Advertisement

ಬೇಡಿಕೆ ಈಡೇರಿಕೆಗೆ ಶಿಕ್ಷಕರ ಆಗ್ರಹ

01:27 PM Jul 10, 2019 | Naveen |

ಚಿಕ್ಕಮಗಳೂರು: ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸುವುದು, ವರ್ಗಾವಣೆ ಪ್ರಕ್ರಿಯೆ ಆರಂಭಿಸುವುದು, ಮುಂಬಡ್ತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

Advertisement

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಕರೆಯ ಮೇರೆಗೆ ಜಿಲ್ಲೆಯ ಬಹುತೇಕ ಎಲ್ಲ ಸರ್ಕಾರಿ ಶಾಲೆಗಳ ಶಿಕ್ಷಕರು ಒಂದು ದಿನ ಶಾಲೆಗೆ ರಜೆ ಹಾಕಿ ಪ್ರತಿಭಟನೆ ನಡೆಸಲು ಜಿಲ್ಲಾ ಕೇಂದ್ರಕ್ಕೆ ಆಗಮಿಸಿದ್ದರು.

ಇಲ್ಲಿನ ತಾಲೂಕು ಕಚೇರಿ ಆವರಣದಿಂದ ಬ್ಯಾನರ್‌, ಭಿತ್ತಿಪತ್ರದೊಂದಿಗೆ ಮೆರವಣಿಗೆ ಹೊರಟ ನೂರಾರು ಸಂಖ್ಯೆಯ ಶಿಕ್ಷಕರು, ಹನುಮಂತಪ್ಪ ವೃತ್ತ, ಎಂ.ಜಿ. ರಸ್ತೆ ಮೂಲಕ ಆಜಾದ್‌ ಪಾರ್ಕಿನಲ್ಲಿ ಸಮಾವೇಶಗೊಂಡು ತಮ್ಮ ವಿವಿಧ ಬೇಡಿಕೆಗಳ ಈಡೇರಿಗೆಗಾಗಿ ಆಗ್ರಹಿಸಿ ಘೋಷಣೆ ಕೂಗಿದರು.

ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಡಿಸಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಬಳಿಕ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಗೆ ತೆರಳಿ ಅವರ ಮೂಲಕ ಶಿಕ್ಷಣ ಸಚಿವರಿಗೂ ಮನವಿ ರವಾನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಎಸ್‌.ಟಿ.ರಾಜಪ್ಪ ಸಂಘದ ಜಿಲ್ಲಾಧ್ಯಕ್ಷ ಎಸ್‌.ಟಿ.ರಾಜಪ್ಪ, ರಾಜ್ಯ ಸರ್ಕಾರ ಈಗಾಗಲೇ ನಮ್ಮ ಕೆಲವು ಬೇಡಿಕೆಗಳನ್ನು ಈಡೇರಿಸಿದೆ. ಉಳಿದ ಬೇಡಿಕೆಗಳ ಈಡೇರಿಕೆಗೆ ಮುಖ್ಯಮಂತ್ರಿಗಳ ಬಳಿ ಹಕ್ಕೊತ್ತಾಯ ಮಾಡಲಾಗಿತ್ತು. ಅವರು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಆದರೆ, ಇಲ್ಲಿಯವರೆಗೂ ನಮ್ಮ ಯಾವುದೇ ಬೇಡಿಕೆ ಈಡೇರಿಸಲಿಲ್ಲ. ಹಾಗಾಗಿ, ವಿವಿಧ ಹಂತದಲ್ಲಿ ಹೋರಾಟ ಅನಿವಾರ್ಯವಾಗಿದೆ ಎಂದು ಹೇಳಿದರು.

Advertisement

2014ಕ್ಕಿಂತ ಮೊದಲು ನೇಮಕವಾದ ಪ್ರಾಥಮಿಕ ಶಾಲಾ ಶಿಕ್ಷಕರನ್ನು 1ರಿಂದ 5ನೇ ವರ್ಗಕ್ಕೆ ಸೀಮಿತಗೊಳಿಸಿದ ಆದೇಶವನ್ನು ರದ್ದುಗೊಳಿಸಿ, ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ವೇತನ ನಿಗದಿ ಮಾಡಬೇಕು. ಕಳೆದ 3ವರ್ಷದಿಂದ ಶಿಕ್ಷಕರ ವರ್ಗಾವಣೆ ಆಗದಿರುವುದರಿಂದ ವರ್ಗಾವಣೆ ಪ್ರಕ್ರಿಯೆ ಕೂಡಲೇ ಆರಂಭಿಸಬೇಕು ಎಂದು ಒತ್ತಾಯಿಸಿದರು.

ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸುವುದು, ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಗಳಲ್ಲಿರುವ ನ್ಯೂನತೆ ಸರಿಪಡಿಸಿ ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ಪರಿಗಣಿಸುವುದು, ಶಿಕ್ಷಕ-ವಿದ್ಯಾರ್ಥಿ ಅನುಪಾತ ಗುರುತಿಸುವಾಗ ಮುಖ್ಯ ಶಿಕ್ಷಕ, ದೈಹಿಕ ಶಿಕ್ಷಕರನ್ನು ಹೊರತುಪಡಿಸಿ ಶಿಕ್ಷಕರ ನಿಯೋಜನೆ ಮಾಡುವುದು, 6ನೇ ವೇತನ ಆಯೋಗದ ಅಂತಿಮ ವರದಿಯ ಶಿಫಾರಸ್ಸಿನ ಪ್ರಕಾರ ಮುಖ್ಯ ಶಿಕ್ಷಕರಿಗೆ 10, 15, 20, 25, 30ವರ್ಷದ ಬಡ್ತಿಗಳನ್ನು ನೀಡುವುದು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಉಪನಿರ್ದೇಶಕರ ಹುದ್ದೆ ವರೆಗೆ ಬಡ್ತಿ ನೀಡುವ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಂದರೇಶ್‌, ತಾಲೂಕು ಅಧ್ಯಕ್ಷ ಪರಮೇಶ್ವರಪ್ಪ, ಕಿರಣ್‌, ದೇವರಾಜಪ್ಪ, ಮಾದೇವಿ, ನಾಗಲಾಂಬಿಕೆ ಸೇರಿದಂತೆ ಜಿಲ್ಲೆಯ ಅಪಾರ ಸಂಖ್ಯೆಯ ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next