Advertisement

ಬಾಲ್ಯ ವಿವಾಹ ಮಾಡಿದರೆ ಕಠಿಣ ಕ್ರಮ

02:01 PM Jun 01, 2019 | Suhan S |

ಕೊಪ್ಪಳ: ಬಾಲ್ಯ ವಿವಾಹ ತಡೆ ಸಮಿತಿಯು ಅಪ್ರಾಪ್ತ ಮಕ್ಕಳ ಮದುವೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಆದ್ದರಿಂದ ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮಾಡಿದವರ ವಿರುದ್ಧ ನಿರ್ದಕ್ಷಣ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಬಾಲ್ಯ ವಿವಾಹ ತಡೆ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್‌ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಕರ್ನಾಟಕ ತಿದ್ದುಪಡಿ-2016ರ ಅನುಷ್ಠಾನ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಾಲ್ಯ ವಿವಾಹದಿಂದ ಮಗು ಅದರ ಹಕ್ಕುಗಳನ್ನು ಅನುಭವಿಸುವ ಸ್ವಾತಂತ್ರ್ಯ ಕಳೆದುಕೊಳ್ಳುತ್ತದೆ. ದೌರ್ಜನ್ಯಕೊಳ ಗಾಗುವದಲ್ಲದೇ ತಾಯಿ-ಶಿಶು ಮರಣಕ್ಕೆ ಹಾಗೂ ಬಾಲ್ಯ ವಿವಾಹಗಳು ಅಪೌಷಿಐಕ ಮಕ್ಕಳ ಜನನಕ್ಕೂ ಸಹ ಕಾರಣವಾಗಲಿವೆ. ಈ ಹಿನ್ನೆಲೆಯಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಜಾರಿಗೆ ಬಂದಿದೆ. ಕೊಪ್ಪಳ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸುವುದು ಜಿಲ್ಲಾಡಳಿತದ ಸಂಕಲ್ಪವಾಗಿದ್ದು, ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಮದುವೆಗಳು ನಡೆದರೆ ಯಾವುದೇ ಕಾರಣಕ್ಕೂ ಸಹಿಸಲ್ಲ. ಅಪ್ರಾಪ್ತೆಯೊಂದಿಗೆ ವಿವಾಹವಾದ ವರ ಮತ್ತು ಇಬ್ಬರೂ ಪೋಷಕರ ಹಾಗೂ ವಿವಾಹಕ್ಕೆ ಪ್ರೋತ್ಸಾಹಿಸಿದವರ ವಿರುದ್ಧ ಸಹ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಭಾವಕ್ಕೂ ಮಣಿಯದೇ ಕಾರ್ಯನಿರ್ವಹಿಸಿ ಜಿಲ್ಲೆಯಲ್ಲಿ ಬಾಲ್ಯವಿವಾಹಕ್ಕೆ ಕಡಿವಾಣ ಹಾಕಬೇಕು ಎಂದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಿರೇಂದ್ರ ನಾವದಗಿ ಮಾತನಾಡಿ, 2018-19 ಮತ್ತು 2019-20ನೇ ಸಾಲಿನಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಕರ್ನಾಟಕ ತಿದ್ದುಪಡಿ-2016ರ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಏಪ್ರಿಲ್-2018ರಿಂದ 25 ಮೇ 2019 ರವರೆಗೆ ಜಿಲ್ಲೆಯಲ್ಲಿ ಬಾಲ್ಯವಿವಾಹದಿಂದ 193 ಬಾಲಕಿಯರನ್ನು ಮತ್ತು ನಾಲ್ವರು ಬಾಲಕರನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರಪಡಿಸಿದೆ. ಬಾಲ್ಯ ವಿವಾಹ ಮಾಡಿದವರ ವಿರುದ್ದ ಬಾಲ್ಯವಿವಾಹ ನಿಷೇಧ ಕಾಯ್ದೆ-2006ರಡಿ 14 ಪ್ರಕರಣಗಳು ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ-2016 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012ರಡಿಯಲ್ಲಿ 3 ಪ್ರಕರಣಗಳನ್ನು ಸೇರಿದಂತೆ ಒಟ್ಟು 17 ಪ್ರಕರಣಗಳನ್ನು ದಾಖಲಿಸಿದೆ. 3 ಪ್ರಕರಣಗಳಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದು ಬಾಲ್ಯವಿವಾಹವನ್ನು ತಡೆಗಟ್ಟಿದ್ದು, ಈ ಪ್ರಕ್ರಿಯಲ್ಲಿ ಜಿಲ್ಲಾ ಪೊಲೀಸ್‌, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ, ಕೊಪ್ಪಳರವರ ಸಹಕಾರ ಶ್ಲಾಘನೀಯವಾಗಿದೆ ಎಂದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಈರಣ್ಣಾ ಪಾಂಚಾಳ್‌ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ, ಬಾಲಮಂದಿರಗಳ ಅಧೀಕ್ಷಕರು, ಮಕ್ಕಳ ಸಹಾಯವಾಣಿ-1098ರ ಸಿಬ್ಬಂದಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next