ಚಿತ್ರದುರ್ಗ: ಜಿಲ್ಲೆಯಲ್ಲಿ ಪ್ರತಿ ಹೋಬಳಿಗೆ ಒಂದು ಮಾದರಿ ಶಾಲೆ ನಿರ್ಮಾಣ ಮಾಡಲು ಉದ್ದೇಶಿಸಿದ್ದು, ಕೂಡಲೇ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸಂಸದ ಎ. ನಾರಾಯಣಸ್ವಾಮಿ, ಶಿಕ್ಷಣ ಇಲಾಖೆ ಅ ಧಿಕಾರಿಗಳಿಗೆ ಸೂಚಿಸಿದರು.
ನಗರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿಯಲ್ಲಿ ಸೋಮವಾರ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್) ಅಡಿಯಲ್ಲಿ ಅನುದಾನ ಬಳಕೆ ಕುರಿತು ಶಿಕ್ಷಣ ಇಲಾಖೆಯ ಅ ಧಿಕಾರಿಗಳೊಂದಿಗೆ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮ ಪಂಚಾಯಿತಿವಾರು ಶಾಲೆಗಳಿಗೆ ಅಗತ್ಯವಾಗಿರುವ ಶಾಲಾ ಕೊಠಡಿಗಳ ಮೇಲ್ಛಾವಣಿ, ಕಾಂಪೌಂಡ್ ನಿರ್ಮಾಣ, ಸುಣ್ಣ-ಬಣ್ಣ ಮುಂತಾದ ಸಣ್ಣ ಪುಟ್ಟ ರಿಪೇರಿ ಇರುವಂತಹ ಶಾಲೆಗಳ ವಿವರವನ್ನು ಪಟ್ಟಿ ಮಾಡಿ. ಒಂದು ವಾರದೊಳಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದರು.
ಸಾಮಾಜಿಕ ಹೊಣೆಗಾರಿಕೆ ನಿಧಿ ಅಡಿಯಲ್ಲಿ ಮಾದರಿ ಶಾಲೆಗಳ ನಿರ್ಮಾಣಕ್ಕೆ ಸಾಕಷ್ಟು ಅವಕಾಶಗಳಿವೆ. ಹಾಗಾಗಿ ಇದಕ್ಕೆ ಸಂಬಂಧಪಟ್ಟಂತೆ ಜಿಲ್ಲೆಯಲ್ಲಿ ಇರುವ ಶಾಲೆಗಳ ಆರಂಭವಾದ ವರ್ಷ, ಶಾಲೆಯ ಇತಿಹಾಸ, ಶಾಲೆಯ ಕಾರ್ಯವೈಖರಿ, ಶಾಲೆಯ ವಿಸ್ತೀರ್ಣ, ಶಾಲೆಯಲ್ಲಿರುವ ಮಕ್ಕಳ ಸಂಖ್ಯೆ, ಶಾಲೆಯ ಸಾಧನೆ ಹೀಗೆ ಮುಂತಾದ ವಿಷಯಗಳ ಬಗ್ಗೆ ಸವಿಸ್ತರವಾದ ವರದಿ ಸಿದ್ಧಪಡಿಸುವಂತೆ ತಿಳಿಸಿದರು.
ಕೋವಿಡ್ ಸಂದರ್ಭದಲ್ಲಿ ಜಿಲ್ಲೆಯ ಶಿಕ್ಷಕರು ಮಕ್ಕಳಿಗೆ ಯಾವ ವಿಧಾನದಲ್ಲಿ ಬೋಧನೆ ಮಾಡಬೇಕು, ಮಕ್ಕಳು ಕಲಿಕೆಯಲ್ಲಿ ಹೇಗೆ ಆಸಕ್ತಿಯುತವಾಗಿ ತೊಡಗಿಸಿಕೊಳ್ಳಬೇಕು ಎಂಬುವುದರ ಕುರಿತು ನುರಿತ ವಿಷಯ ಸಂಪನ್ಮೂಲ ವ್ಯಕ್ತಿಗಳಿಂದ ಶಿಕ್ಷಕರಿಗೆ ತರಬೇತಿ ನೀಡಿ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ. ರವಿಶಂಕರ್ ರೆಡ್ಡಿ, ಉತ್ತಮ ಫಲಿತಾಂಶ ಪಡೆಯುವ ದೃಷ್ಟಿಯಿಂದ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಇಲಾಖೆಯಿಂದ ವಿಷಯವಾರು ವಿಶೇಷ ಪುಸ್ತಕಗಳನ್ನು ಬಿಡುಗಡೆ ಮಾಡಲಾಗಿದೆ.
ಶಿಕ್ಷಕರಿಗೂ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ತರಬೇತಿಗಳನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದ ಸಹ ನಿರ್ದೇಶಕ ಎಚ್. ಮಂಜುನಾಥ್, ಡಯಟ್ ಪ್ರಾಂಶುಪಾಲ ಎಸ್.ಕೆ.ಬಿ ಪ್ರಸಾದ್, ಕ್ಷೇತ್ರ ಶಿಕ್ಷಣಾ ಧಿಕಾರಿಗಳು ಮತ್ತು ಶಿಕ್ಷಣ ಇಲಾಖೆ ಅಧಿ ಕಾರಿಗಳು ಭಾಗವಹಿಸಿದ್ದರು.