ಮೈಸೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಜೂ.25ರಿಂದ ಜು.6ರವರೆಗೆ ನಡೆಯಲಿದ್ದು, ಇದಕ್ಕೆ ಸಂಬಂಧಿಸಿದಂತೆ 19ರಂದು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳ ಸಭೆ ಏರ್ಪಡಿಸಿರುವುದಾಗಿ ಎಂದು ಸಾರ್ವಜನಿಕ ಶಿಕ್ಷಣಾಧಿಕಾರಿ ಪಾಂಡುರಂಗ ತಿಳಿಸಿದರು. ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಡೆದ ಜಿಪಂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಕೊರೊನಾದಿಂದಾಗಿ 849 ಮಂದಿ ವಿದ್ಯಾರ್ಥಿಗಳು ಬೇರೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿಯೇ ಪರೀಕ್ಷೆ ಬರೆಯಲಿದ್ದಾರೆ. ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಮುನ್ನೆಚರಿಕೆಯಾಗಿ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರಕ್ಕೆ ಆದ್ಯತೆ ನೀಡಲಾಗಿದೆ. ಒಂದು ಕೊಠಡಿಯಲ್ಲಿ 18ರಿಂದ 20 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಅನಾರೋಗ್ಯ ಸಮಸ್ಯೆ ಇದ್ದವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲಾಗುವುದು ಎಂದು ಹೇಳಿದರು. ಜಿಲ್ಲೆಯಲ್ಲಿ ಒಟ್ಟು 39,822 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, 139 ಪರೀಕ್ಷಾ ಕೇಂದ್ರಗಳ ಜೊತೆಗೆ ಹೆಚ್ಚುವರಿಯಾಗಿ 12 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದರು.
ಶಾಲೆಗಳು ದುರಸ್ತಿಯಾಗಿಲ್ಲವೇಕೆ?: ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಮಳೆಯಿಂದಾಗಿ ಹಾಳಾದ 418 ಶಾಲೆಗಳಿಗೆ ಸರಕಾರ ದುರಸ್ತಿಗಾಗಿ ತಲಾ 2 ಲಕ್ಷ ರೂ. ಬಿಡುಗಡೆ ಮಾಡಿದೆ. ಅವುಗಳಲ್ಲಿ ಕೇವಲ 125 ಮುಕ್ತಾಯಗೊಂಡಿವೆ ಎಂಬ ಅಧಿಕಾರಿಗಳು ಮಾಹಿತಿಗೆ ಪ್ರತಿಕ್ರಿಯಿಸಿದ ಜಿಪಂ ಸಿಇಒ ಪ್ರಶಾಂತ್‌ಕುಮಾರ್ ಮಿಶ್ರಾ, ಅನುದಾನ ಬಿಡುಗಡೆಯಾಗಿದ್ದರೂ ಕೆಲಸ ಪೂರ್ಣಗೊಳಿಸಿಲ್ಲ. ಮತ್ತೆ ಮಳೆ ಆರಂಭವಾಗಿದೆ. ಪರೀಕ್ಷೆಗಳು ಆರಂಭವಾದರೆ ಹೇಗೆ ನಡೆಸುವುದು ಎಂದು ತರಾಟೆಗೆ ತೆಗೆದುಕೊಂಡರು.
ಹೂ ಬೆಳೆಗಾರರಿಗೆ ಪರಿಹಾರ: ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ರುದ್ರೇಶ್ ಮಾತನಾಡಿ, ಜಿಲ್ಲೆಯಲ್ಲಿ 1650 ಹೂ ಬೆಳೆಗಾರರು ಕೋವಿಡ್ ಸಂದರ್ಭದಲ್ಲಿ ನಷ್ಟ ಅನುಭವಿಸಿರುವ ಬಗ್ಗೆ ಪಟ್ಟಿ ತಯಾರಿಸಿದ್ದು, ಇದಕ್ಕಾಗಿ 64 ಲಕ್ಷ ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ 20 ಲಕ್ಷವನ್ನು ಮೊದಲ ಹಂತದಲ್ಲಿ ಪರಿಹಾರ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಪ್ರಗತಿ ಮಾಹಿತಿ ನೀಡಿದರು. ಜಿಪಂ ಅಧ್ಯಕ್ಷೆ ಪರಿಮಳ, ಉಪಾಧ್ಯಕ್ಷೆ ಗೌರಮ್ಮ ಸೋಮಶೇಖರ್, ಮುಖ್ಯ ಯೋಜನಾಧಿ ಕಾರಿ ಪದ್ಮಕುಮಾರ್ ಪಾಂಡೆ ಇತರರಿದ್ದರು.