ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ರಾಜ್ಯಪಾಲ ವಜುಬಾಯಿ ವಾಲಾ ಅವರನ್ನು ಭೇಟಿ ಮಾಡಿ ಹೊಸ ವರ್ಷದ ಶುಭಾಶಯ ಕೋರಿದರು.
ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಸೇರಿದಂತೆ ಹಿರಿಯ ಐಎಎಸ್ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿ ಹೊಸ ವರ್ಷದ ಶುಭಕೋರಿದರು.
ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಮುಖಂಡರು ಶಾಸಕರು ಭೇಟಿ ಮಾಡಿ ಹೊಸ ವರ್ಷದ ಶುಭಾಶಯ ತಿಳಿಸಿದರು. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನಿವಾಸಕ್ಕೆ ಸಚಿವ ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಸದಸ್ಯೆ ಮೋಟಮ್ಮ, ಸಂಸದ ಕೆ.ಸಿ. ರಾಮಮೂರ್ತಿ, ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮ ಪ್ರಭು ಪಾಟೀಲ್ ಸೇರಿದಂತೆ ಅನೇಕ ಮುಖಂಡರು ಹೊಸ ವರ್ಷದ ಶುಭಾಶಯ ವಿನಿಮಯ ಮಾಡಿಕೊಂಡರು.
ಸಿಎಂಗೆ ರಾಹುಲ್ ಶುಭಾಶಯ:ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದೂರವಾಣಿ ಕರೆ ಮಾಡಿ ಹೊಸ ವರ್ಷದ ಶುಭಾಶಯ ಕೋರಿದ್ದು, ಹತ್ತು ನಿಮಿಷಗಳ ಕಾಲ ಮುಖ್ಯಮಂತ್ರಿ ಜೊತೆಗೆ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ರಾಜ್ಯ ಪ್ರವಾಸದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ರಾಹುಲ್ ಗಾಂಧಿ 2018 ರ ವಿಧಾನಸಭೆ ಚುನಾವಣೆ ಚಾಲೆಂಜ್ ಆಗಿ ತೆಗೆದುಕೊಳ್ಳಲು ಸೂಚನೆ ನೀಡಿದ್ದಾರೆ.ಅಲ್ಲದೇ ರಾಜ್ಯದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಭೇಟಿಯ ಬಗ್ಗೆಯೂ ರಾಹುಲ್ ಗಾಂಧಿ ಮುಖ್ಯಮಂತ್ರಿಯಿಂದ ಮಾಹಿತಿ ಪಡೆದುಕೊಂಡಿದ್ದಾರೆ.