ರಾಯ್ ಪುರ್: ಇತ್ತೀಚೆಗೆ ಛತ್ತೀಸ್ ಗಢದ ಸುರ್ಗುಜಾ ಜಿಲ್ಲೆಯಲ್ಲಿ ಸರ್ಕಾರಿ ಪ್ರಾಯೋಜಿತ ಸಂತಾನಹರಣ ಶಸ್ತ್ರಚಿಕಿತ್ಸೆ ಶಿಬಿರ ನಡೆಸಿದ ವೇಳೆ ಸರ್ಜನ್ ಏಳು ಗಂಟೆಯಲ್ಲಿ 101 ಮಹಿಳೆಯರಿಗೆ ಟ್ಯೂಬೆಕ್ಟಮಿ (ಸ್ತ್ರೀಯರ ಸಂತಾನ ನಿರೋಧಕ ಶಸ್ತ್ರ ಚಿಕಿತ್ಸೆ) ಶಸ್ತ್ರಚಿಕಿತ್ಸೆ ನಡೆಸಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಛತ್ತೀಸ್ ಗಢ್ ಸರ್ಕಾರ ಆದೇಶ ಹೊರಡಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ನಂದನಕಾನನ್ ಮೃಗಾಲಯದಿಂದ ರಾಯಲ್ ಬೆಂಗಾಲ್ ಹುಲಿ ಪರಾರಿ, ಪ್ರವಾಸಿಗರಲ್ಲಿ ಆತಂಕ
ಛತ್ತೀಸ್ ಗಢ ರಾಜಧಾನಿ ರಾಯ್ ಪುರ್ ನಿಂದ ಸುಮಾರು 300 ಕಿಲೋ ಮೀಟರ್ ದೂರದಲ್ಲಿರುವ ಮೈನ್ ಪತ್ ಡೆವಲಪ್ ಮೆಂಟ್ ಬ್ಲಾಕ್ ನ ನರ್ಮದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಗಸ್ಟ್ 27ರಂದು ಮಹಿಳೆಯರಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಶಿಬಿರ ಆಯೋಜಿಸಲಾಗಿತ್ತು.
ಸಂತಾನಹರಣ ಶಸ್ತ್ರಚಿಕಿತ್ಸೆ ಶಿಬಿರದಲ್ಲಿ ಅಕ್ರಮ ನಡೆದಿರುವುದಾಗಿ ಸ್ಥಳೀಯ ಪತ್ರಿಕೆಗಳು ವರದಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಇಲಾಖೆ ಸರ್ಜನ್ ಹಾಗೂ ಸ್ಥಳೀಯ ಆರೋಗ್ಯ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿರುವುದಾಗಿ ವರದಿ ತಿಳಿಸಿದೆ.
ಸಂತಾನಹರಣ ಶಸ್ತ್ರಚಿಕಿತ್ಸೆಯ ಶಿಬಿರದ ಬಗ್ಗೆ ಕೇಳಿ ಬಂದ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಆದೇಶ ಹೊರಡಿಸಲಾಗಿದೆ. ತನಿಖೆಯ ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಡಾ.ಅಲೋಕ್ ಶುಕ್ಲಾ ತಿಳಿಸಿದ್ದಾರೆ.
ಅಂದು ಸರ್ಕಾರಿ ಪ್ರಾಯೋಜಿತ ಶಿಬಿರದಲ್ಲಿ ಒಟ್ಟು 101 ಮಹಿಳೆಯರಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಯರ ಆರೋಗ್ಯ ಸಹಜಸ್ಥಿತಿಯಲ್ಲಿರುವುದಾಗಿ ವರದಿಯಲ್ಲಿ ತಿಳಿದುಬಂದಿದೆ. ಸರ್ಕಾರದ ಮಾರ್ಗಸೂಚಿ ಪ್ರಕಾರ, ಶಿಬಿರದಲ್ಲಿ ಸರ್ಜನ್ ಒಂದು ದಿನಕ್ಕೆ 30 ಶಸ್ತ್ರಚಿಕಿತ್ಸೆ ಮಾಡಬೇಕಾಗಿದೆ. ಆದರೆ ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ 101 ಮಹಿಳೆಯರಿಗೆ ಶಸ್ತ್ರಚಿಕಿತ್ಸೆ ಮಾಡಲಾಯಿತು ಎಂಬ ಬಗ್ಗೆ ತನಿಖೆ ನಡೆಸಲು ಆದೇಶ ನೀಡಲಾಗಿದೆ ಎಂದು ಶುಕ್ಲಾ ಮಾಹಿತಿ ನೀಡಿದ್ದಾರೆ.