ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೋವಿಡ್ ಪರೀಕ್ಷಾ ಕೇಂದ್ರವನ್ನು ಶೀಘ್ರದಲ್ಲೇ ಪ್ರಾರಂಭಿಸುವಂತೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ| ಪ್ರಕಾಶ್ ಅಧಿಕಾರಿಗಳಿಗೆ ಸೂಚಿಸಿದರು.
ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್-19 ಸೋಂಕು ತಡೆಗೆ ವಿಧಿಸಲಾಗಿದ್ದ ಲಾಕ್‌ಡೌನ್ ಸಡಿಲಗೊಳಿಸಲಾಗಿದೆ. ಆದರೆ, ಸೋಂಕಿನ ಪ್ರಮಾಣ ದಿನೇ-ದಿನೇ ಹೆಚ್ಚುತ್ತಿದೆ. ಜನಸಾಮಾನ್ಯರು ಈ ಬಗ್ಗೆ ನಿರ್ಲಕ್ಷಿಸದೆ ಸೋಂಕಿನ ತಡೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಲಾಕ್‌ಡೌನ್‌ನಿಂದ ಉದ್ಯೋಗ ಕಳೆದುಕೊಂಡು ಆರ್ಥಿಕ ನಷ್ಟ ಅನುಭವಿಸುವುದು ಸೇರಿದಂತೆ ಬಡವರಿಗೆ ಸರ್ಕಾರ ವಿವಿಧ ಕಲ್ಯಾಣ ಯೋಜನೆಗಳು ಹಾಗೂ ಕಾರ್ಯಕ್ರಮಗಳು ಸೇರಿದಂತೆ ನೀಡಲಾಗಿರುವ ಸವಲತ್ತುಗಳನ್ನು ಪ್ರತಿಶತ ನೂರರಷ್ಟು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸವಾಗಬೇಕು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ| ಕೆ.ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು ಈವರೆಗೆ 28 ಕೋವಿಡ್-19 ಸೋಂಕು ಪ್ರಕರಣಗಳು ಕಂಡು ಬಂದಿದ್ದು, 72 ವರ್ಷದ ಒರ್ವ ವೃದ್ಧೆ ಮೃತಪಟ್ಟಿದ್ದಾರೆ. ಕೆಲವು ರೋಗಿಗಳು ಸೋಂಕಿನಿಂದ ಗುಣಮುಖರಾಗಿದ್ದು, ಸಕ್ರಿಯವಾಗಿ 8 ಪ್ರಕರಣಗಳು ಇವೆ ಎಂದು ತಿಳಿಸಿ, ಹೊರ ರಾಜ್ಯದಿಂದ ಬಂದ 223ಕ್ಕೂ ಹೆಚ್ಚು ಜನರನ್ನು ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಜಿಲ್ಲೆಯಲ್ಲಿ 2,772 ಬೆಡ್‌ಗಳನ್ನು ಮೀಸಲಿಡಲಾಗಿದೆ ಎಂದು ಪ್ರಾದೇಶಿಕ ಆಯುಕ್ತರಿಗೆ ಮಾಹಿತಿ ನೀಡಿದರು.
ಜಿಪಂ ಸಿಇಒ ಎಸ್. ಪೂವಿತಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಉಮೇಶ್, ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಂಜಯ್ಯ ಸೇರಿದಂತೆ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಇದ್ದರು.