ಚಿತ್ರದುರ್ಗ: ಕೊರೊನಾ ಹಾವಳಿಯಿಂದ ತೊಂದರೆಗೀಡಾದ ಖಾಸಗಿ ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಸರ್ಕಾರದ ಜೊತೆ ಚರ್ಚಿಸಿ ಪ್ಯಾಕೇಜ್ ವ್ಯವಸ್ಥೆ ಮಾಡಲಾಗಿದೆ ಎಂದು ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ತಿಳಿಸಿದರು.
ವಿಧಾನ ಪರಿಷತ್ ಸದಸ್ಯರಾದ ಡಾ| ವೈ.ಎ. ನಾರಾಯಣಸ್ವಾಮಿ ಹಾಗೂ ಡಾ|ಚಿದಾನಂದಗೌಡ ಅಭಿಮಾನಿ ಬಳಗದಿಂದ ಪಿಳ್ಳೆಕೆರೇನಹಳ್ಳಿಯ ಬಾಪೂಜಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ಹಮ್ಮಿಕೊಂಡಿದ್ದ ಖಾಸಗಿ ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಆಹಾರದ ಕಿಟ್ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಕೊರೊನಾ ಕಾರಣದಿಂದ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ವೇತನವಿಲ್ಲದೆ ಕಷ್ಟಪಡುವಂತಾಯಿತು. ಹಾಗಾಗಿ ವಿಧಾನ ಪರಿಷತ್ ಸದಸ್ಯರಾದ ಡಾ|ವೈ.ಎ.ನಾರಾಯಣಸ್ವಾಮಿ, ಚಿದಾನಂದಗೌಡ ಹಾಗೂ ನಾನು ಸೇರಿದಂತೆ ಅನೇಕರು ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿದೆವು. ಪರಿಣಾಮವಾಗಿ ತಲಾ 5 ಸಾವಿರ ರೂ. ಪ್ಯಾಕೇಜ್ ಘೋಷಿಸಲಾಗಿದೆ. ಜೊತೆಗೆ ಇಬ್ಬರು ವಿಧಾನ ಪರಿಷತ್ ಸದಸ್ಯರು ಆಹಾರದ ಕಿಟ್ ವಿತರಿಸುವ ವ್ಯವಸ್ಥೆ ಮಾಡಿದ್ದಾರೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಡಾ| ವೈ.ಎ.ನಾರಾಯಣಸ್ವಾಮಿ ಮಾತನಾಡಿ, ಶಿಕ್ಷಕರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಅವರಿಗೆ ಧೈರ್ಯ ತುಂಬುವ ನಿಟ್ಟಿನಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಎಂತಹ ಕಷ್ಟದ ಸಂದರ್ಭದಲ್ಲೂ ನಾನು ನಿಮ್ಮ ಜೊತೆ ಇರುತ್ತೇನೆ. ನಿಮ್ಮ ಕಷ್ಟ ನಿವಾರಣೆಗೆ ನನ್ನ ಕೈಲಾದ ಸಹಕಾರ ನೀಡುತ್ತೇನೆ ಎಂದರು.
ಖಾಸಗಿ ಅನುದಾನ ರಹಿತ ಶಾಲಾ ಶಿಕ್ಷಕರ ಕಷ್ಟ ಅರಿತ ನಾವು ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ವೈ. ಅವರಿಗೆ ಮನವಿ ಮಾಡಿದೆವು. ತಲಾ 25 ಸಾವಿರ ರೂ. ಘೋಷಣೆ ಮಾಡುವಂತೆ ಒತ್ತಾಯಿಸಿದೆವು. ಆದರೆ ಅನುದಾನದ ಕೊರತೆಯಿಂದಾಗಿ ತಲಾ 5 ಸಾವಿರ ರೂ. ಘೋಷಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತೂಮ್ಮೆ ಪ್ಯಾಕೇಜ್ ನೀಡುವ ಅವಕಾಶವಿದೆ. ಶಿಕ್ಷಕರಿಗೆ 5 ಸಾವಿರ ಕೋವಿಡ್ ಕಿಟ್ ವಿತರಿಸಲಾಗಿದೆ ಎಂದು ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಚಿದಾನಂದಗೌಡ ಮಾತನಾಡಿ, ರಾಜ್ಯದಲ್ಲಿ 27 ಸಾವಿರ ಖಾಸಗಿ ಶಾಲೆಗಳಿವೆ. 3 ಲಕ್ಷ ಶಿಕ್ಷಕರು ಕೆಲಸ ಮಾಡುತ್ತಿದ್ದಾರೆ.
ಸುಮಾರು 5 ರಿಂದ 6 ಲಕ್ಷ ಮಕ್ಕಳು ಓದುತ್ತಿದ್ದಾರೆ. ಇಂತಹ ಶಾಲೆಯ ಶಿಕ್ಷಕರು ಕಳೆದ ಒಂದೂವರೆ ವರ್ಷದಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅವರ ಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ 5 ಜಿಲ್ಲೆಯ 32 ತಾಲೂಕುಗಳಲ್ಲಿ 10 ಸಾವಿರ ಆಹಾರದ ಕಿಟ್ ವಿತರಿಸಲಾಗಿದೆ ಎಂದು ಹೇಳಿದರು. ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅಧ್ಯಕ್ಷತೆ ವಹಿಸಿದ್ದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಚಂದ್ರಿಕಾ ಲೋಕನಾಥ್, ಯುವ ಘಟಕದ ಅಧ್ಯಕ್ಷ ಹನುಮಂತೇಗೌಡ, ಮದಕರಿಪುರ ಗ್ರಾಪಂ ಉಪಾಧ್ಯಕ್ಷೆ ಜ್ಯೋತಿ, ಎ.ರೇಖಾ, ಮಲ್ಲಿಕಾರ್ಜುನ್, ಡಿಎಚ್‌ಒ ಡಾ|ರಂಗನಾಥ್ ಹಾಜರಿದ್ದರು.