ಶಿವಮೊಗ್ಗ: ಜಿಲ್ಲೆಯಲ್ಲಿ ಬಾಲ ಕಾರ್ಮಿಕರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಕಾರ್ಯಕಾರಿ ಸಮಿತಿ ಹಾಗೂ ಮೇಲ್ವಿಚಾರಣೆ ಮತ್ತು ಜಾಗರೂಕತೆ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಬಾಲ ಕಾರ್ಮಿಕರ ಪತ್ತೆಗೆ ನಿರಂತರ ಕಾರ್ಯಾಚರಣೆ ಮಾಡಬೇಕು. ಇಂತಹ ಸಂದರ್ಭದಲ್ಲಿ ಕಾರ್ಮಿಕ ಇಲಾಖೆ ಜತೆಗೆ ಪೊಲೀಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸಹಕರಿಸಬೇಕು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ಥಳೀಯಾಡಳಿತದ ಮುಖ್ಯಾ ಧಿಕಾರಿಗಳ ಸಹಕಾರ ಪಡೆದುಕೊಳ್ಳಬೇಕು ಎಂದು ಹೇಳಿದರು.
ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳು ಅರೆಕಾಲಿಕವಾಗಿ ಹೊರಗೆ ಕೆಲಸ ಮಾಡುತ್ತಿರುವ ಬಗ್ಗೆ ಪರಿಶೀಲನೆ ನಡೆಸಬೇಕು. ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ವಸತಿ ನಿಲಯಗಳಲ್ಲಿ ಮಾಹಿತಿ ಸಂಗ್ರಹಿಸಬೇಕು. ಬಾಲ ಕಾರ್ಮಿಕರನ್ನು ನಿಯೋಜಿಸದಂತೆ ವಾಣಿಜ್ಯ ಸಂಸ್ಥೆಗಳು ಹಾಗೂ ಉದ್ದಿಮೆಗಳಿಗೆ ಪರವಾನಗಿ ನೀಡುವ ಸಂದರ್ಭದಲ್ಲಿ ಈ ಕುರಿತು ಮುಚ್ಚಳಿಕೆ ತೆಗೆದುಕೊಳ್ಳಬೇಕು ಎಂದು ಅವರು ಹೇಳಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ವಿಶ್ವನಾಥ ಅವರು ಮಾತನಾಡಿ, ಜಿಲ್ಲೆಯಲ್ಲಿ ಮಾರ್ಚ್ ತಿಂಗಳಿನಿಂದ ಇದುವರೆಗೆ ಒಟ್ಟು 427 ತಪಾಸಣೆಗಳನ್ನು ಕೈಗೊಳ್ಳಲಾಗಿದ್ದು, ಮೂರು ಬಾಲ ಕಾರ್ಮಿಕರು ಪತ್ತೆಯಾಗಿದ್ದಾರೆ. ಎಲ್ಲಾ ಮೂರು ಪ್ರಕರಣಗಳಲ್ಲಿ ಮೊಕದ್ದಮೆ ದಾಖಲಿಸಲಾಗಿದೆ. 2016-17ನೇ ಸಾಲಿನಲ್ಲಿ 11, 17-18ನೇ ಸಾಲಿನಲ್ಲಿ 5 ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಾಗಿದೆ. ಅಪಾಯಕಾರಿಯಲ್ಲದ ಕೆಲಸದಲ್ಲಿ 14ವರ್ಷಕ್ಕಿಂತ ಕೆಳಗಿನ ಮಕ್ಕಳು ಹಾಗೂ ಅಪಾಯಕಾರಿ ವಲಯದಲ್ಲಿ 18 ವರ್ಷದ ಒಳಗಿನ ಮಕ್ಕಳನ್ನು ನೇಮಕ ಮಾಡುವುದನ್ನು ನಿಷೇಧಿ ಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ, ಅಪರ ಜಿಲ್ಲಾಧಿಕಾರಿ ಅನುರಾಧಾ, ಜಿಲ್ಲಾ ಬಾಲಕಾರ್ಮಿಕ ಯೋಜನಾಧಿಕಾರಿ ರಘುನಾಥ್, ಮಹಿಳಾಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಈರಣ್ಣ ಪಾಂಚಾಳ್ ಮತ್ತಿತರ ಅಧಿಕಾರಿಗಳು ಇದ್ದರು.