ಚಿಕ್ಕಮಗಳೂರು: ಜಿಲ್ಲೆ ಬಯಲುಸೀಮೆ ಮತ್ತು ಮಲೆನಾಡು ಭೌಗೋಳಿಕ ಪ್ರದೇಶವನ್ನು ಹೊಂದಿದ್ದು, ಗ್ರಾಪಂ ಮಟ್ಟದಲ್ಲಿ ಜಿಪಂ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಶ್ರಮಿಸುವುದಾಗಿ ನೂತನ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದರು.
ಮಂಗಳವಾರ ಜಿಪಂ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮಲೆನಾಡು ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದ್ದು, ಸರ್ಕಾರದ ಯೋಜನೆಗಳನ್ನು ತಳಮಟ್ಟದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ ಎಂದು ಹೇಳಿದರು.
ಜಿಪಂ ವ್ಯಾಪ್ತಿಯಲ್ಲಿ ಏನೇನು ಯೋಜನೆ ಅನುಷ್ಠಾನಗೊಳ್ಳಬೇಕು. ಯಾವ ಯೋಜನೆ ಯಾವ ಹಂತದಲ್ಲಿದೆ. ಎಷ್ಟು ಕಾಮಗಾರಿ ಬಾಕಿ ಇದೆ ಎಂಬುದನ್ನು ಸಂಬಂಧಪಟ್ಟ ಇಲಾಖೆ ಅ ಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಯೋಜನೆ ಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದ ಅವರು, ಸಾರ್ವಜನಿಕರ ಸಮಸ್ಯೆಗಳನ್ನು ನಿವಾರಿಸುವ ಕಾರ್ಯವನ್ನು ಮಾಡುತ್ತೇನೆ ಎಂದು ತಿಳಿಸಿದರು. ಗ್ರಾಪಂಗಳ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಬೇಕಿದೆ. ಸದ್ಯದಲ್ಲೇ ಅನುದಾನ ಬಿಡುಗಡೆಯಾಗುವ ಸಾಧ್ಯತೆ ಇದೆ. ಈಗಾಗಲೇ ಗ್ರಾಮೀಣ ಮಟ್ಟದಲ್ಲಿ ಅನೇಕ ಯೋಜನೆಗಳು ಅನುಷ್ಠಾನಗೊಂಡಿದ್ದು, ಜಿಲ್ಲೆಯಲ್ಲಿ ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ 180 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳು ನಡೆಯುತ್ತಿವೆ.
ಜಲಜೀವನ್ ಮಿಷನ್ ಯೋಜನೆಯಡಿ ನಗರ ಪ್ರದೇಶದಂತೆ ಗ್ರಾಮೀಣ ಪ್ರದೇಶದಲ್ಲಿ ಸಮರ್ಪಕ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳ್ಳಲಿದೆ. ಆ್ಯಕ್ಷನ್ ಪ್ಲಾನ್ ತಯಾರಾಗಿದ್ದು ಮುಂದಿನ ದಿನಗಳಲ್ಲಿ ಕಾರ್ಯಯೋಜನೆ ಅನುಷ್ಠಾನಗೊಳ್ಳಲಿದೆ ಎಂದರು.
ಗ್ರಾಮೀಣ ಪ್ರದೇಶದಲ್ಲಿ ಸ್ವತ್ಛ ಭಾರತ್ ಯೋಜನೆಯಡಿ ನಗರ ಪ್ರದೇಶದಲ್ಲಿನ ಘನ ತ್ಯಾಜ್ಯ ನಿರ್ವಹಣೆ ಮಾದರಿಯಲ್ಲಿ ಗ್ರಾಮೀಣ ಪ್ರದೇಶದಲ್ಲೂ ಸ್ವತ್ಛ ಭಾರತ್ ಯೋಜನೆ ಅನುಮೋದನೆ ಹಂತದಲ್ಲಿದ್ದು, ಹಂತ- ಹಂತವಾಗಿ ಗುರುತರವಾದ ಕಾಮಗಾರಿಗಳು ಗ್ರಾಮೀಣ ಪ್ರದೇಶದಲ್ಲಿ ನಡೆಯಲಿವೆ ಎಂದು ಮಾಹಿತಿ ನೀಡಿದರು.
ಜಿಪಂ ವ್ಯಾಪ್ತಿಯಲ್ಲಿ 28 ಇಲಾಖೆಗಳು ಕಾರ್ಯ ನಿರ್ವಹಿಸಲಿದ್ದು ಇಲಾಖೆಯಿಂದ ಅನುಷ್ಠಾನಗೊಂಡ ಯೋಜನೆಗಳು ಯಾವ ಹಂತದಲ್ಲಿವೆ. ಯೋಜನೆಗಳಿಗೆ ಚುರುಕು ಮುಟ್ಟಿಸಲು ಏನೇನು ಕ್ರಮ ಕೈಗೊಳ್ಳಬೇಕು ಎಂಬುದನ್ನು ಹಿರಿಯ ಅಧಿ ಕಾರಿಗಳೊಂದಿಗೆ ಚರ್ಚಿಸಿ ಯೋಜನೆ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲಾಗುವುದು ಎಂದರು.