ನವದೆಹಲಿ: ಕಳೆದ ವರ್ಷ ಕರ್ನಾಟಕದಲ್ಲಿ ಉಂಟಾದ ಮಳೆ ಮತ್ತು ಪ್ರವಾಹ ಪರಿಸ್ಥಿತಿಗೆ ಕೇಂದ್ರ ಸರ್ಕಾರ 941.04 ಕೋಟಿ ರೂ. ಹೆಚ್ಚುವರಿಯಾಗಿ ಪರಿಹಾರ ಬಿಡುಗಡೆ ಮಾಡಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್‌ಡಿಆರ್‌ಎಫ್)ಯಿಂದ ಈ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ.
ಈ ಬಗ್ಗೆ ಕೇಂದ್ರ ಗೃಹ ಮತ್ತು ಸಹಕಾರ ಖಾತೆ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸೋಮವಾರ ನವದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಒಟ್ಟು ಐದು ರಾಜ್ಯಗಳಿಗೆ ಸಭೆಯಲ್ಲಿ ನೆರವು ನೀಡುವುದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.
ರಾಜ್ಯಕ್ಕೆ ನೆರವು ನೀಡಿದ್ದರ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು “ಕಳೆದ ವರ್ಷ ರಾಜ್ಯದಲ್ಲಿ ಉಂಟಾದ ಪ್ರವಾಹ, ಭೂಕುಸಿತ, ಅತಿವೃಷ್ಟಿಯಿಂದ ಹಾನಿಗೆ ಒಳಗಾಗಿರುವ ರಾಜ್ಯಕ್ಕೆ ಹೆಚ್ಚುವರಿಯಾಗಿ ಪರಿಹಾರ ನೀಡಿದೆ.
ರಾಜ್ಯದ ಬಗ್ಗೆ ಪ್ರಧಾನಿಯವರು ವಿಶೇಷ ಕಾಳಜಿ ಹೊಂದಿದ್ದಾರೆ. ಅದಕ್ಕಾಗಿ ಅವರಿಗೆ ಕೃತಜ್ಞತೆ ವ್ಯಕ್ತಪಡಿಸುತ್ತೇನೆ’ ಎಂದು ಬರೆದುಕೊಂಡಿದೆ. ಅಸ್ಸಾಂ, ಮೇಘಾಲಯ, ಹಿಮಾಚಲ ಪ್ರದೇಶ, ನಾಗಾಲ್ಯಾಂಡ್‌ಗೆ ಕೂಡ ಹೆಚ್ಚುವರಿ ನೆರವು ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.