ಚಿಕ್ಕಮಗಳೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯು ಮೇ.25 ಮತ್ತು 26 ರಂದು ನಡೆಯಲಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸ್ವರ್ಧಾತ್ಮಕ ಪರೀಕ್ಷೆ ಸಿದ್ಧತೆಗಳ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೇ. 25 ಹಾಗೂ 26 ರಂದು 85 ಅಭ್ಯರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದಾರೆ. ನಗರದ ಬೇಲೂರು ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆ ನಡೆಯಲಿದ್ದು, ಮೇ. 25 ರಂದು ಸಾಮಾನ್ಯ ಪತ್ರಿಕೆ ಹಾಗೂ ಆಂಗ್ಲ ಭಾಷಾ ಪತ್ರಿಕೆ, ಮೇ. 26 ರಂದು ಗಣಿತ ಮತ್ತು ವಿಜ್ಞಾನ, ಸಮಾಜ ಪಾಠಗಳು ಹಾಗೂ ಭಾಷಾ ಸಾಮರ್ಥ್ಯ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144ರ ಪ್ರಕಾರ ನಿಷೇದಾಜ್ಞೆ ಜಾರಿಗೊಳಿಸಲಾಗುವುದು. ಉಪ ಪ್ರಾಂಶುಪಾಲ ಡಿ.ಎಸ್.ಪುಟ್ಟಸ್ವಾಮಿಗೌಡ ಅವರನ್ನು ಮುಖ್ಯ ಅಧೀಕ್ಷಕರನ್ನಾಗಿ ನೇಮಿಸಲಾಗಿದ್ದು, ಕೊಠಡಿ ಮೇಲ್ವಿಚಾರಕರನ್ನು ಪರೀಕ್ಷೆ ಕೇಂದ್ರದ ಮುಖ್ಯ ಅಧೀಕ್ಷಕರ ಮೂಲಕ ನೇಮಕ ಮಾಡಿಕೊಳ್ಳುವಂತೆ ಸೂಚಿಸಿದ ಅವರು, ಅಂಬಳೆ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಅವರನ್ನು ಮಾರ್ಗಾಧಿಕಾರಿಯನ್ನಾಗಿ ನೇಮಿಸಲಾಗಿದೆ. ಉಪನಿರ್ದೇಶಕರ ಕಚೆೇರಿಯ ವಿಷಯ ಪರಿವೀಕ್ಷಕ ಎಂ.ಕೆ.ಪತ್ತಾರ್ ಅವರನ್ನು ಸ್ಥಾನಿಕ ಜಾಗೃತ ದಳದ ಅಧಿಕಾರಿಯನ್ನಾಗಿ ನೇಮಿಸಲಾಗಿದ್ದು, ಪರೀಕ್ಷೆ ನಡೆಯುವ 2 ದಿವಸವೂ ಪರೀಕ್ಷೆ ಕೇಂದ್ರದ ಬಳಿ ಅಗತ್ಯ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗುವುದು ಎಂದು ತಿಳಿಸಿದರು.
ಪರೀಕ್ಷೆಯನ್ನು ಯಾವುದೇ ಅಕ್ರಮಗಳಿಗೆ ಆಸ್ಪದ ನೀಡದೆ ಕಟ್ಟುನಿಟ್ಟಾಗಿ ನಡೆಸಬೇಕು. ಪರೀಕ್ಷಾ ಆಕ್ರಮಗಳು ಕಂಡು ಬಂದರೆ ಸಂಬಂಧಪಟ್ಟ ಅಧಿಕಾರಿಯನ್ನು ಜವಾಬ್ದಾರರನ್ನಾಗಿ ಮಾಡಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿ 2 ಆಂಗ್ಲ ಭಾಷೆ ಹುದ್ದೆಗಳು, 45 ವಿಜ್ಞಾನ ವಿಷಯದ ಹುದ್ದೆಗಳು ಸೇರಿದಂತೆ ಒಟ್ಟು 47 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. 85 ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ನಂಜಯ್ಯ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಖಜಾನಾಧಿಕಾರಿ ಫಯಾಜ್ ಅಹಮ್ಮದ್ ಸೇರಿದಂತೆ ವಿವಿಧ ಇಲಾಖೆೆ ಅಧಿಕಾರಿಗಳು ಹಾಜರಿದ್ದರು.