Advertisement

ಮತಗಟ್ಟೆ ಮೂಲ ಸೌಕರ್ಯ ಪರಿಶೀಲಿಸಿ

07:27 AM Feb 16, 2019 | |

ಚಾಮರಾಜನಗರ: ಮುಂಬರುವ ಲೋಕಸಭಾ ಚುನಾವಣೆಗಾಗಿ ಈಗಾಗಲೇ ಗುರುತಿಸಲಾಗಿರುವ ಮತಗಟ್ಟೆಗಳಲ್ಲಿ ಮೂಲಸೌಕರ್ಯ ಪರಿಶೀಲಿಸಿ ಮೂರು ದಿನಗಳೊಳಗೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಸೂಚನೆ ನೀಡಿದರು.

Advertisement

ನಗರದ ಜಿಪಂ ಸಭಾಂಗಣದಲ್ಲಿ, ಲೋಕಸಭಾ ಚುನಾವಣೆಗೆ ನಿಯೋಜಿತರಾಗಿರುವ ಸಹಾಯಕ ಚುನಾವಣಾಧಿಕಾರಿಗಳು, ತಹಶೀಲ್ದಾರ್‌, ಸೆಕ್ಟರ್‌ ಅಧಿಕಾರಿಗಳು ಮತ್ತು ಪೊಲೀಸರಿಗೆ ಹಮ್ಮಿಕೊಳ್ಳಲಾಗಿದ್ದ ತರಬೇತಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಲೋಕಸಭೆ ಚುನಾವಣೆ ಸಂಬಂಧ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಮತಗಟ್ಟೆಗಳಿಗೆ ಸೆಕ್ಟರ್‌ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಬೇಕು. ಮತಗಟ್ಟೆಗಳಲ್ಲಿ ಕುಡಿಯುವ ನೀರು, ವಿದ್ಯುತ್‌, ಶೌಚಾಲಯ, ರ್‍ಯಾಂಪ್‌ ಇನ್ನಿತರೆ ವ್ಯವಸ್ಥೆಗಳು ಸರಿ ಇದೆಯೇ ಎಂಬ ಬಗ್ಗೆ ಪರಿಶೀಲಿಸಬೇಕು. ಮೂಲ ಸೌಕರ್ಯ ಕೊರತೆಯಿದ್ದಲ್ಲಿ ಸರಿಪಡಿಸಲು ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು. 

ಚುನಾವಣೆ ದಿನಾಂಕ ಘೋಷಣೆಯಾದ ತಕ್ಷಣವೇ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಹೀಗಾಗಿ ಸೆಕ್ಟರ್‌ ಅಧಿಕಾರಿಗಳೂ ಸೇರಿದಂತೆ ಎಲ್ಲರೂ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಆದಷ್ಟೂ ಮೊದಲೇ ಮಾದರಿ ನೀತಿ ಸಂಹಿತೆ ಅನುಷ್ಠಾನ ಸಂಬಂಧ ಚುನಾವಣಾ ಆಯೋಗ ನೀಡಿರುವ ಸೂಚನೆ, ಮಾರ್ಗದರ್ಶನಗಳ ಬಗ್ಗೆ ಅಧಿಕಾರಿಗಳು ತಿಳಿದುಕೊಂಡಿರಬೇಕು ಎಂದು ಹೇಳಿದರು. 

ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಪ್ರಕಾರ ಚುನಾವಣಾ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿಗಳು ಚುನಾವಣಾ ಆಯೋಗದ ಅಡಿಯಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ. ಚುನಾವಣೆ ಘೋಷಣೆ ದಿನಾಂಕದಿಂದ ನೀತಿ ಸಂಹಿತೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸಬೇಕಾಗುತ್ತದೆ ಎಂದು ಹೇಳಿದರು.

Advertisement

ಸಾರ್ವಜನಿಕರಿಗೆ ವಿದ್ಯುನ್ಮಾನ ಮತಯಂತ್ರಗಳು, ವಿವಿ ಪ್ಯಾಟ್‌ ಬಗ್ಗೆ ಜಾಗೃತಿ ಮೂಡಿಸುವುದು ಸಹಾ ಸೆಕ್ಟರ್‌ ಅಧಿಕಾರಿಗಳ ಕರ್ತವ್ಯವಾಗಿದೆ. ಮತದಾರರ ಪಟ್ಟಿ ಹಾಗೂ ಚುನಾವಣಾ ವಿಷಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ದೂರು, ಅಹವಾಲುಗಳನ್ನು ಉಚಿತವಾಗಿ ಸಹಾಯವಾಣಿ ಸಂಖ್ಯೆ 1950ಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆಯೂ ಜನರಿಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಕಾವೇರಿ ತಿಳಿಸಿದರು. 

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಧಮೇಂಧರ್‌ ಕುಮಾರ್‌ ಮೀನಾ ಮಾತನಾಡಿ, ಚುನಾವಣಾ ಅವಧಿಯಲ್ಲಿ ಅಧಿಕಾರಿಗಳು ಸಮನ್ವಯ ಸಹಕಾರದಿಂದ ಕರ್ತವ್ಯ ನಿರ್ವಹಿಸಬೇಕಿದೆ. ಇದರಿಂದ ಚುನಾವಣಾ ಕೆಲಸವನ್ನು ಯಶಸ್ವಿಯಾಗಿ ಪೂರೈಸಬಹುದು ಎಂದು ವಿವರಿಸಿದರು.

ಜಿಲ್ಲಾ ತರಬೇತಿ ನೋಡಲ್‌ ಅಧಿಕಾರಿ ವೃಷಭೇಂದ್ರ ಕುಮಾರ್‌ ಹಾಗೂ ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿ ಪೊ›.ಗಣೇಶ್‌, ಪವರ್‌ ಪಾಯಿಂಟ್‌ ಮೂಲಕ ಅಧಿಕಾರಿಗಳಿಗೆ ಚುನಾವಣಾ ಸಂಬಂಧ ನಿರ್ವಹಿಸಬೇಕಿರುವ ಕರ್ತವ್ಯಗಳ ಕುರಿತು ವಿವರಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್‌, ಉಪ ವಿಭಾಗಾಧಿಕಾರಿ ನಿಖೀತಾ, ಚಿನ್ನಸ್ವಾಮಿ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next