ಚಿತ್ರದುರ್ಗ: ರಾಜ್ಯದಲ್ಲಿ ವಿಶ್ವಕರ್ಮ ಸಮುದಾಯ ಕೋವಿಡ್-19ನಿಂದಾಗಿ ಸಂಕಷ್ಟಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬು ಪತ್ತಾರ ತಿಳಿಸಿದರು.
ನಗರದ ಪ್ರವಾಸಿಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವಕರ್ಮ ಸಮುದಾಯದ ಪಂಚ ಕಸುಬುಗಳಾದ ಬಡಗಿ, ಕಮ್ಮಾರರು, ಅಕ್ಕಸಾಲಿಗರು, ಲೋಹದ ಕೆಲಸ, ಶಿಲ್ಪಕಲೆ ಕೆತ್ತನೆ ಮಾಡುವವರು ಉದ್ಯೋಗವಿಲ್ಲದೆ ತೀವ್ರ ತೊಂದರೆಗೆ ಸಿಲುಕಿದ್ದಾರೆ ಎಂದರು.
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಶಿವಾರ ಪಟ್ಟಣದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಿಲ್ಪಕಲಾ ಭವನ ನಿರ್ಮಿಸಲು ಉದ್ದೇಶಿಸಲಾಗಿದೆ. ಈಗಾಗಲೇ ಸರ್ಕಾರ 4.5 ಕೋಟಿ ರೂ. ಅನುದಾನ ಮಂಜೂರು ಮಾಡಿ ಜಮೀನು ನೀಡಿದೆ. ಕ್ರಿಯಾಯೋಜನೆ ತಯಾರಿಸಿದ್ದು, ಮೂರು ತಿಂಗಳಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ. ಅದೇ ರೀತಿಯಲ್ಲಿ ಉತ್ತರ ಕರ್ನಾಟಕ, ಮಧ್ಯಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಸೇರಿದಂತೆ ರಾಜ್ಯದ ನಾಲ್ಕು ಕಡೆಗಳಲ್ಲಿ ಶಿಲ್ಪಕಲಾ ಭವನ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಇದರಿಂದ ವಿಶ್ವಕರ್ಮ ಸಮುದಾಯದವರು ತಯಾರು ಮಾಡಿದ ಶಿಲ್ಪಗಳಿಗೆ ಮಾರುಕಟ್ಟೆಗೆ ಒದಗಿಸಿದಂತಾಗುತ್ತದೆ. ಪ್ರತಿ ಜಿಲ್ಲೆಯಲ್ಲಿಯೂ ವಿಶ್ವಕರ್ಮ ಕರಕುಶಲ ವಸ್ತುಪ್ರದರ್ಶನ ಹಾಗೂ ಮಾರುಕಟ್ಟೆಯನ್ನು ಆಯೋಜಿಸುವ ಯೋಜನೆ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಬಜೆಟ್ ಪೂರ್ವದಲ್ಲಿ ನಿಗಮದ ಚಟುವಟಿಕೆಗಳಿಗೆ 100 ಕೋಟಿ ರೂ. ನೀಡುವಂತೆ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿತ್ತು. ಆದರೆ ಕೋವಿಡ್‌ನಿಂದಾಗಿ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ನಿಗಮಕ್ಕೆ 10 ಕೋಟಿ ರೂ. ನೀಡಲಾಗಿದೆ. ಇದರ ಜೊತೆಗೆ ಹಿಂದುಳಿದ ವರ್ಗಗಳಿಗೆ ಹೆಚ್ಚುವರಿಯಾಗಿ 1000 ಕೋಟಿ ರೂ. ನೀಡಲಾಗಿದೆ. ಇದರಲ್ಲಿ ನಿಗಮಕ್ಕೆ 20 ಕೋಟಿ ರೂ.ಬರುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರ ಸಾಲ, ಬ್ಯಾಂಕ್ ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ, ಕಿರುಸಾಲ ಯೋಜನೆ, ಗಂಗಾಕಲ್ಯಾಣ ಯೋಜನೆಯನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರಿಂದ ಸಮುದಾಯದವರಿಗೆ ಸೌಲ, ಸೌಲಭ್ಯ ನೀಡಲಾಗುತ್ತಿದೆ. ಸಮುದಾಯದ ವಿದ್ಯಾರ್ಥಿಗಳಿಗಾಗಿ ಅರಿವು ಶೈಕ್ಷಣಿಕ ಯೋಜನೆ ಜಾರಿಗೆ ತರಲಾಗಿದ್ದು, ನಿಗಮದ ವತಿಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಉದ್ದೇಶಕ್ಕಾಗಿ ನೆರವು ನೀಡಲಾಗುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ವಿಶ್ವಕರ್ಮ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಶಂಕರಾಚಾರಿ, ನಗರಸಭೆ ನಾಮನಿರ್ದೇಶನ ಸದಸ್ಯ ರಮೇಶಾಚಾರಿ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಶೇಖರ್, ಬಿಜೆಪಿ ಮುಖಂಡ ಶಿವಣ್ಣಾಚಾರ್ ಇದ್ದರು.