ನವದೆಹಲಿ: ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಸುವುದು ಸೇರಿದಂತೆ ರಾಜಕೀಯ ಪ್ರಕ್ರಿಯೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜೂನ್ 24ರಂದು ಜಮ್ಮು-ಕಾಶ್ಮೀರದ ಎಲ್ಲಾ ಪ್ರಾದೇಶಿಕ ಪಕ್ಷಗಳೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಶನಿವಾರ(ಜೂನ್ 19) ತಿಳಿಸಿದ್ದಾರೆ.
ಇದನ್ನೂ ಓದಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 60,753 ಕೋವಿಡ್ ಪ್ರಕರಣ ಪತ್ತೆ, 2,495 ಸಾವು
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷ ಸಭೆ ನಡೆಯುವ ಸಾಧ್ಯತೆ ಇದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಇತರ ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ ಎಂದು ವರದಿ ಹೇಳಿದೆ.
ಸರ್ವ ಪಕ್ಷ ಸಭೆಯಲ್ಲಿ ಭಾಗವಹಿಸುವಂತೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ, ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ, ಜಮ್ಮು ಮತ್ತು ಕಾಶ್ಮೀರದ ಅಪ್ನಿ ಪಕ್ಷದ ಅಲ್ತಾಫ್ ಬುಖಾರಿ, ಪೀಪಲ್ಸ್ ಕಾನ್ಫರೆನ್ಸ್ ಮುಖ್ಯಸ್ಥ ಸಜ್ಜಾದ್ ಲೋನ್ ಅವರನ್ನು ಆಹ್ವಾನಿಸಿದ್ದು, ಚರ್ಚೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಫಾರೂಖ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಕೇಂದ್ರಾಡಳಿತ ಪ್ರದೇಶ ಎಂದು ಘೋಷಣೆಯಾಗುವ ಮುನ್ನ ಜಮ್ಮು-ಕಾಶ್ಮೀರದಲದಲ್ಲಿ ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಿಸಿದ್ದರು. ಮೇ 24ರಂದು ಕೇಂದ್ರದ ಸಭೆ ಇರುವುದಾಗಿ ಕರೆ ಬಂದಿದ್ದು, ಇನ್ನಷ್ಟೇ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದು ಮೆಹಬೂಬಾ ಪ್ರತಿಕ್ರಿಯೆ ನೀಡಿದ್ದಾರೆ.