ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕು ಪ್ರಕರಣ ಇಳಿಮುಖವಾಗುತ್ತಿರುವ ಬೆನ್ನಲ್ಲೇ ಒಂಬತ್ತು ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಡೆಂಗ್ಯೂ ಪ್ರಕರಣ ವರದಿಯಾಗತೊಡಗಿದೆ. ಈ ಹಿನ್ನೆಲೆಯಲ್ಲಿ ರೋಗದ ನಿಯಂತ್ರಣ ಮತ್ತು ನಿರ್ವಹಣೆಗಾಗಿ ಕೇಂದ್ರ ಸರ್ಕಾರ ತಜ್ಞರ ತಂಡಗಳನ್ನು ಕಳುಹಿಸಿರುವುದಾಗಿ ತಿಳಿಸಿದೆ.
ಇದನ್ನೂ ಓದಿ:ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ : ಸಿಎಂ ಬೊಮ್ಮಾಯಿ
ಸೋಮವಾರ ದೆಹಲಿಯಲ್ಲಿ ಡೆಂಗ್ಯೂ ಪರಿಸ್ಥಿತಿಯ ಪರಿಶೀಲನಾ ಸಭೆ ನಡೆಸಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ನೀಡಿದ ನಿರ್ದೇಶನದಂತೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಹೇಳಿದೆ.
ಹರ್ಯಾಣ, ಕೇರಳ, ಪಂಜಾಬ್, ರಾಜಸ್ಥಾನ್, ತಮಿಳುನಾಡು, ಉತ್ತರಪ್ರದೇಶ, ಉತ್ತರಾಖಂಡ್ , ದೆಹಲಿ ಮತ್ತು ಜಮ್ಮು ಕಾಶ್ಮೀರದಲ್ಲಿ ಅತೀ ಹೆಚ್ಚು ಡೆಂಗ್ಯೂ ಪ್ರಕರಣ ವರದಿಯಾಗಿದೆ. ಅಧಿಕ ಪ್ರಕರಣ ವರದಿಯಾದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೆರವು ನೀಡುವಂತೆ ಸಚಿವ ಮಾಂಡವಿಯಾ ಅವರು ಸಚಿವಾಲಯಕ್ಕೆ ನಿರ್ದೇಶನ ನೀಡಿದ್ದಾರೆ.
ಒಂಬತ್ತು ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಟ್ಟು 1,16,991 ಡೆಂಗ್ಯೂ ಪ್ರಕರಣ ವರದಿಯಾಗಿದೆ ಎಂದು ಮಾಂಡವಿಯಾ ತಿಳಿಸಿದ್ದಾರೆ. ಕೆಲವು ರಾಜ್ಯಗಳಲ್ಲಿ ಅಧಿಕ ಪ್ರಮಾಣದಲ್ಲಿ ಡೆಂಗ್ಯೂ ಪ್ರಕರಣ ಪತ್ತೆಯಾಗಿದೆ ಎಂದರು.
ಪ್ರಸಕ್ತ ಸಾಲಿನಲ್ಲಿ 15 ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಗರಿಷ್ಠ ಪ್ರಕರಣ ವರದಿಯಾಗುತ್ತಿದೆ. ಈ ರಾಜ್ಯಗಳಲ್ಲಿ ಶೇ.86ರಷ್ಟು ಡೆಂಗ್ಯೂ ಪ್ರಕರಣ ಪತ್ತೆಯಾಗಿದೆ ಎಂದು ಮಾಂಡವಿಯಾ ವಿವರ ನೀಡಿರುವುದಾಗಿ ವರದಿ ತಿಳಿಸಿದೆ.