Advertisement

ಬೆಂಗಳೂರು:  ರಾಮನಗರ ಎನ್ನುವ ಹೆಸರು ಬದಲಾಯಿಸಿ, ಬೆಂಗಳೂರು ದಕ್ಷಿಣ ಎನ್ನುವ ಹೆಸರು ನಾಮಕರಣ ಮಾಡಲು ಉಪ ಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ ಯೋಜನೆ ರೂಪಿಸಿದ್ದು, ಈ ಸಂಬಂಧ  ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿ ಅಧಿಕೃತವಾಗಿ ಮನವಿ ಸಲ್ಲಿಸಿದ್ದಾರೆ.

Advertisement

ಮನವಿ ಪತ್ರದಲ್ಲಿ ಏನಿದೆ?
ಮೊದಲು ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು. 1986ರ ಸಾಲಿನಲ್ಲಿ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾಗಿ ಘೋಷಿಸಲಾಯಿತು.

ನಂತರ 2007ರ ಸಾಲಿನಲ್ಲಿ ದೊಡ್ಡಬಳ್ಳಾಪುರ ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾಗಿ ಘೋಷಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು. ಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕುಗಳ ಸೇರಿಸಿಕೊಂಡು ಹೊಸದಾಗಿ ರಾಮನಗರ ಜಿಲ್ಲೆಯಾಗಿ 2007ರಲ್ಲಿ ಘೋಷಿಸಿ, ರಾಮನಗರವನ್ನು ಜಿಲ್ಲಾ ಕೇಂದ್ರವಾಗಿ ಘೋಷಿಸಲಾಯಿತು.

ಪ್ರಸ್ತುತ, ಬೆಂಗಳೂರು ನಗರ ಅಂತಾರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ಹಾರೋಹಳ್ಳಿ ತಾಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ನಮ್ಮ ಚಿಂತನೆಯೂ ಕೂಡ. ಆದ್ದರಿಂದ, ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರ ಇದರ ಜಿಲ್ಲಾ ಕೇಂದ್ರವಾಗಿ ಘೋಷಿಸಲು ಕೋರುತ್ತೇವೆ ಎಂದು ಮನವಿ ಪತ್ರ ಸಲ್ಲಿಸಲಾಗಿದೆ.


ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತನಾಡಿ ” ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಮಾಜಿ ಸಂಸದ ಡಿ.ಕೆ. ಸುರೇಶ್‌, ಶಾಸಕರಾದ ಇಕ್ಬಾಲ್‌ ಹುಸೇನ್‌ ಮುಂತಾದವರು ನನ್ನ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಧಾನಸೌಧದಲ್ಲಿ ಭೇಟಿಯಾಗಿ ಚನ್ನಪಟ್ಟಣ, ರಾಮನಗರ, ಮಾಗಡಿ, ಕನಕಪುರ ಮತ್ತು ಹಾರೋಹಳ್ಳಿ ಸೇರಿಸಿ ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಬೇಕೆಂಬ ಮನವಿ ಸಲ್ಲಿಸಿದೆವು. ಮುಖ್ಯಮಂತ್ರಿಯವರೂ ಕೂಡ ಇದಕ್ಕೆ ಸಹಮತ ವ್ಯಕ್ತಪಡಿಸಿದರು.

Advertisement

ರಾಮನಗರವು ಮೊದಲು ಬೆಂಗಳೂರು ಜಿಲ್ಲೆಯಲ್ಲೇ ಇತ್ತು. ನಂತರ ಪ್ರತ್ಯೇಕ ಜಿಲ್ಲೆಯಾಗಿ ಮಾಡಲಾಯಿತು. ಈಗ ರಾಮನಗರ ಬದಲಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಹೆಸರು ಬದಲಿಸುವಂತೆ ಕೋರಲಾಗಿದೆ. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಆಗಲಿದೆ. ಬಳಿಕ ಹೆಸರು ಬದಲಾವಣೆ ಆಗಲಿದೆ. ಈಗಿರುವ ರಾಮನಗರವೇ ಹೆಡ್ ಕ್ವಾರ್ಟರ್ ಆಗಿರಲಿದೆ. ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ, ಹಾರೋಹಳ್ಳಿ ತಾಲೂಕುಗಳು ಬೆಂಗಳೂರು ದಕ್ಷಿಣದ ವ್ಯಾಪ್ತಿಗೆ ಸೇರಲಿವೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next