ಬೆಂಗಳೂರು: ರಾಜ್ಯದಲ್ಲಿ ಪ್ರವಾಹದಿಂದ ಉಂಟಾಗಿರುವ ನಷ್ಟದ ಅಂದಾಜು ಮಾಡಲು ಕೇಂದ್ರ ಸರ್ಕಾರದ ಅಧ್ಯಯನ ತಂಡವನ್ನು ರಾಜ್ಯಕ್ಕೆ ಕಳುಹಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ದೆಹಲಿಯಲ್ಲಿ ಶುಕ್ರವಾರ ಪ್ರಧಾನಿಯವರನ್ನು ನಿಯೋಗದಲ್ಲಿ ಭೇಟಿಯಾದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಪ್ರವಾಹದಿಂದ ಉಂಟಾಗಿರುವ ಹಾನಿ ಬಗ್ಗೆ ಮಾಹಿತಿ ನೀಡಿದರು.
ಪ್ರಧಾನಿಯವರು ಯಡಿಯೂರಪ್ಪ ನೇತೃತ್ವದ ನಿಯೋಗದೊಂದಿಗೆ ಸುಮಾರು 45 ನಿಮಿಷಗಳ ಕಾಲ ಚರ್ಚೆ ನಡೆಸಿದರು. ರಾಜ್ಯದಲ್ಲಿ ಪ್ರವಾಹ, ಭೂಕುಸಿತದಿಂದಾಗಿ ಹಿಂದೆಂದೂ ಕಂಡರಿಯದ ನಷ್ಟ ಸಂಭವಿಸಿದೆ. ಮೂಲಸೌಕರ್ಯ ಪುನರ್ ನಿರ್ಮಾಣ ಹಾಗೂ ಪರಿಹಾರ ಕಾರ್ಯಗಳಿಗೆ ಹೆಚ್ಚುವರಿ ಅನುದಾನದ ಅಗತ್ಯವಿದೆ. ಹಾಗಾಗಿ, ರಾಜ್ಯದಲ್ಲಿ ಪ್ರವಾಹದಿಂದ ತತ್ತರಿಸಿರುವ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳಿಗೆ ಕೂಡಲೇ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ. ಇದಕ್ಕೆ ಸ್ಪಂದಿಸಿದ ಪ್ರಧಾನಿ ಕೂಡಲೇ ಕೇಂದ್ರದ ಅಧ್ಯಯನ ತಂಡವನ್ನು ರಾಜ್ಯಕ್ಕೆ ಕಳುಹಿಸುವ ಭರವಸೆ ನೀಡಿದ್ದಾರೆ.
ಪ್ರಧಾನಿ ಭೇಟಿ ಬಳಿಕ ಪ್ರತಿಕ್ರಿಯಿಸಿದ ಯಡಿಯೂರಪ್ಪ, ರಾಜ್ಯದಲ್ಲಿ ಪ್ರವಾಹಪೀಡಿತ ಪ್ರದೇಶಗಳಲ್ಲಿನ ಹಾನಿ ಬಗ್ಗೆ ಪ್ರಧಾನಿಯವರಿಗೆ ಸಂಪೂರ್ಣ ಮಾಹಿತಿ ನೀಡಲಾಗಿದ್ದು, ಅವರಿಗೆ ಮನವರಿಕೆಯಾಗಿದೆ. ತಕ್ಷಣವೇ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ. ಅಲ್ಲದೆ, 50- 55 ಸಾವಿರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು, 65ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವುದು ಸೇರಿದಂತೆ ಪ್ರವಾಹದ ಹಾನಿಯ ತೀವ್ರತೆಯನ್ನು ಪ್ರಧಾನಿಯವರಿಗೆ ಮನವರಿಕೆ ಮಾಡಿಕೊಡಲಾಗಿದೆ.
ಬಳಿಕ ರೈಲ್ವೆ ಸಚಿವರು, ನಾಗರಿಕ ವಿಮಾನಯಾನ ರಾಜ್ಯ ಸಚಿವರನ್ನು ಭೇಟಿ ಮಾಡಿ, ರಾಜ್ಯಕ್ಕೆ ಸಂಬಂಧಪಟ್ಟ ಯೋಜನೆಗಳ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು. ಈವರೆಗಿನ ಮಾಹಿತಿ ಪ್ರಕಾರ 40,000 ಕೋಟಿ ರೂ. ನಷ್ಟ ಉಂಟಾಗಿದೆ ಎಂಬ ಅಂದಾಜು ಇದೆ. ಆದರೆ, ಎಷ್ಟು ಮೊತ್ತದ ಪರಿಹಾರ ಹಾಗೂ ಅನುದಾನಕ್ಕೆ ಮನವಿ ಮಾಡಲಾಗಿದೆ ಎಂಬುದನ್ನು ಮಾಧ್ಯಮಗಳ ಎದುರು ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.
10,000 ಕೋಟಿಗೆ ಮನವಿ?: ಭೀಕರ ಪ್ರವಾಹದಿಂದಾಗಿ ರಾಜ್ಯದಲ್ಲಿ 40,000 ಕೋಟಿ ರೂ.ಗಿಂತ ಹೆಚ್ಚು ನಷ್ಟ ಸಂಭವಿಸಿದ್ದು, 10,000 ಕೋಟಿ ರೂ.ಪರಿಹಾರ/ವಿಶೇಷ ಅನುದಾನ ನೀಡಬೇಕು. ತಕ್ಷಣದ ಪರಿಹಾರ ಕಾರ್ಯಕ್ಕೆ 1,500 ಕೋಟಿ ರೂ.ನಿಂದ 2000 ಕೋಟಿ ರೂ. ಪರಿಹಾರ ವಿತರಿಸುವಂತೆ ಪ್ರಧಾನಿಯವರಿಗೆ ನಿಯೋಗ ಮನವಿ ಮಾಡಿದೆ ಎಂದು ಉನ್ನತ ಮೂಲಗಳು ಹೇಳಿವೆ.