Advertisement
ದೆಹಲಿಯಲ್ಲಿ ಸೋಮವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ನಿಯೋಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಅತಿವೃಷ್ಟಿ ಹಾಗೂ ಒಳನಾಡಿನಲ್ಲಿ ಬರ ಪರಿಸ್ಥಿತಿ ತಲೆದೋರಿರುವ ಬಗ್ಗೆ ವಿವರಿಸಿದೆ. ಜತೆಗೆ ಕೊಡಗು ಸೇರಿದಂತೆ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಿಗೆ 2000 ಕೋಟಿ ರೂ. ಪ್ಯಾಕೇಜ್ ಘೋಷಿಸಿ ಅನುದಾನ ಬಿಡುಗಡೆ ಮಾಡುವಂತೆ ಮಾಡಿದೆ.
ಕೊಡಗು ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಉಂಟಾಗಿ ಜನ-ಜಾನುವಾರುಗಳು ಜೀವ ಕಳೆದುಕೊಂಡಿದ್ದು, ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ. ಕೃಷಿ, ತೋಟಗಾರಿಕೆ ಹಾಗೂ ವಾಣಿಜ್ಯ ಬೆಳೆಗಳು, ಮೂಲಸೌಕರ್ಯ, ಮನೆಗಳಿಗೆ ತೀವ್ರ ಹಾನಿಯುಂಟಾಗಿದೆ. ಒಟ್ಟು 3705.87 ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದ್ದು, ಪುನರ್ವಸತಿ ಮತ್ತು ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಕೊಡಗು ಮತ್ತಿತರ ಜಿಲ್ಲೆಗಳಿಗೆ 2,000 ಕೋಟಿ ರೂ. ಪ್ಯಾಕೇಜ್ ಘೋಷಿಸಿ ಕೂಡಲೇ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
Related Articles
ಸಿಎಂ ನಿಯೋಗದಿಂದ ರಾಜ್ಯದ ಬರ ಪರಿಸ್ಥಿತಿ ಬಗ್ಗೆಯೂ ಪ್ರಧಾನಿಯವರಿಗೆ ವಿವರಿಸಲಾಯಿತು. ಒಳನಾಡಿನ 17 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, ಈ ಕುರಿತೂ ನಷ್ಟದ ಪ್ರಮಾಣ ಅಂದಾಜು ಮಾಡಲಾಗುತ್ತಿದೆ. ಸೋಮವಾರ ನಡೆಯುವ ಸಂಪುಟ ಉಪಸಮಿತಿ ಸಭೆಯಲ್ಲಿ ನಷ್ಟದ ಕುರಿತು ಪ್ರಸ್ತಾವನೆ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ಹೇಳಿದರು.
Advertisement
ಒಟ್ಟು 30 ಜಿಲ್ಲೆಗಳ ಪೈಕಿ 4 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು, 10 ಜಿಲ್ಲೆಗಳಲ್ಲಿ ವಾಡಿಕೆ ಮಳೆ ಹಾಗೂ 16 ಜಿಲ್ಲೆಗಳಲ್ಲಿ ಮಳೆಯ ಕೊರತೆ ಕಂಡುಬಂದಿದೆ. 176 ತಾಲೂಕುಗಳ ಪೈಕಿ 89 ತಾಲೂಕುಗಳಲ್ಲಿ ಮಳೆಯ ಕೊರತೆಯಿದೆ. ಸೆಪ್ಟೆಂಬರ್ 2ವರೆಗೆ 104 ತಾಲೂಕುಗಳಲ್ಲಿ ಸತತ 3 ವಾರಗಳ ಕಾಲ ಒಣ ಹವೆ ಕಂಡುಬಂದಿದೆ. ಮಳೆ ಕೊರತೆ ಹಾಗೂ ಸತತ 3 ವಾರಗಳ ಒಣ ಹವೆ ಪರಿಸ್ಥಿತಿ ಈ ತಾಲೂಕುಗಳು ಬರ ಪರಿಸ್ಥಿತಿ ಅಂದಾಜಿಸಲು ಅರ್ಹತೆ ಪಡೆದುಕೊಂಡಿವೆ. ಬರ ಪರಿಸ್ಥಿತಿಯ ಪರಿಣಾಮ ಅಳೆಯಲು ವಿವಿಧ ಮಾನದಂಡಗಳಾದ ಬಿತ್ತನೆ ಪ್ರದೇಶ, ತೇವಾಂಶ ಪ್ರಮಾಣ ಮತ್ತು ಇತರ ಅಂಶಗಳ ಅಧ್ಯಯನ ನಡೆಸಲಾಗುತ್ತಿದೆ.
15 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಪ್ರಾಥಮಿಕ ಅಂದಾಜಿನ ಪ್ರಕಾರ ತೇವಾಂಶ ಕೊರತೆಯಿಂದಾಗಿ ಈ ಪ್ರದೇಶಗಳಲ್ಲಿ 15 ಲಕ್ಷ ಹೆಕ್ಟೇರ್‌ಗೂ ಅಧಿಕ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ತೊಂದರೆಯಾಗಿದೆ. ಈವರೆಗೆ ಸಂಭವಿಸಿದ ನಷ್ಟದ ಮೌಲ್ಯ 8000 ಕೋಟಿ ರೂ. ಗಳಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ ಎಂದು ವಿವರಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ಪ್ರಕೃತಿ ವಿಕೋಪದಿಂದ ತೊಂದರೆಗೊಳಗಾದವರಿಗೆ ನೆರವು ನೀಡಲು ಸರ್ಕಾರ ಬದ್ಧವಾಗಿದೆ. ಪ್ರವಾಹ ಪರಿಸ್ಥಿತಿ ಕುರಿತಂತೆ ಸಮೀಕ್ಷೆ ನಡೆಸಲು ತಕ್ಷಣವೇ ಅಧಿಕಾರಿಗಳ ತಂಡವನ್ನು ರಾಜ್ಯಕ್ಕೆ ಕಳುಹಿಸಿಕೊಡಲಾಗುವುದು. ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ರಾಜ್ಯದಿಂದ ವಿವರವಾದ ಪ್ರಸ್ತಾವನೆ ಬಂದ ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು.ಮುಖ್ಯಮಂತ್ರಿಗಳ ನೇತೃತ್ವದ ನಿಯೋಗದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವರಾದ ಆರ್.ವಿ.ದೇಶಪಾಂಡೆ, ಡಿ.ಕೆ.ಶಿವಕುಮಾರ್, ಎಚ್.ಡಿ.ರೇವಣ್ಣ, ಕೃಷ್ಣಬೈರೇಗೌಡ ಇದ್ದರು. ಪ್ರಕೃತಿ ವಿಕೋಪ ಪರಿಹಾರ ಕೋರಿ ಪ್ರಧಾನಿ ಬಳಿ ನಿಯೋಗ ತೆರಳುವ ಬಗ್ಗೆ ಬಿಜೆಪಿಯವರಿಗೆ ಮಾಹಿತಿ ನೀಡಿ ಆಹ್ವಾನಿಸಲಾಗಿತ್ತು. ಆದರೂ ಅವರು ಬರದೆ ಅಸಹಕಾರ ತೋರಿದ್ದಾರೆ. ಮುಖ್ಯಮಂತ್ರಿಗಳ ಕಚೇರಿಯಿಂದಲೇ ನೀಡಿದ ಆಹ್ವಾನಕ್ಕೆ ಸ್ಪಂದಿಸದ ಬಿಜೆಪಿಯವರನ್ನು ಮುತ್ತುಕೊಟ್ಟು ಆಹ್ವಾನಿಸಬೇಕಿತ್ತೇ?
– ಎಚ್.ಡಿ.ರೇವಣ್ಣ, ಲೋಕೋಪಯೋಗಿ ಸಚಿವ