Advertisement

Chikkaballapur: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೇಲೆ ಡಿಕೆಶಿ ಆಪ್ತನ ಕಣ್ಣು

01:42 PM Jan 08, 2024 | Team Udayavani |

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗುತ್ತಿದ್ದಂತೆ ಕಾಂಗ್ರೆಸ್‌ ಪಾಳೆಯದಲ್ಲಿ ಟಿಕೆಟ್‌ ಆಕಾಂಕ್ಷಿಗಳ ಪಟ್ಟಿ ಉದ್ದವಾಗ ತೊಡಗಿದೆ. ಈಗಲೇ ಟಿಕೆಟ್‌ ಗಾಗಿ ಕಾಂಗ್ರೆಸ್‌ನೊಳಗೆ ಕಿತ್ತಾಟ ತಾರಕಕ್ಕೇರಿರುವ ಬೆನ್ನಲೇ ಇದೀಗ ಡಿಸಿಎಂ ಡಿ.ಕೆ. ಶಿವಕುಮಾರ್‌ ಆಪ್ತರಾದ ಎಸ್‌. ರವಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ಎಂಬ ವದಂತಿ ಕ್ಷೇತ್ರದಲ್ಲಿ ಹರಿದಾಡುತ್ತಿದೆ.

Advertisement

ಈಗಾಗಲೇ ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ, ಮಾಜಿ ಸಚಿವರಾದ ಎಂ.ಆರ್‌. ಸೀತಾರಾಮ್‌ ರವರ ಪುತ್ರ ರಕ್ಷಾ ರಾಮಯ್ಯ, ಮಾಜಿ ಸಚಿವ ಗೌರಿಬಿದ ನೂರಿನ ಎನ್‌.ಎಚ್‌.ಶಿವಶಂಕರ ರೆಡ್ಡಿ ಹೆಸರು ಕೇಳಿ ಬರುತ್ತಿರುವಾಗಲೇ ಹಾಲಿ ವಿಧಾನ ಪರಿಷತ್ತು ಸದಸ್ಯರಾದ ಡಿಕೆಶಿ ಆಪ್ತ ಎಸ್‌.ರವಿ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ ಎನ್ನುವುದು ಕ್ಷೇತ್ರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಕ್ಷೇತ್ರದ ಜನರಲ್ಲಿ ಕುತೂಹಲ: ಇತ್ತೀಚೆಗೆ ಜಿಲ್ಲೆಯ ಮಾಜಿ ಸಚಿವರಾದ ಲೋಕಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ಎನ್‌.ಎಚ್‌.ಶಿವಶಂಕರರೆಡ್ಡಿ ಹಾಗೂ ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಎಚ್‌.ಮುನಿಯಪ್ಪ, ಜಿಲ್ಲಾಧ್ಯಕ್ಷ ಕೇಶವರೆಡ್ಡಿ ಮತ್ತಿತರರು ಡಿಸಿಎಂ ಡಿ.ಕೆ.ಶಿವಕುಮಾರ್‌ರನ್ನು ಅವರ ನಿವಾಸದಲ್ಲಿ ಭೇಟಿ ನೀಡಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿರುವುದು ಸಹಜವಾಗಿಯೆ ತೀವ್ರ ಕುತೂಹಲ ಮೂಡಿಸಿದೆ.

ಕಾಂಗ್ರೆಸ್‌ ಟಿಕೆಟ್‌ಗಾಗಿ ಮಾಜಿ ಸಿಎಂ ಮೊಯ್ಲಿ, ರಕ್ಷಾ ರಾಮಯ್ಯ ನಡುವೆ ತೀವ್ರ ಪೈಪೋಟಿ ಕಂಡು ಬರುತ್ತಿದೆ. ಇದರ ಮಧ್ಯೆ ಎನ್‌. ಎಚ್‌.ಶಿವಶಂಕರರೆಡ್ಡಿ ಕೂಡ ತಮಗೂ ಅವಕಾಶ ಮಾಡಿಕೊಡಿ ಎನ್ನುತ್ತಿದ್ದಾರೆ. ದಿನದಿಂದ ದಿನಕ್ಕೆ ಟಿಕೆಟ್‌ ಆಕಾಂಕ್ಷಿಗಳು ಹೆಚ್ಚಾಗುತ್ತಿರುವುದರ ನಡುವೆ ಇದೀಗ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಮ್ಮ ಆಪ್ತರಾದ ವಿಧಾನ ಪರಿಷತ್ತು ಸದಸ್ಯ ಎಸ್‌. ರವಿ ಅವರನ್ನು ಕ್ಷೇತ್ರದಿಂದ ಕಣಕ್ಕೆ ಇಳಿಸುವ ಚಿಂತನೆ ನಡೆಸಿದ್ದಾರೆಂದು ಬಲ್ಲ ಮೂಲಗಳು ಉದಯವಾಣಿಗೆ ತಿಳಿಸಿವೆ.

ಈ ನಿಟ್ಟಿನಲ್ಲಿ ಎಸ್‌.ರವಿ ರವರ ಹೆಸರನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಪರಿಗಣಿಸುವಂತೆ ಈಗಾಗಲೇ ಡಿ.ಕೆ.ಶಿವಕುಮಾರ್‌ ಪಕ್ಷದ ಹೈಕಮಾಂಡ್‌ ಮಟ್ಟದಲ್ಲಿ ಒಂದು ಹಂತದ ಚರ್ಚೆ ನಡೆಸಿದ್ದಾರೆಂದು ತಿಳಿದು ಬಂದಿದೆ.

Advertisement

ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗರ ಪ್ರಾಬಲ್ಯ : ವಿಧಾನ ಪರಿಷತ್ತು ಸದಸ್ಯರಾಗಿರುವ ಎಸ್‌.ರವಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹೊಸಕೋಟೆ, ದೇವನಹಳ್ಳಿ, ಯಲಹಂಕ, ನೆಲಮಂಗಳ, ದೊಡ್ಡಬಳ್ಳಾಪುರ ಕ್ಷೇತ್ರಗಳಲ್ಲಿ ತಮ್ಮದೇ ಆದ ಹಿಡಿತ ಇಟ್ಟುಕೊಂಡಿದ್ದು, ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದ ಪ್ರಾಬಲ್ಯ ಇರುವುದರಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಪ್ರಬಲ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಬೆಂಬಲವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ರಾಜಕೀಯ ತಂತ್ರಗಾರಿಕೆ ನಡೆಸುತ್ತಿರುವ ಸಹಜವಾಗಿಯೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಪಕ್ಷದ ವರಿಷ್ಠರು ಅಂತಿಮವಾಗಿ ಯಾರಿಗೆ ಮಣೆ ಹಾಕುತ್ತಾರೆಂಬುದನ್ನು ಕಾದು ನೋಡಬೇಕಿದೆ.

ಕಾಗತಿ ನಾಗರಾಜಪ್ಪ

Advertisement

Udayavani is now on Telegram. Click here to join our channel and stay updated with the latest news.

Next