ಚಿತ್ರದುರ್ಗ: ಕೋವಿಡ್ ಎರಡನೇ ಅಲೆ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಇಡೀ ನಗರ ಬಂದ್ ಆಗಿರುವುದರಿಂದ ಜಿಲ್ಲಾಸ್ಪತ್ರೆಗೆ ಬರುವ ರೋಗಿಗಳು ಹಾಗೂ ಅವರ ಸಂಬಂಧಿ ಕರಿಗೆ ಊಟಕ್ಕೆ ತೊಂದರೆಯಾಗಬಾರದು ಎನ್ನುವ ಕಾರಣದಿಂದ ಜಿಲ್ಲಾಸ್ಪತ್ರೆ ಆವರಣದಲ್ಲಿ ಜಿಲ್ಲಾ ಕಾಂಗ್ರೆಸ್‌ನಿಂದ ಭಾನುವಾರ ಆಹಾರದ ಪೊಟ್ಟಣಗಳನ್ನು ವಿತರಿಸಲಾಯಿತು.
ಈ ವೇಳೆ ಮಾತನಾಡಿದ ಇಂಟೆಕ್ ರಾಜ್ಯ ಉಪಾಧ್ಯಕ್ಷ ಎ. ಜಾಕೀರ್‌ಹುಸೇನ್, ರಾಜ್ಯ ಸರ್ಕಾರ ಲಾಕ್‌ಡೌನ್ ಘೋಷಿಸಿರುವುದರಿಂದ ಎಲ್ಲಾ ಬಗೆಯ ವ್ಯಾಪಾರ ವಹಿವಾಟುಗಳು ಬಂದ್ ಆಗಿವೆ. ಕುಡಿಯಲು ನೀರು ಸಿಗದಂತಹ ಪರಿಸ್ಥಿತಿ ಇದೆ. ಆಸ್ಪತ್ರೆಗೆ ಬರುವ ಬಡ ರೋಗಿಗಳಿಗೆ ಮತ್ತು ಅವರ ಕುಟುಂಬದವರಿಗೆ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ ಲಾಕ್ ಡೌನ್ ಮುಗಿಯುವವರೆಗೆ ಪ್ರತಿನಿತ್ಯ ಮಧ್ಯಾಹ್ನ ಆಹಾರದ ಪೊಟ್ಟಣಗಳನ್ನು ವಿತರಿಸಲಾಗುವುದು ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್ ಪೀರ್ ಮಾತನಾಡಿ, ಮೇ 12 ರವರೆಗೆ ಲಾಕ್ ಡೌನ್ ಇರುವುದರಿಂದ ದಿನವೂ ಕೂಲಿ ಮಾಡಿ ಬದುಕುವ ಬಡ ಹಾಗೂ ಮಧ್ಯಮ ವರ್ಗದವರಿಗೆ ತೊಂದರೆಯಾಗಿದೆ. ಕೊರೊನಾ ಹತೋಟಿಗೆ ತರುವುದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜಾರಿಗೆ ತಂದಿರುವ ಮಾರ್ಗಸೂಚಿಯನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಜಿಲ್ಲಾಸ್ಪತ್ರೆಗೆ ಬರುವ ಬಡ ರೋಗಿಗಳಿಗೆ ಊಟಕ್ಕೆ ತೊಂದರೆಯಾಗದಂತೆ ಜಿಲ್ಲಾ ಕಾಂಗ್ರೆಸ್ ವಿವಿಧ ಘಟಕಗಳಿಂದ ಇನ್ನು ಹತ್ತು ದಿನಗಳ ಕಾಲ ಆಹಾರದ ಪೊಟ್ಟಣಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.
ಇಂಟೆಕ್ ಜಿಲ್ಲಾಧ್ಯಕ್ಷ ಅಶೋಕ್ ನಾಯ್ಡು, ಅಸಂಘಟಿತ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಮೋಹನ್ ಪೂಜಾರಿ, ಕಾಂಗ್ರೆಸ್ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಸೈಯದ್ ಮೋಯಿದ್ದಿನ್(ಚೋಟು) ಯೂತ್ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷ ಸೈಯದ್ ಖುದ್ದೂಸ್, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್.ಡಿ. ಕುಮಾರ್, ಶಿಕ್ಷಕರ ಮತ್ತು ಪದವೀಧರ ಕ್ಷೇತ್ರ ವಿಭಾಗದ ಅಧ್ಯಕ್ಷ ಮುದಸಿರ್ ನವಾಜ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮಹಮ್ಮದ್ ಮತ್ತಿತರರು ಇದ್ದರು.