ಚಿತ್ರದುರ್ಗ: ಕೊರೊನಾ ವೈರಸ್ ಸೋಂಕು ತಡೆಗಟ್ಟುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ವಿಶೇಷ ಪ್ರಚಾರ ವಾಹನಕ್ಕೆ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಾದ್ಯಂತ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಶೇಷ ಪ್ರಚಾರ ವಾಹನವನ್ನು ಸಿದ್ಧಪಡಿಸಿದೆ. ಕೊರೋನಾ ವೈರಸ್ ಸೋಂಕು ತಡೆಯಲು ಜಾಗೃತಿ ಅಗತ್ಯ ಎಂದರು.
ಈ ವಾಹನ ಗ್ರಾಮಗಳಿಗೆ ತೆರಳಿ ಸಾರ್ವಜನಿಕರಿಗೆ ಮಾಹಿತಿ ನೀಡಲಿದೆ. ಕೊರೋನಾ ವೈರಸ್ ಸೋಂಕು ಕುರಿತಂತೆ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ವದಂತಿ, ಊಹಾಪೋಹಗಳನ್ನು ನಂಬಬಾರದು. ಸೋಂಕು ಹರಡದಂತೆ ತಡೆಗಟ್ಟಲು ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಪಾಲಾಕ್ಷ ಮಾತನಾಡಿ, ಕೊರೊನಾ ವೈರಸ್ ಲಕ್ಷಣಗಳಾದ ತೀವ್ರ ಜ್ವರ, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ ಹಾಗೂ ಭೇದಿಯ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಆಸ್ಪತ್ರೆಯ ವೈದ್ಯರಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಮುಂಜಾಗ್ರತಾ ದೃಷ್ಟಿಯಿಂದ ಕೆಮ್ಮುವಾಗ ಮತ್ತು ಸೀನುವಾಗ ಕರವಸ್ತ್ರವನ್ನು ಅಡ್ಡ ಹಿಡಿಯಬೇಕು. ಸಾರ್ವಜನಿಕ ಸ್ಥಳದಲ್ಲಿ ಉಗಳಬಾರದು. ಕೈಗಳನ್ನು ಸಾಬೂನಿನಿಂದ ತೊಳೆದುಕೊಳ್ಳಬೇಕು. ಸ್ವಚ್ಛತೆ ಕಾಪಾಡಬೇಕು. ರೋಗದ ಲಕ್ಷಣ ಹೊಂದಿರುವವರು ಜನರೊಂದಿಗೆ ನಿಕಟ ಸಂಪರ್ಕ ಹೊಂದಬಾರದು. ಸರಿಯಾಗಿ ಬೇಯಿಸದ ಹಸಿ ಮೊಟ್ಟೆ, ಮಾಂಸ, ಸೇವೆನೆ ಮಾಡಬಾರದು. “ಕೊರೊನಾ ವೈರಸ್ ಬಗ್ಗೆ ಭಯಬೇಡ, ಎಚ್ಚರವಿರಲಿ’ ಎಂಬ ಸ್ಲೊಗನ್‌ನೊಂದಿಗೆ ಜನರಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಿ. ಚಿದಾನಂದಪ್ಪ ಮಾತನಾಡಿ, ಜಿಲ್ಲೆಯ ತಾಲೂಕುವಾರು ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರಿಗೆ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಲು ಜಾಗೃತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುವರು. ತಾಯಂದಿರ ಸಭೆಗಳಲ್ಲಿ, ಗ್ರಾಮ ಪಂಚಾಯತ್ ಸಭೆಗಳಲ್ಲಿ, ಇತರ ಸಭೆಗಳಲ್ಲಿ ಜಾಗೃತಿ ಮೂಡಿಸಲು ತಿಳಿಸಲಾಗಿದೆ. ಸಂಚಾರಿ ವಸ್ತು ಪ್ರದರ್ಶನವನ್ನು (ಟ್ಯಾಬ್ಲೊ) ಎಲ್ಲಾ ತಾಲೂಕುಗಳ ಗ್ರಾಮಗಳಲ್ಲಿ ಧ್ವನಿವರ್ಧಕ ವ್ಯವಸ್ಥೆಯೊಂದಿಗೆ ಕಳುಹಿಸಲಾಗುವುದು ಎಂದು ಹೇಳಿದರು. ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿ ಕಾರಿ ಎಚ್.ಎಸ್. ಆನಂದ, ಕ್ಷೇತ್ರ ಆರೋಗ್ಯ ಶಿಕ್ಷಣಾ ಧಿಕಾರಿ ಎಚ್.ಬಿ. ಪೂಜಾರ್ ಮತ್ತಿತರರು ಇದ್ದರು.