ರಾಂಚಿ: ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ದಿನಗಳ ಹಿಂದೆ ಅಮಾನತುಗೊಂಡಿದ್ದ ಐಪಿಎಸ್ ಅಧಿಕಾರಿ ಜಿ.ಪಿ. ಸಿಂಗ್ ವಿರುದ್ಧ ಚತ್ತೀಸ್ ಗಢ್ ಪೊಲೀಸರು ದೇಶದ್ರೋಹದ ಪ್ರಕರಣ ದಾಖಲಿಸಿದ್ದಾರೆ. ಇತ್ತೀಚೆಗಷ್ಟೇ ಸಿಂಗ್ ಗೆ ಸೇರಿದ ಸ್ಥಳಗಳ ಮೇಲೆ ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮತ್ತು ಆರ್ಥಿಕ ಅಪರಾಧಗಳ ವಿಭಾಗ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿ ವಶಕ್ಕೆ ಪಡೆದಿತ್ತು ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಕ್ರಿಕೆಟಿಗ ಹರ್ಭಜನ್ ಸಿಂಗ್!
ಪೊಲೀಸರ ಮಾಹಿತಿ ಪ್ರಕಾರ, ಸಿಂಗ್ ಅವರು ಆಡಳಿತಾರೂಢ ಸರ್ಕಾರ ಮತ್ತು ಜನಪ್ರತಿನಿಧಿಗಳ ವಿರುದ್ಧ ದ್ವೇಷ ಹರಡುವ ಪಿತೂರಿಯಲ್ಲಿ ಭಾಗಿಯಾಗಿದ್ದಾರೆಂಬ ಬಗ್ಗೆ ದಾಳಿ ವೇಳೆ ವಶಪಡಿಸಿಕೊಂಡ ದಾಖಲೆಗಳಿಂದ ತಿಳಿದುಬಂದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ರಾಯ್ ಪುರ್ ನಗರದ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಸಿಂಗ್ ವಿರುದ್ಧ ಐಪಿಸಿ ಸೆಕ್ಷನ್ 124-ಎ (ದೇಶದ್ರೋಹ) ಮತ್ತು 153-ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ರಾಯ್ ಪುರ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಯಾದವ್ ತಿಳಿಸಿದ್ದಾರೆ.
ದಾಳಿಯ ವೇಳೆ ಎಸಿಬಿ/ಇಒಡಬ್ಲ್ಯು ವಶಪಡಿಸಿಕೊಂಡ ದಾಖಲೆಗಳನ್ನು ಆಧರಿಸಿ ಪೊಲೀಸರಿಗೆ ಸಲ್ಲಿಸಿದ ವರದಿಯ ಮೇಲೆ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ವರದಿ ವಿವರಿಸಿದೆ. ಪ್ರಕರಣದ ತನಿಖೆ ಇನ್ನೂ ಮುಂದುವರಿದಿರುವುದಾಗಿ ವರದಿ ಹೇಳಿದೆ.