ಚಿಕ್ಕಮಗಳೂರು: ಮಾಜಿ ಸಚಿವ ಸಿ.ಟಿ. ರವಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಿದ ಬಳಿಕ ತೆರವಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಎಸ್. ಅಂಗಾರ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿ ಕಾರಕ್ಕೆ ಬಂದ ನಂತರ ಸಿ.ಟಿ. ರವಿಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವಜನ ಮತ್ತು ಕ್ರೀಡಾ ಸಚಿವ ಹುದ್ದೆಯೊಂದಿಗೆ ಚಿಕ್ಕಮಗಳೂರು ಜಿಲ್ಲೆ ಉಸ್ತುವಾರಿ ಜವಾಬ್ದಾರಿ ನೀಡಲಾಗಿತ್ತು. ಸಿ.ಟಿ. ರವಿ ಅವರು ಒಂದೂವರೆ ವರ್ಷಗಳ ಕಾಲ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯ ನಿರ್ವಹಿಸಿದರು. ನಂತರ ನಡೆದ ಬೆಳವಣಿಯಲ್ಲಿ ಸಿ.ಟಿ. ರವಿ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು.
ಬಿಜೆಪಿಯಲ್ಲಿನ ಅಲಿಖೀತ ನಿಯಮದಂತೆ ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ ನಿಯಮದಂತೆ ಸಿ.ಟಿ. ರವಿ ತಮ್ಮ ಹುದ್ದೆಗೆ ಅ.5, 2020 ರಂದು ರಾಜೀನಾಮೆ ಸಲ್ಲಿಸಿದರು. ನ. 8, 2020ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆಯನ್ನು ಅಂಗೀಕರಿಸಿದರು. ಸಿ.ಟಿ. ರವಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಐದು ತಿಂಗಳು ಕಳೆದಿದ್ದು, ಐದು ತಿಂಗಳು ಕಳೆದರೂ ರಾಜ್ಯ ಸರ್ಕಾರ ಚಿಕ್ಕಮಗಳೂರು ಜಿಲ್ಲೆಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡದೆ ನಿರ್ಲಕ್ಷé ವಹಿಸಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು.
ಇದರ ಬೆನ್ನಲ್ಲೇ ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ತೀವ್ರಗತಿಯಲ್ಲಿ ಹರಡುತ್ತಿದ್ದು, ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಜಿಲ್ಲೆಯನ್ನು ನಿಭಾಯಿಸಲು, ಸರ್ಕಾರ ಮತ್ತು ಜಿಲ್ಲಾಡಳಿತದ ನಡುವೆ ಕೊಂಡಿಯಾಗಿ ಕೆಲಸ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರಿಲ್ಲ ಎಂಬ ಎಂಬ ಕೂಗು ಕೇಳಿ ಬಂದಿತ್ತು. ಎಸ್. ಅಂಗಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭೆ ಕ್ಷೇತ್ರದಿಂದ ಸತತ ಆರು ಬಾರಿ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದು, ರಾಜ್ಯ ಸಂಪುಟದಲ್ಲಿ ಮೊದಲ ಬಾರಿಗೆ ಸಚಿವ ಸ್ಥಾನವನ್ನು ಅಲಂಕರಿಸಿದ್ದಾರೆ.
ರಾಜಕೀಯ ಕ್ಷೇತ್ರದಲ್ಲಿ ಪ್ರಾಮಾಣಿಕ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಎಸ್.ಅಂಗಾರ ಅವರನ್ನು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿರುವುದು ಜಿಲ್ಲೆಯ ಜನತೆಯಲ್ಲಿ ಸಂತಸ ಮೂಡಿಸಿದೆ.