ಯಾದಗಿರಿ: ಅಭಿವೃದ್ಧಿ ಮಾಡುವುದೇ ಕೇಂದ್ರ ಸರ್ಕಾರದ ಉದ್ದೇಶವಾಗಿದ್ದು, ಗ್ರಾಮದ ಕಟ್ಟಕಡೆ ವ್ಯಕ್ತಿಗೂ ಕೇಂದ್ರ ಸರ್ಕಾರದ ಯೋಜನೆ ಮಾಹಿತಿ ತಲುಪಿಸಿ ಎಲ್ಲರೂ ಸದುಪಯೋಗ ಪಡಿಸಿಕೊಳ್ಳುವಂತಾಗಬೇಕು ಎಂದು ಕಲಬುರಗಿ ಸಂಸದ ಡಾ| ಉಮೇಶ ಜಾಧವ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಪ್ರಗತಿ ಪರಿಶೀಲನೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಕ್ಷೇತ್ರದ ಅಭಿವೃದ್ಧಿಯಲ್ಲಿ ಅಧಿಕಾರಿಗಳ ಪಾತ್ರ ಪ್ರಮುಖವಾಗಿದೆ. ಹೀಗಾಗಿ ಅಧಿಕಾರಿಗಳು ಸರ್ಕಾರ ನೀಡಿದ ಜವಾಬ್ದಾರಿ ಪ್ರಾಮಾಣಿಕತೆಯಿಂದ ನಿಭಾಯಿಸಬೇಕು. ಅಧಿಕಾರಿಗಳು ಕಚೇರಿಗೆ ನಿಗದಿಪಡಿಸಿದ ಸಮಯಕ್ಕೆ ಬರಬೇಕು. ಜವಾಬ್ದಾರಿ ಅರಿತು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು. ಜನರು ಕೂಲಿ ಕೆಲಸಕ್ಕಾಗಿ ದೂರದ ಪಟ್ಟಣಗಳಿಗೆ ವಲಸೆ ಹೋಗಬಾರದೆಂದು ಕೇಂದ್ರ ಸರ್ಕಾರ ನರೇಗಾ ಕೂಲಿ ಮೊತ್ತ ಹೆಚ್ಚಳ ಮಾಡಿ ಕಾರ್ಮಿಕರಿಗೆ ಅನುಕೂಲ ಕಲ್ಪಿಸಿದೆ ಎಂದರು.
ಗ್ರಾಮೀಣ ಭಾಗದಲ್ಲಿ ಮಣ್ಣು ಮತ್ತು ನೀರಿನ ಸಂರಕ್ಷಣೆ, ಗ್ರಾಮೀಣ ಮೂಲ ಸೌಕರ್ಯ ಕಾಮಗಾರಿಗಳು, ಕೃಷಿ ಹೊಂಡ ನಿರ್ಮಾಣ, ಕೃಷಿ ಹೊಂಡ ನಿರ್ಮಾಣ, ರೈತರ ಹೊಲಗದ್ದೆಯಲ್ಲಿ ಬದು ನಿರ್ಮಾಣ, ರೈತರ ಜಮೀನುಗಳಲ್ಲಿ ವೈಯಕ್ತಿಕ ಕಾಮಗಾರಿಗಳು, ವಸತಿ ಯೋಜನೆಯಡಿ ಮನೆ ನಿರ್ಮಾಣ ಸೇರಿದಂತೆ ಕೆಲ ಕಾಮಗಾರಿಗಳಲ್ಲಿ ಕೂಲಿ ಕಾರ್ಮಿಕರು ಕೆಲಸ ಮಾಡಲು ಅಧಿಕಾರಿಗಳು ಅವಕಾಶ ಕಲ್ಪಿಸಬೇಕು ಎಂದು ಸೂಚಿಸಿದರು.
ಪ್ರತಿ ಗ್ರಾಪಂಗಳು ಪ್ರಧಾನಮಂತ್ರಿಗಳ ಆಶಯದಂತೆ ಗ್ರಾಮಗಳ ನೈರ್ಮಲ್ಯ ಸ್ವತ್ಛತೆ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು. ಪ್ರಧಾನಮಂತ್ರಿ ಸ್ವತ್ಛ ಭಾರತ್ ಮಿಷನ್ ಕಾರ್ಯಕ್ರಮ ಪ್ರತಿಯೊಂದು ಗ್ರಾಪಂಗಳಲ್ಲಿ ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಂತೆ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದ ಸಂಸದರು, ರೈತರ ಆದಾಯ ದ್ವಿಗುಣಗೊಳಿಸುವಲ್ಲಿ ಪ್ರಧಾನಮಂತ್ರಿಗಳ ಅಭಿವೃದ್ಧಿ ಕಾರ್ಯಕ್ರಮಗಳು ಪ್ರತಿಯೊಬ್ಬ ರೈತರಿಗೂ ತಲುಪಿಸಬೇಕಿದೆ ಎಂದರು.
ಈ ಸಂದರ್ಭದಲ್ಲಿ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ, ಜಿಲ್ಲಾ ಧಿಕಾರಿ ಸ್ನೇಹಲ್ ಆರ್, ಜಿಪಂ ಸಿಇಒ ಅಮರೇಶ ನಾಯ್ಕ, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಶಾಆಲಂ ಹುಸೇನ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.