ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ತೀವ್ರಗೊಳ್ಳುತ್ತಿದ್ದು, ಬುಧವಾರ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದೆ. ಬಯಲುಸೀಮೆ ಭಾಗದಲ್ಲಿ ಮೋಡ ಕವಿದ ವಾತವರಣದಲ್ಲಿ ಶೀತ ಗಾಳಿಯೊಂದಿಗೆ ಸಾಧಾರಣ ಮಳೆಯಾಗಿದೆ. ಮಲೆನಾಡು ಭಾಗದಲ್ಲಿ ಬುಧವಾರ ಸುರಿದ ಭಾರೀ ಮಳೆ ಮತ್ತು ಗಾಳಿಗೆ ಕೆಲವು ಕಡೆಗಳಲ್ಲಿ ಸಣ್ಣ ಪ್ರಮಾಣದ ಧರೆ ಕುಸಿತವಾಗಿದೆ. ವಿದ್ಯುತ್ ಸ್ಥಗಿತಗೊಂಡಿದ್ದು, ಹೊಲ-ಗದ್ದೆಗಳಿಗೆ ನೀರು ನುಗ್ಗಿರುವ ಘಟನೆಗಳು ನಡೆದಿವೆ.
ಐದು ದಿನಗಳಿಂದ ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದ್ದು, ಬುಧವಾರ ಬೆಳಿಗ್ಗೆಯಿಂದ ಸಂಜೆವರೆಗೂ ಮಳೆಯಾಗಿದೆ. ಹಾಗಾಗಿ, ತುಂಗಾ, ಭದ್ರಾ, ಹೇಮಾವತಿ ನದಿಗಳಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಹಳ್ಳಕೊಳ್ಳಗಳಲ್ಲಿ ನೀರು ತುಂಬಿಕೊಂಡಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ, ಕೊಟ್ಟಿಗೆಹಾರ, ಬಾಳೂರು, ಬಣಕಲ್, ಗಬಲ್, ಹಿರೇಬೈಲು, ಕಳಸ, ಹೊರನಾಡು, ಕುದುರೆಮುಖ, ಭೈರಾಪುರ, ಸುಂಕಸಾಲೆ ಭಾಗದಲ್ಲಿ ಭಾರೀ ಮಳೆಯಾಗಿದೆ. ಮಳೆಯೊಂದಿಗೆ ರಭಸವಾಗಿ ಬೀಸಿದ ಗಾಳಿಗೆ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಇದರಿಂದ ಬಹುತೇಕ ಗ್ರಾಮಗಳಲ್ಲಿ ವಿದ್ಯುತ್ ಕಡಿತಗೊಂಡಿದೆ.
ನೀರಿನಲ್ಲಿ ಕೊಚ್ಚಿಹೋದ ವಾಹನ: ಮೂಡಿಗೆರೆ ತಾಲೂಕು ಕನ್ನೇಹಳ್ಳಿ ಗ್ರಾಮದಲ್ಲಿ ಹರಿಯುವ ಜಪಾವತಿ ನದಿ ತುಂಬಿ ಹರಿಯುತ್ತಿದ್ದು, ಕೊಗ್ರಳ್ಳಿ ರಿವರ್ ಕಂಟ್ರಿ ರೆಸಾರ್ಟ್‌ಗೆ ಸೇರಿದ ಪಿಕ್‌ಅಪ್ ವಾಹನ ಸೇತುವೆ ದಾಟುವಾಗ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಆದರೆ, ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾನೆ. ವಾಹನ ನೀರಿನಲ್ಲಿ ಕೊಚ್ಚಿಹೋಗಿದೆ. ಬಿನ್ನಡಿ ಗ್ರಾಮದಲ್ಲಿ ರಸ್ತೆ ಬದಿ ಧರೆ ಕುಸಿದು ರಸ್ತೆ ಸಂಚಾರಕ್ಕೆ ಕೆಲಕಾಲ ಅಡ್ಡಿಯಾಗಿತ್ತು. ಸ್ಥಳೀಯರು ರಸ್ತೆ ಮೇಲಿದ್ದ ಮಣ್ಣು ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಈ ಭಾಗದಲ್ಲಿ ವಾರದಿಂದ ಮಳೆಯಾಗುತ್ತಿದ್ದು, ಹೇಮಾವತಿ ನದಿ ತುಂಬಿ ಹರಿಯುತ್ತಿದೆ. ನದಿ ಪಾತ್ರದ ಕೆಲ ಹೊಲಗದ್ದೆಗಳಿಗೆ ನೀರು ನುಗ್ಗಿದೆ ಎಂದು ತಿಳಿದು ಬಂದಿದೆ.
ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದ್ದು, ಕಳಸ, ಹೊರನಾಡು ಸಂಪರ್ಕ ಕಲ್ಪಿಸುವ ಹೆಬ್ಟಾಳೆ ಸೇತುವೆ ಭದ್ರಾ ನದಿಯಲ್ಲಿ ಮುಳುಗಲು ಕೆಲವೇ ಅಡಿಗಳು ಮಾತ್ರ ಬಾಕಿ ಇದೆ. ಇದೇ ರೀತಿ ಮಳೆ ಮುಂದುವರೆದರೆ ಸೇತುವೆ ನದಿ ನೀರಿನಲ್ಲಿ ಮುಳುಗಿ ಕಳಸ-ಹೊರ ನಾಡು ಸಂಪರ್ಕ ಕಡಿತಗೊಳ್ಳಲಿದೆ. ಮೂಡಿಗೆರೆ ತಾಲೂಕಿನ ಬಣಕಲ್ ಹಾಗೂ ಕೊಟ್ಟಿಗೆಹಾರ ಸಂಪರ್ಕದ ಹೆದ್ದಾರಿಯಲ್ಲಿ ಹಳ್ಳವೊಂದರ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು.
ಕೊಪ್ಪ ತಾಲೂಕಿನ ಜಯಪುರದಿಂದ ಬಸರಿಕಟ್ಟೆಗೆ ಸಾಗುವ ಮಾರ್ಗದಲ್ಲಿ ರಸ್ತೆ ಬದಿ ಇದ್ದ ಮರ ಉರುಳಿ ಬಿದ್ದು ಸಂಚಾರಕ್ಕೆ ಅಡ್ಡಿಯಾಗಿತ್ತು. ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲೂಕು ವ್ಯಾಪ್ತಿಯಲ್ಲೂ ಭಾರೀ ಮಳೆಯಾಗಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಚಿಕ್ಕಮಗಳೂರು ಸುತ್ತಮುತ್ತ ಸಾಧಾರಣ ಮಳೆಯಾಗಿದ್ದು, ಕಡೂರು, ಬೀರೂರು, ತರೀಕೆರೆ ಭಾಗದಲ್ಲಿ ಸಾಧಾರಣ ಮಳೆಯೊಂದಿಗೆ ಮೋಡ ಕವಿದ ವಾತಾವರಣ, ಶೀತ ಗಾಳಿ ಬೀಸುತ್ತಿದೆ.