ಚಿತ್ರದುರ್ಗ: ನಗರದ ಜಿಲ್ಲಾ ಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಭಾನುವಾರ ಸರಳವಾಗಿ ಆಚರಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಾಡಪ್ರಭು ಕೆಂಪೇಗೌಡರ 512ನೇ ಜಯಂತಿಯನ್ನು ಸರಳವಾಗಿ ಆಯೋಜಿಸಲಾಗಿತ್ತು.
ಈ ವೇಳೆ ಜಿಲ್ಲಾ ವಾರ್ತಾಧಿಕಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಧನಂಜಯ ಮಾತನಾಡಿ, ದೇಶದ ಸಿಲಿಕಾನ್ ಸಿಟಿ, ಉದ್ಯಾನನಗರಿ ಎಂದು ಗುರುತಿಸಿಕೊಂಡಿರುವ ಬೆಂಗಳೂರನ್ನು ಕಟ್ಟುವಲ್ಲಿ ನಾಡಪ್ರಭು ಕೆಂಪೇಗೌಡರ ಶ್ರಮ ಹಾಗೂ ತ್ಯಾಗ ಅಪಾರವಾಗಿದೆ ಎಂದರು.
ಕೆಂಪೇಗೌಡರು ದೂರದೃಷ್ಟಿ, ಜಾತ್ಯತೀತ ಮನೋಭಾವ, ಧರ್ಮ ಸಹಿಷ್ಣುತೆ ಮತ್ತು ಪ್ರಜಾವಾತ್ಸಲ್ಯದಂತಹ ಅಪರೂಪದ ಗುಣಗಳಿಂದಾಗಿ ಇಂದಿಗೂ ಸ್ಮರಣೀರಾಗಿದ್ದಾರೆ ಎಂದು ಸ್ಮರಿಸಿದರು. ಕೆಂಪೇಗೌಡರ ಜಯಂತಿಯನ್ನು ಸರ್ಕಾರದಿಂದ ಆಚರಿಸಲಾಗುತ್ತಿದ್ದು, ಕೆಂಪೇಗೌಡರ ತತ್ವ ಮತ್ತು ಆದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು.
ಅವರು ಹಾಕಿಕೊಟ್ಟ ಹಾದಿಯಲ್ಲಿ ಎಲ್ಲರೂ ನಡೆಯಬೇಕು. ಇಂತಹ ಮಹಾನ್ ನಾಯಕರ ನಿಷ್ಠೆ, ಪ್ರಾಮಾಣಿಕತೆಯನ್ನು ಯುವ ಜನತೆ ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಸಮಾಜದ ಅಧ್ಯಕ್ಷರಾದ ಹನುಮಂತಪ್ಪ, ಕಾರ್ಯದರ್ಶಿ ಜಗನ್ನಾಥ್, ಗುನ್ನಯ್ಯ, ಶಿಕ್ಷಕ ಚಿದಾನಂದ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಪರಮೇಶ್ ಉಪಸ್ಥಿತರಿದ್ದರು.