Advertisement

ಎಲ್ಲರೂ ಆರೋಗ್ಯವಂತರಾದರೆ ದೇಶ ಸದೃಢ

05:59 PM Sep 14, 2019 | Naveen |

ಚಿಕ್ಕಮಗಳೂರು: ದೇಶ ಸದೃಢವಾಗಿರಲು ಪ್ರತಿಯೊಬ್ಬರೂ ಆರೋಗ್ಯವಂತರಾಗಿರುವುದು ಅವಶ್ಯಕ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಉಮೇಶ ಎಂ. ಅಡಿಗ ಅಭಿಪ್ರಾಯ ವ್ಯಕ್ತಪಡಿಸಿದರು.

Advertisement

ನಗರದ ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಕೀಲರ ಸಂಘ, ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟ ಮತ್ತು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆಗಳು ಜಂಟಿಯಾಗಿ ಆಯೋಜಿಸಿದ್ದ ಪೋಷಣ್‌ ಅಭಿಯಾನ ಉದ್ಘಾಟಿಸಿ ಮಾತನಾಡಿದರು.

ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ದೇಶದ ಪ್ರತಿಯೊಬ್ಬರೂ ದೈಹಿಕ, ಮಾನಸಿಕ, ಅಧ್ಯಾತ್ಮಿಕವಾಗಿ ಸದೃಢರಾಗಬೇಕು. ಆಗ ಮಾತ್ರ ಉತ್ತಮ ದೇಶ ನಿರ್ಮಾಣ ಮಾಡಬಹುದು ಎಂದು ಹೇಳಿದರು.

ಹಿಂದಿನ ಕಾಲದಲ್ಲಿ ಪೌಷ್ಟಿಕ ಆಹಾರ ಸೇವನೆ ಮಾಡುವುದಕ್ಕಾಗಿ ಹಬ್ಬ-ಹರಿದಿನಗಳನ್ನು ಆಚರಣೆ ನೆಪ ಮಾಡಿಕೊಂಡು ವಿವಿಧ ರೀತಿಯ ಆಹಾರಗಳನ್ನು ತಯಾರಿಸಿ ಸೇವನೆ ಮಾಡುತ್ತಿದ್ದರು. ಆದರೆ, ಇಂದು ಸಾಂಪ್ರದಾಯಿಕವಾದ ಅಡುಗೆಗಳು ಕಣ್ಮರೆಯಾಗುತ್ತಿವೆ. ಪ್ರಸ್ತುತ ಜನರು ಪೌಷ್ಟಿಕ ಆಹಾರಗಳನ್ನು ಬಿಟ್ಟು ಫಾಸ್ಟ್‌ ಫುಡ್‌ಗೆ ಹೊಂದಿಕೊಂಡು ಆರೋಗ್ಯ ಹದಗೆಡಿಸಿಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಅಪರ ಜಿಲ್ಲಾಧಿಕಾರಿ ಡಾ| ಕುಮಾರ್‌ ಮಾತನಾಡಿ, ಪೌಷ್ಟಿಕ ಆಹಾರ ಸೇವನೆ ಮಾಡಿ ಆರೋಗ್ಯವನ್ನು ಸದೃಢವಾಗಿಟ್ಟುಕೊಳ್ಳುವುದರ ಜೊತೆ ಇತರರು ಆರೋಗ್ಯ ಕಾಪಾಡಿಕೊಳ್ಳುವಂತೆ ಪ್ರೇರೆಪಿಸಬೇಕು. ಮನಸ್ಸಿಗೆ ಇಷ್ಟವಾದ ಆಹಾರ ಸೇವನೆ ಮಾಡದೇ ದೇಹಕ್ಕೆ ಅಗತ್ಯವಿರುವ ಪೌಷ್ಟಿಕ ಆಹಾರ ಸೇವನೆ ಮಾಡಬೇಕೆಂದು ಕಿವಿ ಮಾತು ಹೇಳಿದರು.

Advertisement

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ್‌ ಚೇಂಗಟಿ ಮಾತನಾಡಿ, ಪೌಷ್ಟಿಕ ಆಹಾರ ಸೇವಿಸಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ, ಉತ್ತಮವಾದ ಆರೋಗ್ಯಕರ ಸಮಾಜ ನಿರ್ಮಾಣ ಮಾಡಬೇಕಾದರೆ ಪೌಷ್ಟಿಕ ಆಹಾರ ಸೇವನೆ ಮಾಡಬೇಕು ಎಂದರು.

ಎಸ್‌ಟಿಜೆ ಕಾಲೇಜಿನ ಪ್ರಾಂಶುಪಾಲೆ ಜೆ.ಕೆ.ಭಾರತಿ, ಡಿಎಸ್‌ಒ ಮಂಜುನಾಥ್‌ ಹಾಗೂ ನಿವೃತ್ತ ಡಿಎಚ್ಒ ಭಾಗ್ಯಲಕ್ಷ್ಮಮ್ಮ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ತಾಪಂ ಅಧ್ಯಕ್ಷ ಜಯಣ್ಣ ನೆಟ್ಟೆಕೆರೆಹಳ್ಳಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೃಷ್ಣಪ್ಪ, ಜಿಲ್ಲಾ ಸರ್ಜನ್‌ ಡಾ| ಕುಮಾರ್‌, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಲಜಾಕ್ಷಿ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next