ಚಿಕ್ಕಮಗಳೂರು: ಕೋವಿಡ್ ತುರ್ತು ಸಂದರ್ಭದಲ್ಲಿ ಜಿಲ್ಲೆಗೆ ಬೇರೆ ರಾಜ್ಯ ಹಾಗೂ ಹೊರ ದೇಶಗಳಿಂದ ಬಂದವರಿಗೆ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್‌ನಲ್ಲಿರಿಸಿದ್ದು ಅವರಿಗೆ ಉತ್ತಮ ಆಹಾರ ಪೂರೈಕೆ ಮಾಡಲಾಗುತ್ತಿದೆ ಎಂದು ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಎನ್. ಕೃಷ್ಣಮೂರ್ತಿ ತಿಳಿಸಿದರು.
ಮಂಗಳವಾರ ನಗರದ ಪ್ರವಾಸಿ ಮಂದಿರದಲ್ಲಿ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದು ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈವರೆಗೆ 27 ಹಾಸ್ಟೆಲ್
24 ಕ್ವಾರಂಟೈನ್ ಕೇಂದ್ರಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಹೊರ ರಾಜ್ಯ ಹಾಗೂ ಹೊರ ದೇಶಗಳಿಂದ ಬಂದವರಿಗೆ ಪ್ರತ್ಯೇಕ ಕ್ವಾರಂಟೈನ್ ಕೇಂದ್ರಗಳನ್ನು ತೆರೆದಿದ್ದು ಹಾಸ್ಟೆಲ್ ಸಿಬ್ಬಂದಿಗಳಿಂದ ಆಹಾರ ಸಿದ್ಧಪಡಿಸಿ ನೀಡಲಾಗುತ್ತಿದೆ ಎಂದರು. ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರ ಸುರಕ್ಷತಾ ಪರವಾನಗಿ ಪ್ರತಿ ಹಾಗೂ ತೂಕದ ಯಂತ್ರದ ಸತ್ಯಾಪನಾ ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಹಾಗೂ ನ್ಯಾಯಬೆಲೆ ಅಂಗಡಿಗಳನ್ನು ಸ್ವಚ್ಛವಾಗಿಟ್ಟು ಕೊಳ್ಳಬೇಕು. ಪ್ರಮಾಣಪತ್ರ ಹಾಗೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳದಿರುವ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗೆ ಸೂಚಿಸಿದರು.
ಸೀಮೆಎಣ್ಣೆ ಅಕ್ಕಿಯೊಂದಿಗೆ ದಾಸ್ತಾನು ಮಾಡದೇ ಪ್ರತ್ಯೇಕವಾಗಿ ಇರಿಸಲು ಸೂಚಿಸಲಾಗಿದ್ದು, ಸರ್ಕಾರ ನಿಗದಿಪಡಿಸಿದ ದರದ ಪ್ರಮಾಣದಲ್ಲಿ ಪಡಿತರ ಚೀಟಿದಾರರಿಗೆ ಪಡಿತರ ವಿತರಿಸುವಂತೆ ಮತ್ತು ಪಡಿತರ ಚೀಟಿದಾರರಿಂದ ಯಾವುದೇ ಹಣ ಪಡೆದಂತಹ ಪ್ರಕರಣಗಳು ಕಂಡುಬಂದಲ್ಲಿ, ಸಾರ್ವಜನಿಕರಿಂದ ದೂರು ಬಂದಲ್ಲಿ ಅಂತಹ ನ್ಯಾಯಬೆಲೆ ಅಂಗಡಿಗಳ ಮೇಲೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಪಡಿತರ ಸರಬರಾಜು ಮಾಡಲು ಮೂರು ದಾಸ್ತಾನು ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಲಾಕ್‌ಡೌನ್ ಸಂದರ್ಭದಲ್ಲಿ ಫಲಾನುಭವಿ ಮಕ್ಕಳಿಗೆ, ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ಮನೆ-ಮನೆಗಳಿಗೆ ಪಡಿತರವನ್ನು ವಿತರಿಸಿರುವ ಬಗ್ಗೆ ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ಪೂರೈಕೆ ಸಂಬಂಧ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಜಿಲ್ಲೆಯಲ್ಲಿ ಮೇ ತಿಂಗಳಲ್ಲಿ ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ 227 ಇದ್ದು, ಇವರನ್ನು ತಪಾಸಣೆಗೆ ಒಳಪಡಿಸಿದ ನಂತರವು 18 ಮಕ್ಕಳು ಮಾತ್ರ ಗುಣಮುಖರಾಗಿದ್ದು, ಸರಿಯಾದ ಚಿಕಿತ್ಸೆಯನ್ನು ಕೊಡಿಸಿ ಉಳಿದ ಮಕ್ಕಳನ್ನು ಶೀಘ್ರದಲ್ಲೇ ಗುಣಮುಖರಾಗಿಸುವಂತೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ರಜೆ ದಿನಗಳನ್ನು ಹೊರತು ಪಡೆಸಿ ಉಳಿದ ಎಲ್ಲಾ ದಿನಗಳ ಪಡಿತರವನ್ನು ವಿತರಿಸಲಾಗಿದ್ದು, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಪಡಿತರದ ಕೊರತೆ ಉಂಟಾಗಿದೆ ಎಂಬ ದೂರು ಕೇಳಿ ಬಂದಿದ್ದು ಬೇಡಿಕೆ ಪಟ್ಟಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಪಡಿತರ ಬಂದ ತಕ್ಷಣ ತ್ವರಿತಗತಿಯಲ್ಲಿ ವಿತರಣೆಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಸಭೆಯಲ್ಲಿ ರಾಜ್ಯ ಆಹಾರ ಆಯೋಗದ ಸದಸ್ಯರಾದ ಶಿವಶಂಕರ್, ಮಹಮ್ಮದ್ ಆಲಿ, ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ಡಾ| ಎಚ್.ಎಲ್. ನಾಗರಾಜ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ನಾಗರಾಜ್, ಸಮಾಜ ಕಲ್ಯಾಣಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ ಮತ್ತಿತರರು ಇದ್ದರು.