ಮಡಿಕೇರಿ :ಮಡಿಕೇರಿ ನಗರಕ್ಕೆ ಶಾಶ್ವತ ಕುಡಿಯುವ ನೀರು ಪೂರೈಸುವ ಕುಂಡಾಮೇಸ್ತ್ರಿ ಯೋಜನೆಯ ಚೆಕ್ ಡ್ಯಾಂ ಕಾಮಗಾರಿಯನ್ನು ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ ಅವರು ಪರಿಶೀಲಿಸಿದರು.
ಮಡಿಕೇರಿ ತಾಲೂಕಿನ ಕುಂಡಾಮೇಸ್ತ್ರಿ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ವೀಕ್ಷಣೆ ಮಾಡಿದ ವಿಧಾನ ಪರಿಷತ್ ಸದಸ್ಯರು ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‌ಗೆ ಸೂಚಿಸಿದರು.
ಈಗಾಗಲೇ ಮಡಿಕೇರಿ ನಗರಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಕುಂಡಾಮೇಸ್ತ್ರಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಚೆಕ್‌ಡ್ಯಾಂ ಕಾಮಗಾರಿ ಪ್ರಗತಿಯಲ್ಲಿದೆ. ಕೂಡಲೇ ಕಾಮಗಾರಿ ಪೂರ್ಣಗೊಳಿಸಲು ಸಂಬಂಧಪಟ್ಟ ಎಂಜಿನಿಯರ್‌ಗೆ ನಿರ್ದೇ ಶನ ನೀಡಿದರು.
ಕುಂಡಾಮೇಸ್ತ್ರಿ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಸಚಿವರು, ಶಾಸಕರು ಮತ್ತು ಸ್ಥಳೀಯ ಜನಪ್ರತಿನಿಧಿಗಳ ಜತೆ ಚರ್ಚಿಸಲಾಗುವುದು, ಎಲ್ಲರ ಸಹಕಾರ ಪಡೆದು ಯೋಜನ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಸುನೀಲ್ ಸುಬ್ರಮಣಿ ಅವರು ಹೇಳಿದರು.
ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎಇಇ ಪ್ರಸನ್ನ ಅವರು ಕುಂಡಾಮೇಸ್ತ್ರಿ ಕುಡಿಯುವ ನೀರು ಯೋಜನೆಗೆ 30 ಕೋಟಿ ರೂ. ಅಂದಾಜು ಮಾಡಲಾಗಿದೆ. ಇದುವರೆಗೆ 21 ಕೋಟಿ ರೂ. ಬಿಡುಗಡೆಯಾಗಿದ್ದು, 5.47 ಕೋಟಿ ರೂ. ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಿಸಲಾಗುತ್ತಿದೆ. 2016 ರಿಂದಲೇ ಕುಂಡಾಮೇಸ್ತ್ರಿಯಿಂದ ಕುಡಿಯುವ ನೀರನ್ನು ಕೂಟುಹೊಳೆಗೆ ಪೂರೈಕೆ ಮಾಡಲಾಗುತ್ತಿದೆ ಎಂದರು. ಬಳಿಕ ಸುನೀಲ್ ಸುಬ್ರಮಣಿ ಅವರು ಕೂಟುಹೊಳೆ, ಹಳೇ ಖಾಸಗಿ ಬಸ್ ನಿಲ್ದಾಣ ಬಳಿಯ ತಡೆಗೋಡೆ ನಿರ್ಮಾಣ ಕಾಮಗಾರಿ ಮತ್ತು ಪಂಪಿನ ಕೆರೆಗೆ ಭೇಟಿ ನೀಡಿ ಪರಿಶೀಲಿಸಿದರು.
ನಗರಸಭೆ ಪೌರಾಯುಕ್ತರಾದ ಎಂ.ಎಲ್.ರಮೇಶ್, ಪಿ.ಡಿ.ಪೊನ್ನಪ್ಪ, ಟಿ.ಎಸ್.ಪ್ರಕಾಶ್, ಕೆ.ಎಸ್.ರಮೇಶ್, ಶಿವಕುಮಾರಿ, ಅನಿತಾ ಪೂವಯ್ಯ, ಸವಿತಾ ರಾಕೇಶ್, ಮಹೇಶ್ ಜೈನಿ, ಅರುಣ್ ಕುಮಾರ್, ಮನು ಮಂಜುನಾಥ್, ಬಿ.ಕೆ.ಜಗದೀಶ್, ನಗರಸಭೆ ಎಇಇ ನಾಗರಾಜು, ವನಿತಾ ಉಪಸ್ಥಿತರಿದ್ದರು.