ಬೆಂಗಳೂರು: ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತು, ಅ.28ರಂದು 3ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದೆ. ಚಾಮರಾಜಪೇಟೆಯ ಅಖೀಲ ಕರ್ನಾಟಕ ಮಕ್ಕಳ ಕೂಟದಲ್ಲಿ ಸಮ್ಮೇಳನ ನಡೆಯಲಿದ್ದು, ಲೇಖಕ ಸುರೇಶ ಮೂನ ಅಧ್ಯಕ್ಷತೆಯ ಅಮ್ಮೇಳನಕ್ಕೆ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಚಾಲನೆ ನೀಡಲಿದ್ದಾರೆ ಎಂದು ಕ್ಷೇತ್ರ ಕಸಾಪ ಅಧ್ಯಕ್ಷ ಡಾ.ಶ್ರೀಧರ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅಂದು ಬೆಳಗ್ಗೆ 7.30ಕ್ಕೆ ಧ್ವಜಾರೋಹಣ, ಮಲೆಮಹದೇಶ್ವರ ದೇವಸ್ಥಾನದಿಂದ ಅಧ್ಯಕ್ಷರ ಮೆರವಣಿಗೆ ನಡೆಯಲಿದೆ. 11ಕ್ಕೆ ಉದ್ಘಾಟನಾ ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷ ಸುರೇಶ್ ಮೂನ, ಮೇಯರ್ ಸಂಪತ್ ರಾಜ್, ಶಾಸಕ ಜಮೀರ್ ಅಹಮದ್ ಖಾನ್, ಕಸಾಪ ಅಧ್ಯಕ್ಷ ಮನು ಬಳಿಗಾರ, ಬೆಂಗಳೂರು ನಗರ ಕಸಾಪ ಅಧ್ಯಕ್ಷ ಮಾಯಾಣ್ಣ ಮತ್ತಿತರರು ಭಾಗವಹಿಸಲಿದ್ದಾರೆ.
ಮಧ್ಯಾಹ್ನ 1.30ಕ್ಕೆ ಸಾಹಿತ್ಯದಲ್ಲಿ ಭಾವೈಕ್ಯತೆ ಕುರಿತು ಮಹಮ್ಮದ್ ಕಾಸಿಂ ಉಪನ್ಯಾಸ ನೀಡಲಿದ್ದಾರೆ. ಮಧ್ಯಾಹ್ನ 2ಕ್ಕೆ ವಿಜ್ಞಾನ ಗೋಷ್ಠಿ, ಮಧ್ಯಾಹ್ನ 3ಕ್ಕೆ ಕವಿಗೋಷ್ಠಿ ಹಾಗೂ ಸಂಜೆ 4.30ಕ್ಕೆ ಬಹಿರಂಗ ಅಧಿವೇಶನ ನಡೆಯಲಿದೆ ಎಂದು ವಿವರಿಸಿದರು.
ಸಂಜೆ 5ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು ಸಂಸದ ಪಿ.ಸಿ. ಮೋಹನ್, ವಿಧಾನ ಪರಿಷತ್ ಸದಸ್ಯರಾದ ಪಿ.ಆರ್. ರಮೇಶ್, ಸಾಹಿತಿ ಡಾ. ಬೈರಮಂಗಲ ರಾಮೇಗೌಡ, ಐಪಿಎಸ್ ಅಧಿಕಾರಿ ಎಂ. ನಂಜುಡಸ್ವಾಮಿ ಮತ್ತಿತರರು ಉಪಸ್ಥಿತರಿರಲಿದ್ದಾರೆ.
ಸಂಜೆ ಡಾ. ಕಿಕ್ಕೇರಿ ಕೃಷ್ಣಮೂರ್ತಿ ಅವರಿಂದ ಸಂಗೀತ ರಸಸಂಜೆ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 7.30ರಿಂದ 8.30ರವರೆಗೆ ನೂತನ ಕೋಟೆ ಪ್ರೌಢಶಾಲೆ ಆವರಣದಲ್ಲಿ ರಂಗೋಲಿ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಮಾಹಿತಿಗೆ ಮೊ: 73531 56023 ಸಂಪರ್ಕಿಸಬಹುದು.