ಚಿಕ್ಕಮಗಳೂರು: ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಪಡೆದುಕೊಳ್ಳುವ ಮೂಲಕ ಜಿಲ್ಲೆಯು ಬಿಜೆಪಿಯ ಭದ್ರಕೋಟೆ ಎಂಬುದು ಮತ್ತೂಮ್ಮೆ ಸಾಬೀತಾಗಿದೆ.
ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಪೈಕಿ ಚಿಕ್ಕಮಗಳೂರು, ತರೀಕೆರೆ, ಮೂಡಿಗೆರೆ ಮತ್ತು ಶೃಂಗೇರಿ ವಿಧಾನಸಭಾ ಕ್ಷೇತ್ರಗಳು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸೇರಿದ್ದರೆ, ಕಡೂರು ವಿಧಾನಸಭಾ ಕ್ಷೇತ್ರವು ಹಾಸನ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸೇರಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಪೈಕಿ ಚಿಕ್ಕಮಗಳೂರು, ಮೂಡಿಗೆರೆ, ತರೀಕೆರೆ ಮತ್ತು ಕಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದರೆ, ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿತ್ತು. ಈಗಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ಕಡೂರು ಹಾಗೂ ತರೀಕೆರೆ ವಿಧಾನಸಭಾ ಕ್ಷೇತ್ರ ಹೊರತುಪಡಿಸಿ ಉಳಿದ ಕ್ಷೇತ್ರಗಳಲ್ಲಿ ವಿಧಾನಸಭಾ ಚುನಾವಣೆಗಿಂತಲೂ ಹೆಚ್ಚಿನ ಅಂತರವನ್ನು ಪಡೆದುಕೊಂಡಿದ್ದಾರೆ.
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಟಿ.ರವಿ 25,716 ಮತಗಳ ಅಂತರದಿಂದ ಗೆದ್ದಿದ್ದರು. ಈಗಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ 87,735 ಮತಗಳನ್ನು ಪಡೆದಿದ್ದರೆ, ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ 54,490 ಮತ ಪಡೆದುಕೊಂಡಿದ್ದು, ಬಿಜೆಪಿ 33,145 ಹೆಚ್ಚಿನ ಮತಗಳನ್ನು ಪಡೆದುಕೊಂಡಿದೆ.
ಅದೇ ರೀತಿ ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಎಂ.ಪಿ.ಕುಮಾರಸ್ವಾಮಿ 12,512 ಮತಗಳ ಅಂತರದಿಂದ ಗೆದ್ದಿದ್ದರು. ಈಗ ಶೋಭಾ ಕರಂದ್ಲಾಜೆ 70,412 ಮತಗಳನ್ನು ಪಡೆದಿದ್ದು, ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ 43,800 ಮತಗಳನ್ನು ಪಡೆದಿದ್ದು, ಬಿಜೆಪಿ 26,612 ಮತಗಳನ್ನು ಹೆಚ್ಚಾಗಿ ಪಡೆದುಕೊಂಡಿದೆ. ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎಸ್.ಸುರೇಶ್ ಸುಮಾರು 11 ಸಾವಿರ ಮತಗಳ ಅಂತರದಿಂದ ಗೆದ್ದಿದ್ದರು. ಈಗ ಶೋಭಾ ಕರಂದ್ಲಾಜೆ 80,185 ಮತಗಳನ್ನು ಪಡೆದಿದ್ದರೆ, ಪ್ರಮೋದ್ ಮಧ್ವರಾಜ್ 45,133 ಮತಗಳನ್ನು ಪಡೆದಿದ್ದು, ಬಿಜೆಪಿ 35,052 ಮತಗಳನ್ನು ಹೆಚ್ಚಾಗಿ ಪಡೆದುಕೊಂಡಿದೆ.
ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್, 2,013 ಮತಗಳ ಅಂತರದಿಂದ ಸೋತಿದ್ದರು. ಈಗ ಶೋಭಾ ಕರಂದ್ಲಾಜೆ 76,129 ಮತ ಪಡೆದಿದ್ದು, 47,159 ಮತ ಪಡೆದಿರುವ ಪ್ರಮೋದ್ ಮಧ್ವರಾಜ್ ಅವರಿಗಿಂತ 28,970 ಮತ ಹೆಚ್ಚಾಗಿ ಪಡೆದುಕೊಂಡಿದ್ದಾರೆ.
ಕಡೂರು ಕ್ಷೇತ್ರದಲ್ಲೂ ಬಿಜೆಪಿಗೆ ಹೆಚ್ಚು ಮತ
ಹಾಸನ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮುನ್ನಡೆ ಪಡೆದುಕೊಂಡಿದ್ದಾರೆ. ಆದರೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಮುನ್ನಡೆ ಪಡೆದುಕೊಂಡಿದೆ. ಇಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬೆಳ್ಳಿಪ್ರಕಾಶ್ 15 ಸಾವಿರ ಮತಗಳ ಅಂತರದಿಂದ ಗೆದ್ದಿದ್ದರು. ಈಗಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎ.ಮಂಜು 75,874 ಮತ ಪಡೆದುಕೊಂಡಿದ್ದು, ಜೆಡಿಎಸ್‌ನ ಪ್ರಜ್ವಲ್ ರೇವಣ್ಣ 63,855 ಮತ ಪಡೆದುಕೊಂಡಿದ್ದಾರೆ. ಇಲ್ಲಿ ಬಿಜೆಪಿ ಈ ಬಾರಿ 12,019 ಮತಗಳನ್ನು ಹೆಚ್ಚಾಗಿ ಪಡೆದುಕೊಂಡಿದೆ. ಒಟ್ಟಾರೆಯಾಗಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳೇ ಹೆಚ್ಚಿನ ಮತಗಳನ್ನು ಪಡೆದುಕೊಳ್ಳುವ ಮೂಲಕ ಜಿಲ್ಲೆ ಬಿಜೆಪಿ ಭದ್ರಕೋಟೆ ಎಂಬುದನ್ನು ಮತ್ತೂಮ್ಮೆ ಸಾಬೀತುಪಡಿಸಿದ್ದಾರೆ.
ಎಸ್.ಕೆ.ಲಕ್ಷ್ಮೀಪ್ರಸಾದ್