ಚಿತ್ರದುರ್ಗ: 75ನೇ ಸ್ವಾತಂತ್ರ್ಯೋತ್ಸವ ವದ ಹಿನ್ನೆಲೆಯಲ್ಲಿ ಆಚರಿಸುತ್ತಿರುವ ಅಮೃತ ಮಹೋತ್ಸವದ ಅಂಗವಾಗಿ ನಗರದ ಕೋಟೆ ಮುಂಭಾಗದಿಂದ ನಡೆದ ಸ್ವಾತಂತ್ರ್ಯೋತ್ಸವ ಓಟದಲ್ಲಿ ಅ ಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಇಲಾಖೆ, ನೆಹರು ಯುವ ಕೇಂದ್ರ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಸ್ವಾತಂತ್ರ್ಯ ಓಟ ಆಯೋಜಿಸಲಾಗಿತ್ತು. ಕೋಟೆ ಆವರಣದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿಕಾ ಜಾಥಾಗೆ ಹಸಿರು ನಿಶಾನೆ ತೋರಿಸಿದರು.
ಈ ವೇಳೆ ಮಾತನಾಡಿದ ಅವರು, ಭಾರತ ದೇಶ ಸ್ವಾತಂತ್ರ್ಯ ಪಡೆದು 75 ವರ್ಷಗಳಾಗುತ್ತಿವೆ. ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಚಳವಳಿ, ರಾಷ್ಟ್ರಾಭಿಮಾನ, ಸ್ವಾತಂತ್ರ್ಯ ಯೋಧರ ತ್ಯಾಗ, ಬಲಿದಾನಗಳನ್ನು ಯುವಜನರಿಗೆ ತಿಳಿಸುವುದು ಅಗತ್ಯ ಎಂದರು. ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾ ಧಿಕಾರಿ ಎನ್. ಸುಹಾಸ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭಾರತ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವವನ್ನು ಹಬ್ಬದ ರೀತಿಯಲ್ಲಿ ಆಚರಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈಗಾಗಲೇ ಮಾ. 12ರಂದು ಐತಿಹಾಸಿಕ ಕೋಟೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಹಾಗೂ ಯುವಜನರಲ್ಲಿ ದೇಶಪ್ರೇಮ ಮೂಡಿಸುವ ನಿಟ್ಟಿನಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
1919, ಏ. 13 ರಂದು ಪಂಜಾಬ್ ನ ಅಮೃತಸರದ ಜಲಿಯಾನ್ ವಾಲಾ ಬಾಗ್‌ನಲ್ಲಿ ನಡೆದ ಹತ್ಯಾಕಾಂಡದಲ್ಲಿ ಹುತಾತ್ಮರಾದವರ ಸ್ಮರಣಾರ್ಥ ಸ್ವಾತಂತ್ರ್ಯೋತ್ಸವ ಓಟ ಆಯೋಜಿಸಲಾಗಿದೆ ಎಂದು ಜಿಲ್ಲಾ ವಾರ್ತಾಧಿಕಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ಧನಂಜಯಪ್ಪ ತಿಳಿಸಿದರು.
ಕೋಟೆ ಆವರಣದಿಂದ ಪ್ರಾರಂಭವಾದ ಸ್ವಾತಂತ್ರ್ಯೋತ್ಸವ ಓಟ, ಉಚ್ಚಂಗಿ ಯಲ್ಲಮ್ಮ ದೇಗುಲ, ಆನೆಬಾಗಿಲು, ಗಾಂಧಿ ವೃತ್ತ, ಎಸ್‌ಬಿಎಂ ವೃತ್ತ, ಪ್ರವಾಸಿ ಮಂದಿರ ಮಾರ್ಗವಾಗಿ ಸಂಚರಿಸಿ ಒನಕೆ ಓಬವ್ವ ವೃತ್ತದಲ್ಲಿ ಮುಕ್ತಾಯವಾಯಿತು. ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಮಹೀಬುಲ್ಲಾ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಘಟಕದ ಅಧ್ಯಕ್ಷ ಮಹೇಂದ್ರನಾಥ್, ಕಾರ್ಯದರ್ಶಿ ಮಜರುಲ್ಲಾ, ವಕೀಲರಾದ ಫಾತ್ಯರಾಜನ್ ಮತ್ತಿತರರು ಇದ್ದರು.