Advertisement

ಪ್ರತಿ ಜಿಲ್ಲೆಯಲ್ಲೂ ಜಾನಪದ ಲೋಕ

03:17 PM Mar 04, 2020 | Naveen |

ಚಿಕ್ಕಮಗಳೂರು: ಅಳಿವಿನಂಚಿನಲ್ಲಿರುವ ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಜಾನಪದ ಲೋಕವನ್ನು ನಿರ್ಮಿಸಬೇಕು ಎಂದು ಕರ್ನಾಟಕ ಜಾನಪದ ಪರಿಷತ್‌ ರಾಜ್ಯಾಧ್ಯಕ್ಷ ಟಿ.ತಿಮ್ಮೇಗೌಡ ಹೇಳಿದರು.

Advertisement

ನಗರದ ಸುವರ್ಣ ಕನ್ನಡ ಭವನದಲ್ಲಿ ನಡೆದ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರ ವಿಶೇಷ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕಗಳು ಪ್ರತಿ ಜಿಲ್ಲೆಯಲ್ಲೂ ಜಿಲ್ಲಾಡಳಿತದಿಂದ ಜಾಗವನ್ನು ಪಡೆದು ಜಾನಪದ ಲೋಕವನ್ನು ನಿರ್ಮಿಸಿ, ಅದರಲ್ಲಿ ನಮ್ಮ ಪೂರ್ವಿಕರು ಬಳಸುತ್ತಿದ್ದ ಜಾನಪದ ಪರಿಕರಗಳನ್ನು ಪ್ರದರ್ಶಿಸಬೇಕು. ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯ ಕಾರ್ಯಕ್ರಮಗಳನ್ನು ನಡೆಸಬೇಕು. ಆ ಮೂಲಕ ಸಾರ್ವಜನಿಕರಲ್ಲಿ ಜಾನಪದದ ಬಗ್ಗೆ ಆಸಕ್ತಿ ಬೆಳೆಸಬೇಕು ಎಂದು ಕಿವಿಮಾತು ಹೇಳಿದರು.

ಜಾನಪದ ಕಾರ್ಯಕ್ರಮಗಳನ್ನು ನಡೆಸುವಾಗ ಸ್ಥಳೀಯ ಜನಪ್ರತಿನಿ ಧಿಗಳು, ದಾನಿಗಳು ಮತ್ತು ಸಂಘ-ಸಂಸ್ಥೆಗಳನ್ನು ಜೊತೆಗೆ ಸೇರಿಸಿಕೊಳ್ಳಬೇಕು. ವೇದಿಕೆ ಕಾರ್ಯಕ್ರಮಗಳನ್ನು ಕಡಿಮೆ ಮಾಡಿ ಜಾನಪದ ಕಲೆಗಳ ಪ್ರದರ್ಶನಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ಹಳ್ಳಿ ಹಳ್ಳಿಗಳಲ್ಲಿ ಎಲೆಮರೆ ಕಾಯಿಯಂತೆ ಬದುಕುತ್ತಿರುವ ಜಾನಪದ ಕಲಾವಿದರನ್ನು ಗುರುತಿಸಿ ಅವರಿಗೆ ವೇದಿಕೆ ಕಲ್ಪಿಸುವ ಮೂಲಕ ಅವರನ್ನು ಬೆಳಕಿಗೆ ತರಬೇಕು. ಕೇಂದ್ರ ಸಮಿತಿ ರಾಜ್ಯದಲ್ಲಿರುವ ಜಾನಪದ ಕಲಾವಿದರ ಕೈಪಿಡಿಯನ್ನು ಹೊರತರಲಿದ್ದು, ಅದಕ್ಕೆ ಆಯಾ ಜಿಲ್ಲೆಗಳ ಕಲಾವಿದರ ಮಾಹಿತಿ ಒದಗಿಸಬೇಕು ಎಂದು ಹೇಳಿದರು.

ನಿವೃತ್ತ ಡಿಜಿಪಿ ಕೆ.ವಿ.ಠಾಕೂರ್‌ ಮಾತನಾಡಿ, ಜಾನಪದವನ್ನು ಮುಂದಿನ ಪೀಳಿಗೆಗೆ ಉಳಿಸದಿದ್ದಲ್ಲಿ ನಮ್ಮ ಸಂಸ್ಕೃತಿ ನಾಶವಾಗುತ್ತದೆ ಎಂದು ಎಚ್ಚರಿಸಿದರು. ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನಮಾನಸದಿಂದ ದೂರಾಗುತ್ತಿರುವ ಜಾನಪದವನ್ನು ಮುಂದಿನ ಪೀಳಿಗೆಗೆ ಉಳಿಸುವ ನಿಟ್ಟಿನಲ್ಲಿ ಜಾನಪದ ಕಲಾವಿದರ ಬದುಕು ಮತ್ತು ಸಾಧನೆಯನ್ನು ಶಾಲಾ ಪಠ್ಯಪುಸ್ತಕದಲ್ಲಿ ಅಳವಡಿಸುವಂತೆ ಸಧ್ಯದಲ್ಲೇ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

Advertisement

ಜಿಲ್ಲಾ ಪಂಚಾಯತ್‌ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಹಿರಿಗಯ್ಯ, ವಿಜಯಾ ಬ್ಯಾಂಕ್‌ ನಿವೃತ್ತ ಅಧಿಕಾರಿ ಕೃಷ್ಣೇಗೌಡ, ಹಿರಿಯ ವೀರಗಾಸೆ ಕಲಾವಿದ ಮಾಳೇನಹಳ್ಳಿ ಬಸಪ್ಪ ಉಪಸ್ಥಿತರಿದ್ದರು. ಕರ್ನಾಟಕ ಜಾನಪದ ಪರಿಷತ್ತಿನ ವಿವಿಧ ತಾಲೂಕು ಪದಾಧಿಕಾರಿಗಳು ಮತ್ತು ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಕೆ.ಸುಜಾತಾ ಕಾರ್ಯಕ್ರಮವನ್ನು ನಿರೂಪಿಸಿ, ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಬಿ.ವಿರೂಪಾಕ್ಷ ಸ್ವಾಗತಿಸಿ, ತಾಲೂಕು ಉಪಾಧ್ಯಕ್ಷ ಸಂದೀಪ್‌ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next