Advertisement

ಆರೋಗ್ಯ ಇಲಾಖೆಗೆ ಮುಖ್ಯಮಂತ್ರಿ “ತುರ್ತು ಚಿಕಿತ್ಸೆ’

10:25 PM Jun 13, 2023 | Team Udayavani |

ಬೆಂಗಳೂರು: ಅಧಿಕಾರ ವಹಿಸಿಕೊಂಡು 3 ವಾರಗಳಲ್ಲೇ ಆಡಳಿತ ಯಂತ್ರವನ್ನು ಚುರುಕುಗೊಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿನಕ್ಕೊಂದು ಇಲಾಖೆಗೆ ಬಿಸಿ ಮುಟ್ಟಿಸುತ್ತಿದ್ದಾರೆ. ಮಂಗಳವಾರ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶ
ಸಮರ್ಪಕವಾಗಿ ಜಾರಿಯಾಗದೆ ತಜ್ಞ ವೈದ್ಯರ ಕೊರತೆ ಮತ್ತು ಎಂಆರ್‌ಐ ಹಾಗೂ ಡಯಾಲಿಸಿಸ್‌ ಯಂತ್ರಗಳನ್ನು ತಾಲೂಕು ಆಸ್ಪತ್ತೆಗಳಲ್ಲಿ ಅಳವಡಿಸದಿರುವುದಕ್ಕೆ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

Advertisement

ಅಲ್ಲದೇ ಸರಕಾರಿ ಆಸ್ಪತ್ರೆಗಳಲ್ಲಿ ಬಡಜನರಿಗೆ ಈ ವಿಶೇಷ ಸೇವೆಗಳನ್ನು ಒದಗಿಸದಿದ್ದರೆ ಅವರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಹೇಗೆ ಸಾದ್ಯ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಮೂರು ತಿಂಗಳಲ್ಲಿ ವ್ಯವಸ್ಥೆ ಸರಿಪಡಿಸಬೇಕು. ಸರಕಾರಿ ಆಸ್ಪತ್ರೆಗಳಿಗೆ ಜನ ಬರಬೇಕು. ಮೂರು ತಿಂಗಳಲ್ಲಿ ಮತ್ತೂಮ್ಮೆ ಪರಿಶೀಲನೆ ನಡೆಸುತ್ತೇನೆ. ಇದೇ ಪರಿಸ್ಥಿತಿ ಮುಂದುವರಿದರೆ ಅಧಿಕಾರಿಗಳೇ ಜವಾಬ್ದಾರರು ಎಂದು ಎಚ್ಚರಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಸುದೀರ್ಘ‌ವಾಗಿ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ, ರಾಷ್ಟ್ರೀಯ ಆರೋಗ್ಯ ಅಭಿಯಾನದ ಕೊರತೆಗಳನ್ನು ಗುರುತಿಸಿ ಮುಂದಿನ ಸಭೆ ವೇಳೆಗೆ ಲೋಪಗಳನ್ನು ಸರಿಪಡಿಸಬೇಕೆಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಇದೇ ವೇಳೆ ಸುವರ್ಣ ಆರೋಗ್ಯ ಟ್ರಸ್ಟ್‌, ಆರೋಗ್ಯ ಸುರಕ್ಷಾ ಟ್ರಸ್ಟ್‌ ಮತ್ತು ಆರೋಗ್ಯ ಸೇವೆಗಳ ಲಭ್ಯತೆಯ ಕುರಿತು ಪ್ರತ್ಯೇಕವಾಗಿ ಪರಿಶೀಲನೆ ನಡೆಸಿದರು.

ಹುದ್ದೆಗಳ ಭರ್ತಿಗೆ ಕ್ರಮ
ರಾಷ್ಟ್ರೀಯ ಆರೋಗ್ಯ ಮಿಷನ್‌ನ ಅನುದಾನ ಸಕಾಲದಲ್ಲಿ ವೆಚ್ಚವಾಗದಿರುವುದನ್ನು ಗುರುತಿಸಿದ ಮುಖ್ಯಮಂತ್ರಿಯವರು, ರಾಷ್ಟ್ರೀಯ ಆರೋಗ್ಯ ಮಿಷನ್‌ನಡಿ ಆರೋಗ್ಯ ವ್ಯವಸ್ಥೆ ಬಲಪಡಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು. ಈ ಯೋಜನೆಯಡಿ ಶೇ. 52ರಷ್ಟು ತಜ್ಞ ವೈದ್ಯರ ಕೊರತೆಯಿದೆ, ಶೇ. 31ರಷ್ಟು ಎಂಬಿಬಿಎಸ್‌ ವೈದ್ಯರಕೊರತೆ ಹಾಗೂ ಶೇ. 18ರಷ್ಟು ನರ್ಸ್‌ ಕೊರತೆ ಇರುವುದನ್ನು ಗಮನಿಸಿದ ಮುಖ್ಯಮಂತ್ರಿಗಳು, ಇವರಿಗೆ ವೇತನ ಹೆಚ್ಚಳ ಮಾಡುವ ಬಗ್ಗೆ ಪರಿಶೀಲಿಸಿ, ಈ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌, ಗೃಹ ಸಚಿವ ಡಾ| ಜಿ. ಪರಮೇಶ್ವರ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್‌ ಅಹ್ಮದ್‌, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಸೇರಿ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

ನಿಗಮಕ್ಕೆ ಒಂದು ವರ್ಷಕ್ಕೆ 5 ಎಂಡಿ
ನಿರಂತರವಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಪ್ರಗತಿ ಪರಿಶೀಲನೆ ಮಾಡಬೇಕು. ನಿಗದಿತ ಗುರಿ ಸಾಧನೆಯನ್ನು ಖಾತರಿಪಡಿಸಬೇಕು ಹಾಗೂ ಅನುದಾನ ಸಕಾಲದಲ್ಲಿ ವೆಚ್ಚ ಮಾಡಬೇಕು. ಕಳೆದ ಒಂದು ವರ್ಷದಲ್ಲಿ ನಿಗಮಕ್ಕೆ 5 ಎಂ.ಡಿ. ನೇಮಕ ಮಾಡಿರುವುದರಿಂದ ಸಮಸ್ಯೆ ಆಗಿರುವುದನ್ನು ಅಧಿಕಾರಿಗಳಿಂದ ಕೇಳಿ ತಿಳಿದ ಮುಖ್ಯಮಂತ್ರಿಗಳು, ನಮ್ಮ ಸರಕಾರದ ಅವಧಿಯಲ್ಲಿ ಈ ರೀತಿ ಆಗುವುದಿಲ್ಲ ಎಂದು ಭರವಸೆ ನೀಡಿದ್ದಲ್ಲದೆ, ನಿಗಮದ ವ್ಯವಸ್ಥಾಪಕ ನಿರ್ದೇಶಕರು ಕನಿಷ್ಠ 2 ವರ್ಷ ಸೇವೆ ಸಲ್ಲಿಸಬೇಕು ಎಂದು ಸೂಚಿಸಿದರು.

ಸಿಎಂ ನೀಡಿದ ಇತರ ಸೂಚನೆಗಳು
ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಎಂಆರ್‌ಐ ಸ್ಕ್ಯಾನಿಂಗ್‌ ಹಾಗೂ ಡಯಾಲಿಸಿಸ್‌ ಯಂತ್ರಗಳನ್ನು ಅಳವಡಿಸಬೇಕು. ಈ ಎಲ್ಲ ಸೇವೆಗಳನ್ನು ಒದಗಿಸಲು ತಂತ್ರಜ್ಞರನ್ನು ನೇಮಕ ಮಾಡಬೇಕು. ಗ್ರಾಮೀಣ ಪ್ರದೇಶದಲ್ಲಿ ವೈದ್ಯರಿಗೆ ಕಟ್ಟಿಸಿರುವ ವಸತಿಗೃಹದಲ್ಲಿ ಯಾವ ವೈದ್ಯರೂ ಉಳಿದುಕೊಳ್ಳುತ್ತಿಲ್ಲ. ಈ ಲೋಪ ಸರಿಪಡಿಸುವಂತೆ ಆಯುಕ್ತರಿಗೆ ಸೂಚಿಸಿದರು. ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯು ಭರವಸೆಯ ಮಾದರಿಯಲ್ಲಿದೆ. ತಮಿಳುನಾಡು ಹಾಗೂ ರಾಜಸ್ಥಾನದಲ್ಲಿ ಜಾರಿಯಲ್ಲಿರುವ ಇನ್ಶೂರೆನ್ಸ್‌ ಮಾದರಿಯನ್ನು ಅಧ್ಯಯನ ಮಾಡಿ ವರದಿ ಕೊಡಬೇಕು. ಲ್ಯಾಬ್‌ ಟೆಕ್ನಿಷಿಯನ್‌ ಮತ್ತಿತರ ಅತೀ ಅಗತ್ಯವಿರುವ ಅರೆ ವೈದ್ಯಕೀಯ ಸಿಬಂದಿ ನೇಮಕಕ್ಕೆ ಆದ್ಯತೆ ನೀಡುವಂತೆ ಹಣಕಾಸು ಇಲಾಖೆಗೆ ಸೂಚಿಸಿದರು. ಔಷಧ ಖರೀದಿ ಪ್ರಕ್ರಿಯೆ ನಿರಂತರವಾಗಿ ನಡೆಯಲು ಅನುವಾಗುವಂತೆ ಎರಡು ವರ್ಷಕ್ಕೊಮ್ಮೆ ಟೆಂಡರ್‌ ಕರೆಯಲು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next