ಬೆಂಗಳೂರು: ಶುಕ್ರವಾರ ಇಡೀ ದಿನ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಜತೆ ಬರ ನಿರ್ವಹಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಶನಿವಾರ ಇಲಾಖಾ ಮುಖ್ಯಸ್ಥರ ಜತೆ ಸಮಾಲೋಚನೆ ನಡೆಸಿದರು.
ಇಲಾಖಾವಾರು ರೂಪಿಸಿರುವ ಯೋಜನೆಗಳು, ಅನುಷ್ಠಾನದ ಹಂತ, ಹಣಕಾಸಿನ ಸ್ಥಿತಿಗತಿ ಕುರಿತು ಮಾಹಿತಿ ಪಡೆದ ಅವರು, ಮುಂದಿನ ಮೂರು ತಿಂಗಳಲ್ಲಿ ಆಡಳಿತದಲ್ಲಿ ಬದಲಾವಣೆ ಕಾಣಿಸಬೇಕಿದೆ. ಅಧಿಕಾರಿ ವರ್ಗ ಇದಕ್ಕಾಗಿ ಶ್ರಮಿಸಬೇಕು ಎಂದು ಹೇಳಿದರು.
ಒಂದು ಕಡೆ ಬರ, ಮತ್ತೂಂದು ಕಡೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಕೇಂದ್ರದ ನೆರವು ಕೋರುವ ಜತೆಗೆ ರಾಜ್ಯ ಸರ್ಕಾರದ ವತಿಯಿಂದ ಪರಿಹಾರ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಹಣಕಾಸಿನ ಬಗ್ಗೆ ತಲೆಕೆಡಿಸಿಕೊಳ್ಳದೆ ತುರ್ತು ಕಾಮಗಾರಿ ಕೈಗೊಳ್ಳಿ. ಅಭಿವೃದ್ಧಿ ಕಾಮಗಾರಿಗಳು ಹಾಗೂ ಈಗಾಗಲೇ ಜಾರಿಯಲ್ಲಿರುವ ಕಾರ್ಯಕ್ರಮಗಳಿಗೆ ಹಣಕಾಸಿನ ತೊಂದರೆಯಾಗದಂತೆ ನೋಡಿಕೊಳ್ಳಿ. ಸಂಪನ್ಮೂಲ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಿ ಎಂದು ಹೇಳಿದರು.
ಬಜೆಟ್ ಮಂಡನೆ ಬಗ್ಗೆ ಚಿಂತನೆ: ಇದೇ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಹೊಸದಾಗಿ ಬಜೆಟ್ ಮಂಡಿಸುವ ಉದ್ದೇಶ ಹೊಂದಿರುವ ಬಗ್ಗೆಯೂ ಅಧಿಕಾರಿಗಳ ಬಳಿ ಚರ್ಚಿಸಿದರು. ಈಗಾಗಲೇ ಏಳು ತಿಂಗಳ ಲೇಖಾನುದಾನ ತೆಗೆದುಕೊಂಡಿದ್ದು, ಮುಂದಿನ ಅಧಿವೇಶನದಲ್ಲಿ ಬಜೆಟ್ ಮಂಡನೆ ಮಾಡಿ ಹೊಸ ಕಾರ್ಯಕ್ರಮ ಘೋಷಣೆ ಮಾಡಿದರೆ ಹಣಕಾಸು ಹೊಂದಾಣಿಕೆ ಸಾಧ್ಯವೇ ಎಂಬ ಬಗ್ಗೆಯೂ ಮಾಹಿತಿ ಪಡೆದುಕೊಂಡರು ಎಂದು ಹೇಳಲಾಗಿದೆ.
ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಯವರ ಸಲಹೆಗಾರ ಎಂ.ಲಕ್ಷ್ಮಿನಾರಾಯಣ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ನಗರಾಭಿವೃದ್ದಿ ಇಲಾಖೆ ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಶಿವಯೋಗಿ ಸಿ.ಕಳಸದ, ಅಪರ ಕಾರ್ಯದರ್ಶಿ ವಿ.ಪಿ.ಇಕ್ಕೇರಿ ಸಭೆಯಲ್ಲಿ ಭಾಗವಹಿಸಿದ್ದರು.