ಆಂಧ್ರಪ್ರದೇಶ: ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಮತ್ತೆ ಮುಖ್ಯಮಂತ್ರಿಯಾಗುವ ಸಂಭ್ರಮದಲ್ಲಿದ್ದಾರೆ, ಅದರಂತೆ ಜೂನ್ 9 ರಂದು ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
ಟಿಡಿಪಿ ನೇತೃತ್ವದ ಮೈತ್ರಿಕೂಟವು 175 ವಿಧಾನಸಭಾ ಕ್ಷೇತ್ರಗಳ ಪೈಕಿ 158 ಕ್ಷೇತ್ರಗಳಲ್ಲಿ ಸ್ಪಷ್ಟ ಮುನ್ನಡೆಯೊಂದಿಗೆ ಪ್ರಚಂಡ ಗೆಲುವಿನತ್ತ ಸಾಗುತ್ತಿದ್ದು ಇದರೊಂದಿಗೆ ಚಂದ್ರಬಾಬು ನಾಯ್ಡು ಆಂಧ್ರಪ್ರದೇಶದಲ್ಲಿ ಮತ್ತೊಮ್ಮೆ ಆಡಳಿತ ನಡೆಸಲು ಸಜ್ಜಾಗಿದ್ದಾರೆ.
ಇದರೊಂದಿಗೆ ಚಂದ್ರಬಾಬು ನಾಯ್ಡು ಬರೋಬ್ಬರಿ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಲಿದ್ದಾರೆ. ಅವರು 1995 ರಿಂದ 2004 ರವರೆಗೆ ಅವಿಭಜಿತ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಟಿಡಿಪಿ ಮುಖ್ಯಸ್ಥರು 2014 ರಲ್ಲಿ ವಿಭಜನೆಯ ನಂತರ ಆಂಧ್ರಪ್ರದೇಶದ ಮೊದಲ ಮುಖ್ಯಮಂತ್ರಿಯಾದರು.
ಮೇ 13ರಂದು ಲೋಕಸಭೆ ಚುನಾವಣೆ ಜತೆಗೆ ವಿಧಾನಸಭೆ ಚುನಾವಣೆಯೂ ನಡೆದಿತ್ತು. ವೈಎಸ್‌ಆರ್‌ಸಿಪಿ ಎಲ್ಲಾ 175 ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೆ, ಟಿಡಿಪಿ 144 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಪವನ್ ಕಲ್ಯಾಣ್ ನೇತೃತ್ವದ ಜೆಎಸ್‌ಪಿ 21 ಸ್ಥಾನಗಳಲ್ಲಿ ಮತ್ತು ಬಿಜೆಪಿ 10 ಸ್ಥಾನಗಳಲ್ಲಿ ಸ್ಪರ್ಧಿಸಿವೆ.
ಇದನ್ನೂ ಓದಿ: Lok Sabha Result: ಚುನಾವಣೋತ್ತರ ಸಮೀಕ್ಷೆಯ ಭವಿಷ್ಯದ ಲೆಕ್ಕಾಚಾರ ತಪ್ಪಿದ್ದು ಎಲ್ಲಿ?