಪಿಐ ಸೋಮಶೇಖರ ಕೆಂಚಿರೆಡ್ಡಿ, ಸಮಾಜದ ಮುಖಂಡರಾದ ಸಿದ್ದಪ್ಪ ಎಸ್‌. ಹೊಟ್ಟಿ, ಅಯ್ಯಣ್ಣಾ ಹುಂಡೇಕಾರ, ಭವರಿಲಾಲ ಧೋಖಾ, ಲಾಯಕ ಹುಸೇನ್‌ ಬಾದಲ್‌, ಅಬ್ದುಲ್‌ ವಾಹಿದಮಿಯ್ಯ, ಶಿವಾಜಿ ಸೇನಾ ಸಂಸ್ಥಾಪಕ ಅಧ್ಯಕ್ಷ ಪರಶುರಾಮ ಶೇಗುರಕರ್‌ ಹಾಗೂ ಜಿಲ್ಲೆಯ ಎಲ್ಲ ತಹಶೀಲ್ದಾರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next