ಬೆಂಗಳೂರು: ಮುಂದಿನ ಮೂರು ತಿಂಗಳಲ್ಲಿ ರಾಜ್ಯದಲ್ಲಿನ ಎಲ್ಲ ಟ್ಯಾಕ್ಸಿ ಕ್ಯಾಬ್‌ಗಳಲ್ಲಿನ “ಚೈಲ್ಡ್ ಲಾಕ್’ ವ್ಯವಸ್ಥೆಯನ್ನು ನಿಷ್ಕ್ರಿಯಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ ಬುಧವಾರ ಹೈಕೋರ್ಟ್‌ಗೆ ಭರವಸೆ ನೀಡಿದೆ.
ಚೈಲ್ಡ್ ಲಾಕ್ ವ್ಯವಸ್ಥೆ ನಿಷ್ಕ್ರಿಯಗೊಳಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರು ಪ್ರಸೂತಿ ಮತ್ತು ಸ್ತ್ರೀ ರೋಗ ಸೊಸೈಟಿ (ಬಿಎಸ್‌ಒಜಿ) ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಹಾಗೂ ನ್ಯಾ. ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.
ವಿಚಾರಣೆ ವೇಳೆ ಸರ್ಕಾರದ ಪರ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎ.ಎಸ್.ಪೊನ್ನಣ್ಣ ಹಾಜರಾಗಿ, ಟ್ಯಾಕ್ಸಿ ಹಾಗೂ ಕ್ಯಾಬ್‌ಗಳಲ್ಲಿ ಚೈಲ್ಡ್ ಲಾಕ್ ವ್ಯವಸ್ಥೆ ನಿಷ್ಕ್ರಿಯೆಗೊಳಿಸಲು ರಾಜ್ಯ ಸರ್ಕಾರ ತಿದ್ದುಪಡಿಸಿ ನಿಯಮ ರೂಪಿಸಿ ಅಧಿಸೂಚನೆ ಹೊರಡಿಸಿದೆ.
ರಾಜ್ಯದಲ್ಲಿ ಸುಮಾರು 2.5 ಲಕ್ಷ ಟ್ಯಾಕ್ಸಿ ಹಾಗೂ ಕ್ಯಾಬ್‌ಗಳಿವೆ. ಆ ಪೈಕಿ ಈಗಾಗಲೇ 42 ಸಾವಿರ ಕ್ಯಾಬ್‌ಗಳಲ್ಲಿ ಚೈಲ್ಡ್ ಲಾಕ್ ವ್ಯವಸ್ಥೆಯನ್ನು ನಿಷ್ಕ್ರಿಯಗೊಳಿಸಲಾಗಿದೆ. ಮುಂದಿನ ಮೂರು ತಿಂಗಳಲ್ಲಿ ಉಳಿದ ಎಲ್ಲ ಕ್ಯಾಬ್‌ಗಳಲ್ಲಿ ಚೈಲ್ಡ್ ಲಾಕ್ ವ್ಯವಸ್ಥೆಯನ್ನು ನಿಷ್ಕ್ರಿಯಗೊಳಿಸಲಾಗುವುದು ಎಂದು ಭರವಸೆ ನೀಡಿದರು. ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿ ಇತ್ಯರ್ಥಪಡಿಸಿತು.
ಆ್ಯಪ್ ಆಧಾರಿತ ಕ್ಯಾಬ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಚಾಲಕರು ಚೈಲ್ಡ್ ಸೇಫ್ಟಿ ಲಾಕ್ ಸಿಸ್ಟಮ್ ದುರ್ಬಳಕೆ ಮಾಡಿ ದೌರ್ಜನ್ಯ ಎಸಗುತ್ತಿದ್ದಾರೆ. ಹೀಗಾಗಿ ಚೈಲ್ಡ್ ಸೇಫ್ಟಿ ಲಾಕ್ ಸಿಸ್ಟಮ್ ನಿಷ್ಕ್ರಿಯಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು. ಹಾಗೆಯೇ, ಕ್ಯಾಬ್‌ಗಳಲ್ಲಿ ಪ್ರಯಾಣಿಕರಿಗೆ ಕಿರುಕುಳ ನೀಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.