ಬೆಂಗಳೂರು:ಗಡಿ ಸಂಘರ್ಷದ ವಿಚಾರದಲ್ಲಿ ಚೀನಾ ಉತ್ಪನ್ನ ನಿರ್ಬಂಧದಂತಹ ಆರ್ಥಿಕ ಬಹಿಷ್ಕಾರಕ್ಕೆ ಕೇಂದ್ರ ಸರ್ಕಾರ ಉತ್ತೇಜನ ನೀಡಬಾರದು. ಇದರಿಂದ ದೀರ್ಘ ಹಾಗೂ ಆಳವಾದ ಪರಿಣಾಮಗಳು ಬೀರುತ್ತವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಪಕ್ಷಗಳ ನಾಯಕರ ಸಭೆ ಕರೆದಿರುವ ಹಿನ್ನೆಲೆಯಲ್ಲಿ ಕೆಲವೊಂದು ಸಲಹೆ ನೀಡಿರುವ ಅವರು, ಈ ಸಂದರ್ಭದಲ್ಲಿ ಸೂಕ್ಷ್ಮ ಹಾಗೂ ಎಚ್ಚರಿಕೆಯ ಹೆಜ್ಜೆ ಇಡಬೇಕು ಎಂದು ಹೇಳಿದ್ದಾರೆ.
ರಾಷ್ಟ್ರೀಯವಾದ, ಪ್ರಚೋದನಾಕಾರಿ ಹೇಳಿಕೆಗಳಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ವದಂತಿ ಹಾಗೂ ಪ್ರಚೋದನಾಕಾರಿ ವಿಶ್ಲೇಷಣೆಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರತಿಪಕ್ಷಗಳು ಸರ್ಕಾರದ ಜತೆ ನಿಲ್ಲಬೇಕು. ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ಜತೆಗೂಡಬೇಕು. ಹಾಗೆಂದ ಮಾತ್ರಕ್ಕೆ ಪ್ರಶ್ನೆಯೇ ಮಾಡಬಾರದು ಎಂದಲ್ಲ. ಆದರೂ ವಿಷಯ ಸೂಕ್ಷ್ಮವಾಗಿ ನಿರ್ವಹಣೆ ಮಾಡಬೇಕು ಎಂದು ಹೇಳಿದ್ದಾರೆ.
ಭಾರತ-ಚೀನಾ ಗಡಿ ಸಂಘರ್ಷ ಸಂದರ್ಭದಲ್ಲಿ ರಾಷ್ಟ್ರೀಯ ಹಿತಾಸಕ್ತಿ ಹಿನ್ನೆಲೆಯಲ್ಲಿ ಪ್ರಧಾನಿಯವರು ಪ್ರತಿಪಕ್ಷಗಳ ನಾಯಕರ ಸಭೆ ಕರೆದಿರುವುದು ಸ್ವಾಗತಾರ್ಹ ಎಂದು ತಿಳಿಸಿದ್ದಾರೆ.