ನವದೆಹಲಿ: ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ಇಲ್ಲ ಎಂದು ಸುಪ್ರೀಂಕೋರ್ಟ್ ಮಂಗಳವಾರ (ಆಗಸ್ಟ್ 30) ಆದೇಶ ನೀಡಿದ್ದು, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ತಿಳಿಸಿದೆ.
ಇದನ್ನೂ ಓದಿ:ದೆಹಲಿಯಲ್ಲಿ ಅತಿ ಹೆಚ್ಚು ಮಾನವ ಕಳ್ಳಸಾಗಣೆ ಪ್ರಕರಣ: ಎನ್‌ಸಿಆರ್‌ಬಿ ಅಧ್ಯಯನ ವರದಿ
ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಾದ, ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ಈ ಆದೇಶ ನೀಡಿರುವುದಾಗಿ ವರದಿ ತಿಳಿಸಿದೆ.
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸುವಂತಿಲ್ಲ ಎಂದು ಹೇಳಿರುವ ಸುಪ್ರೀಂಕೋರ್ಟ್, ಬೇರೆ ಸ್ಥಳದಲ್ಲಿ ಗಣೇಶೋತ್ಸವ ಆಚರಿಸುವಂತೆ ಸೂಚನೆ ನೀಡಿದೆ.. ಅಲ್ಲದೇ ಈದ್ಗಾ ಮೈದಾನ ವಿಚಾರದ ಕುರಿತಂತೆ ಎರಡು ದಿನಗಳ ಕಾಲ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ನಿರ್ದೇಶನ ನೀಡಿದೆ.
ಈದ್ಗಾ ಮೈದಾನ ವಿಚಾರದ ಕುರಿತು ಈ ಮೊದಲು ಹೈಕೋರ್ಟ್ ನೀಡಿರುವ ಆದೇಶದಂತೆ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸೂಚಿಸಿರುವ ಸುಪ್ರೀಂಕೋರ್ಟ್, ಹೈಕೋರ್ಟ್ ನಲ್ಲಿ ಹೊಸದಾಗಿ ವಿಚಾರಣೆ ನಡೆಸುವಂತೆ ಆದೇಶ ನೀಡಿರುವುದಾಗಿ ವರದಿ ತಿಳಿಸಿದೆ.
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಅನುಮತಿ ನೀಡುವ ಬಗ್ಗೆ ಆ.31ರೊಳಗೆ ರಾಜ್ಯ ಸರ್ಕಾರದ ನಿಲುವು ಏನು ಎಂಬುದನ್ನು ಸ್ಪಷ್ಟಪಡಿಸುವುದಾಗಿ ತಿಳಿಸಿತ್ತು. ಏತನ್ಮಧ್ಯೆ ಸುಪ್ರೀಂಕೋರ್ಟ್ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಆದೇಶ ನೀಡಿರುವುದರಿಂದ ಸರ್ಕಾರ ಯಾವ ನಿಲುವು ತಾಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.