ಬೆಳಗಾವಿ: ಹಿಂದೂ ಧರ್ಮದ ರಕ್ಷಣೆಗೆ ಅಪ್ರತಿಮ ಹೋರಾಟ ಮಾಡಿರುವ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯನ್ನು ರಾಜಹಂಗಡದಲ್ಲಿ ಪ್ರತಿಷ್ಠಾಪಿಸಿ ರುವುದು ಸಂತಸ ತಂದಿದೆ. ಇದೊಂದು ಸುಂದರ ಪ್ರವಾಸಿ ತಾಣವಾಗಬೇಕು. ಈ ಹಿನ್ನೆಲೆಯಲ್ಲಿ ರಾಜಹಂಸಗಡ ಕೋಟೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚುವರಿಯಾಗಿ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆಆರ್‌ಐಡಿಎಲ್, ಪ್ರವಾಸೋದ್ಯಮ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಗುರುವಾರ ರಾಜಹಂಸಗಡ ಕೋಟೆ ಆವರಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ಈ ಅನುದಾನವನ್ನು ರಾಜಹಂಸಗಡ ಕೋಟೆ ಅಭಿವೃದ್ಧಿಗೆ ಪೂರಕವಾಗಿ ಸಮುದಾಯ ಭವನ, ಪ್ರವಾಸಿಗರಿಗೆ ವಿಶ್ರಾಂತಿ ಗೃಹ ನಿರ್ಮಾಣ ಜತೆಗೆ ಇತರ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು. ರಾಜಹಂಸಗಡ ಕೋಟೆಯ ಅಭಿವೃದ್ಧಿಗೆ 2008ರಲ್ಲಿ ಆಗಿನ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು 14 ಕೋಟಿ ರೂ. ಮಂಜೂರು ಮಾಡಿದ್ದರು. ಅಂದಿನ ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ಅವರ ಮೇಲೆ ಒತ್ತಡ ಹಾಕಿದ ಇಲ್ಲಿಯ ಶಾಸಕರಾಗಿದ್ದ ಸಂಜಯ ಪಾಟೀಲ್ ಪ್ರಯತ್ನದ ಫಲವಾಗಿ 4.5 ಕೋಟಿ ರೂ. ವೆಚ್ಚದಲ್ಲಿ ಕೋಟೆಯ ಆವರಣದಲ್ಲಿ ಮೂಲಸೌಕರ್ಯ ಒದಗಿಸಲಾಗಿತ್ತು ಎಂದರು.
ರಾಜಹಂಸಗಡ ಕೋಟೆ ಅದ್ಭುತ ವಾಗಿದೆ. ಶಿವಾಜಿ ಮಹಾರಾಜರ ಕಾಲದ ಗತವೈಭವ, ಸಂಸ್ಕೃತಿ ಸಾರುವ ಕೋಟೆಯಾಗಿದೆ. ಶಿವಾಜಿ ಮಹಾರಾಜರ ವ್ಯಕ್ತಿತ್ವದ ತಕ್ಕ ಹಾಗೆ ಮೂರ್ತಿ ಪ್ರತಿಷ್ಠಾಪನೆಯಾಗಿದೆ. ನನಗೆ ಇದು ಮೊದಲೇ ಗೊತ್ತಾಗಿದ್ದರೆ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಕ್ರಮ ಕೈಗೊಳ್ಳುತ್ತಿದ್ದೆ. ಕೆಲವರು ಏನೂ ಅಭಿವೃದ್ಧಿ ಮಾಡದೆ ಕೇವಲ ಮಾತಿನಲ್ಲೇ ಎಲ್ಲ ಅಭಿವೃದ್ಧಿಯನ್ನು ನಾವೇ ಮಾಡಿದ್ದೇವೆ ಎಂದು ಹೇಳುತ್ತ ತಿರುಗಾಡುತ್ತಾರೆ. ಆದರೆ ನಾವು ಹಣ ಬಿಡುಗಡೆ ಮಾಡಿ, ಅಭಿವೃದ್ಧಿ ಮಾಡಿ ಮಾತನಾಡುತ್ತೇವೆ ಎಂದು ಬೆಳಗಾವಿ ಗ್ರಾಮೀಣ ಶಾಸಕರಿಗೆ ತಿರುಗೇಟು ನೀಡಿದರು.
ಲಕ್ಷ್ಮೀ ಹೆಬ್ಟಾಳ್ಕರ್ ಗೈರು
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಬೇಕಿದ್ದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್ ಗೈರು ಹಾಜರಿ ಎದ್ದು ಕಾಣುತ್ತಿತ್ತು. ಹೆಬ್ಟಾಳ್ಕರ್ ಅವರು ಕ್ಷೇತ್ರದ ಶಾಸಕರಾಗಿ ಬರಬೇಕಿತ್ತು ಎಂಬ ಮಾತುಗಳು ಕೇಳಿಬಂದವು. ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಸಂಸದೆ ಮಂಗಲಾ ಅಂಗಡಿ, ಶಾಸಕರಾದ ರಮೇಶ ಜಾರಕಿಹೊಳಿ, ಅನಿಲ್ ಬೆನಕೆ, ಅಭಯ ಪಾಟೀಲ್, ಪ್ರಾದೇಶಿಕ ಆಯುಕ್ತರಾದ ಎಂ.ಜಿ. ಹಿರೇಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಇದ್ದರು.