Advertisement

ಚಿಕ್ಕಬಳ್ಳಾಪುರ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಗೆ ನಂಬಿಕೆ ದ್ರೋಹ ಮಾಡುವುದಿಲ್ಲ: ಕೆ‌.ವಿ. ನಾಗರಾಜ್

01:09 PM Dec 28, 2022 | Team Udayavani |

ಚಿಕ್ಕಬಳ್ಳಾಪುರ:  ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವಂತೆ ಆಹ್ವಾನ ಬಂದಿರುವುದು ನಿಜ. ಆದರೆ ನನಗೆ ಸೂಕ್ತ ಸ್ಥಾನಮಾನವನ್ನು ನೀಡಿರುವ ಆರೋಗ್ಯ ಸಚಿವ ಡಾ.ಸುಧಾಕರ್ ಅವರಿಗೆ ನಂಬಿಕೆ ದ್ರೋಹ ಮಾಡುವುದಿಲ್ಲ ಎಂದು ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷ ಕೆ. ವಿ. ನಾಗರಾಜ್ ಸ್ಪಷ್ಟಪಡಿಸಿದರು.

Advertisement

ಉದಯವಾಣಿಯೊಂದಿಗೆ ಮಾತನಾಡಿದ ಅವರು, ಅಖಂಡ ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ನನ್ನನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ನನ್ನ ಸೇವೆಗೆ ಅನುಗುಣವಾಗಿ ಮೊದಲು ರಾಜ್ಯ ಮಾವು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನಂತರ ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಲು ಸೂಕ್ತ ಸ್ಥಾನಮಾನವನ್ನು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಕಲ್ಪಿಸಿ ವಿಶೇಷ ಗೌರವ ನೀಡಿದ್ದಾರೆ. ಹೀಗಿರುವಾಗ ಅವರಿಗೆ ನಂಬಿಕೆ ದ್ರೋಹ ಮಾಡುವುದಿಲ್ಲ. ಅವರೊಂದಿಗೆ ನಿಷ್ಠೆಯಿಂದ ಇದ್ದು ಅವರನ್ನು ಹೆಚ್ಚಿನ ಬಹುಮತದಿಂದ ಗೆಲ್ಲಿಸಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರದಲ್ಲಿ ಪುನಃ ಅವರನ್ನು ಸಚಿವರಾಗಿ ನೋಡುವುದೇ ನಮ್ಮ ಕನಸು ಮತ್ತು ಸಂಕಲ್ಪ ಎಂದರು.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದಿಂದ ಆಫರ್ ಬಂದಿರುವುದು ನಿಜ. ಆದರೆ ಇದ್ಯಾವುದಕ್ಕೂ ನಾನು ತಲೆಕೆಡಿಸಿಕೊಂಡಿಲ್ಲ. ಮತದಾರರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಯಾವುದೇ ರೀತಿಯ ಗಾಳಕ್ಕೆ ಬೀಳುವ ನಾನು ಮೀನಲ್ಲ. ಸಚಿವ ಸುಧಾಕರ್ ಅವರೊಂದಿಗೆ ನಿಷ್ಠೆಯಿಂದ ಇದ್ದು ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿಯನ್ನು ಮತ್ತಷ್ಟು ಸಂಘಟನೆ ಮಾಡಿ ಭಾರೀ ಬಹುಮತದಿಂದ ಅವರನ್ನ ಗೆಲ್ಲಿಸುವುದೇ ನನ್ನ ಮುಖ್ಯ ಗುರಿ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಎಲ್ಲ ಜಾತಿ ಜನಾಂಗಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ. ವಿಶೇಷವಾಗಿ ಸುಮಾರು ವರ್ಷಗಳ ನಂತರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಸೌಲಭ್ಯವನ್ನು ಕಲ್ಪಿಸುವ ಮೂಲಕ ಪಡೆಯಲು ಇತಿಹಾಸಿಕ ನಿರ್ಧಾರವನ್ನು ತೆಗೆದು ಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಎಲ್ಲರೂ ಮೆಚ್ಚಿ ರಾಜ್ಯದ ಜನ ಬಿಜೆಪಿಗೆ ಅಧಿಕಾರವನ್ನು ನೀಡುತ್ತಾರೆ ಎಂಬ ವಿಶ್ವಾಸ ತಮಗಿದೆ ಎಂದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ನಿವೇಶನ ಮತ್ತು ವಸತಿ ಸೌಲಭ್ಯ ಕಲ್ಪಿಸಲು ಆರೋಗ್ಯ ಸಚಿವರು ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದಾರೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ 23 ಸಾವಿರ ನಿವೇಶನಗಳನ್ನು ನೀಡಲು ಈಗಾಗಲೇ ಗ್ರಾಮ ಸಭೆಗಳ ಮೂಲಕ ಆಯ್ಕೆ ಪ್ರಕ್ರಿಯೆ ಮುಂದುವರೆದಿದೆ. ಇದೊಂದು ಐತಿಹಾಸಿಕ ನಿರ್ಧಾರ ಎಂದು ಬಣ್ಣಿಸಿದರು.

Advertisement

ಬಯಲುಸೀಮೆಯ ಚಿಕ್ಕಬಳ್ಳಾಪುರ ಜಿಲ್ಲೆಗೆ ಶುದ್ಧ ಕುಡಿಯುವ ನೀರು ಒದಗಿಸಲು ಆರೋಗ್ಯ ಸಚಿವರು ಕಂಕಣಬದ್ಧರಾಗಿ ಎತ್ತಿನಹೊಳೆ ಯೋಜನೆಯ ಮೂಲಕ ನೀರು ಹರಿಸಲು ಹೆಚ್ಚುವರಿ ಅನುದಾನವನ್ನು ಮಂಜೂರು ಮಾಡಿಸಲು ಆರೋಗ್ಯ ಸಚಿವರು ಸಫಲರಾಗಿದ್ದಾರೆ ಮುಂದಿನ ದಿನಗಳಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರ ಸಹಿತ ಜಿಲ್ಲೆಯಲ್ಲಿ ಎತ್ತಿನಹೊಳೆಯ ನೀರು ಜನರಿಗೆ ಒದಗಿಸಲು ಸಚಿವರು ಬದ್ಧರಾಗಿದ್ದಾರೆ ಎಂದು ಹೇಳಿದರು.

ಚಿಕ್ಕಬಳ್ಳಾಪುರ ಜಿಲ್ಲೆಯಾಗಿ 15 ವರ್ಷ ಕಳೆದಿದೆ ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿ ಕಾಣಬೇಕಾಗಿದೆ ಈಗಾಗಲೇ ಹೆಚ್.ಎನ್. ವ್ಯಾಲಿ ಯೋಜನೆಯ ಮೂಲಕ ಕೆರೆಗಳಿಗೆ ನೀರು ಹರಿಸುವ ಕಾರ್ಯ ಯಶಸ್ವಿಯಾಗಿದೆ ಅದೇ ರೀತಿ ಎತ್ತಿನಹೊಳೆ ಯೋಜನೆಯ ಮೂಲಕ ಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ಆರೋಗ್ಯ ಸಚಿವರು ದೃಢ ಸಂಕಲ್ಪ ಮಾಡಿದ್ದಾರೆ ಎಂದರು.

ಕೊರೋನಾ ಸೋಂಕು ಹರಡುವ ಸಂಶಯ ಮೂಡಿದೆ ಇಂದಿನ ದಿನಗಳಲ್ಲಿ ನಾವು ಕಷ್ಟಗಳನ್ನು ಅನುಭವಿಸಿದ್ದೇವೆ ಅದು ಮರುಕಳಿಸುವುದು ಬೇಡ ಜನ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಜಾಗೃತರಾಗಿರಬೇಕು ಜೊತೆಗೆ ನೆರೆಹೊರೆಯವರು ಕುಟುಂಬ ಸದಸ್ಯರಿಗೆ ಹಾಗೂ ಸಮಾಜದಲ್ಲಿ ಕೋವಿಡ್ ಸೋಂಕಿನ ಕುರಿತು ಜಾಗೃತಿ ಮೂಡಿಸಬೇಕೆಂದು ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next