ಹೊಸದಿಲ್ಲಿ: ಕರ್ನಾಟಕ ಸರಕಾರದ ವಿರೋಧದ ನಡುವೆಯೇ ಒಂದನೇ ತರಗತಿಯಿಂದ ಎಂಟನೇ ತರಗತಿಗಳಲ್ಲಿ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸಲು ಅವಕಾಶ ನೀಡುವ ಮಸೂದೆಗೆ ಕೇಂದ್ರ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ. ಆದರೆ, ಈ ತರಗತಿಗಳಲ್ಲಿ ಫೇಲ್ ಆದ ವಿದ್ಯಾರ್ಥಿಗಳು ಶೀಘ್ರದಲ್ಲೇ ನಡೆಯುವ ಪೂರಕ ಪರೀಕ್ಷೆ ಬರೆದು ಪಾಸ್ ಆದರೆ ಮುಂದಿನ ತರಗತಿಗೆ ಹೋಗಲು ಅವಕಾಶ ನೀಡಲಾಗಿದೆ. ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಿದ್ಧಪಡಿಸಿರುವ ಶಿಫಾರಸಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದೆ. ಅದಕ್ಕಾಗಿ ಕಡ್ಡಾಯ ಉಚಿತ ಶಿಕ್ಷಣ ಹಕ್ಕು ಕಾಯ್ದೆಯಲ್ಲಿ ಕೊಂಚ ಬದಲಾವಣೆಯನ್ನು ಮಾಡಲಾಗಿದ್ದು, 5 ಮತ್ತು 8ನೇ ತರಗತಿಯಲ್ಲಿ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸಲು ರಾಜ್ಯಗಳಿಗೆ ಅವಕಾಶ ನೀಡಲಾಗಿದೆ. ಇದೇ ವೇಳೆ, ಸಂಪುಟ ಸಭೆಯಲ್ಲಿ 20 ವಿಶ್ವದರ್ಜೆಯ ಶೈಕ್ಷಣಿಕ ಸಂಸ್ಥೆಗಳನ್ನು ಮತ್ತು ಎನ್‌ಆರ್‌ಐಗಳಿಗೆ ಪ್ರಾತಿನಿಧಿಕ ಮತ ಚಲಾವಣೆಗೆ ಸಂಬಂಧಿಸಿದ ಕಾಯ್ದೆಗೆ ಅನುಮೋದನೆ ನೀಡಲಾಗಿದೆ.