ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳಾದ ಡೆಂಘೀ, ಚಿಕೂನ್‌ಗುನ್ಯ, ಮಲೇರಿಯಾ ರೋಗಗಳ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಕ್ರಾಮಿಕ ರೋಗಗಳ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರ ಹೊರ ವಲಯದ ಇಂದಾವರ ಸಮೀಪ ಇರುವ ಕಸ ಸಂಗ್ರಹ ಮಾಡುತ್ತಿರುವ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಕಸ ವಿಲೇವಾರಿ ಬಗ್ಗೆ ಪರಿಶೀಲಸಿ, ರೋಗಗಳು ಭಾರದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ನಗರ ಸಭೆಯ ಪರಿಸರ ಅಧಿಕಾರಿಗಳಿಗೆ ಸೂಚಿಸಿದ ಅವರು, ನಗರದ ಎಲ್ಲಾ ವಾರ್ಡ್‌ಗಳ ಚರಂಡಿಗಳನ್ನು ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳಬೇಕು. ಮಳೆಗಾಲವಾಗಿರುವುದರಿಂದ ಚರಂಡಿ, ರಸ್ತೆಯಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕು. ಸೊಳ್ಳೆ ಉತ್ಪತ್ತಿ ನಿಯಂತ್ರಣಗೊಳಿಸುವ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಸೊಳ್ಳೆ ನಾಶದ ದ್ರಾವಣವನ್ನು ಸಿಂಪಡಿಸಬೇಕು. ನಗರದ ವಿವಿಧ ಕಡೆ ನೀರಿನ ಸಂಗ್ರಹಣ ಕೇಂದ್ರಗಳ ಸ್ವಚ್ಛತೆ ಹಾಗೂ ನೀರಿನ ಪೈಪ್‌ಗ್ಳ ವ್ಯವಸ್ಥೆ ಆಗಿಂದಾಂಗ್ಗೆ ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.
ವೈಯಕ್ತಿಕ ರಕ್ಷಣೆ ಮತ್ತು ಪರಿಸರದ ಬಗ್ಗೆ ತಿಳುವಳಿಕೆ ಮೂಡಿಸಬೇಕು. ಹೆಚ್ಚಾಗಿ ನೀರು ನಿಲ್ಲುವ ಕಡೆ ಲಾರ್ವಾ ಮೀನುಗಳಾದ ಗಪ್ಸಿ ಗಾಂಬೂಸಿಯಾಗಳನ್ನು ಬಿಡುವಂತೆ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಈ ರೋಗಗಳು ಕಂಡು ಬಂದರೆ ತುರ್ತಾಗಿ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಅವರನ್ನು ತಾಲೂಕು ಅಥವಾ ಜಿಲ್ಲಾ ಮಟ್ಟದ ಆಸ್ಪತ್ರೆಗಳಿಗೆ ದಾಖಲಿಸಿ ಸೂಕ್ತವಾದ ಚಿಕಿತ್ಸೆ ನೀಡಲು ವಿಳಂಬವಾಗದಂತೆ ಎಚ್ಚರಿಕೆ ವಹಿಸಿ ಚಿಕಿತ್ಸೆ ನೀಡಬೇಕು ಎಂದು ತಿಳಿಸಿದರು.
ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿಯೂ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಮಲೇರಿಯಾ, ಡೆಂಘೀ, ಚಿಕೂನ್‌ಗುನ್ಯ ಕಾಯಿಲೆಗಳು ಹರಡದಂತೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಆರೋಗ್ಯ ಇಲಾಖೆಯ ಎಚ್.ಕೆ.ಮಂಜುನಾಥ್, ಡಿಎಚ್ಒ ಡಾ| ಅಶ್ವತ್‌ಬಾಬು, ಜಿಲ್ಲಾ ಸರ್ಜನ್ ಡಾ| ಕುಮಾರ್ ನಾಯಕ, ಎಲ್ಲಾ ತಾಲೂಕು ಆರೋಗ್ಯಾಧಿಕಾರಿಗಳು ಇನ್ನಿತರರಿದ್ದರು.