ಚಿತ್ರದುರ್ಗ: ದೇಶದ ಪ್ರಧಾನಿ ನರೇಂದ್ರ ಮೋದಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಒನಕೆ ಓಬವ್ವ ವೃತ್ತಕ್ಕೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ವಿರುದ್ಧ ಧಿಕ್ಕಾರ ಕೂಗಿದದರು. ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡಿರುವ ರಾಹುಲ್ ಗಾಂಧಿ ತಕ್ಷಣ ದೇಶದ ಜನತೆ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್. ನವೀನ್, ಸುಪ್ರೀಂ ಕೋರ್ಟ್ ಹೆಸರನ್ನು ದುರ್ಬಳಕೆ ಮಾಡಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರನ್ನು ರಫೇಲ್ ಯುದ್ಧ ವಿಮಾನ ಖರೀದಿ ವಿಚಾರದಲ್ಲಿ ರಾಹುಲ್ ಗಾಂಧಿ “ಚೌಕಿದಾರ್ ಚೋರ್’ ಎಂದು ಕರೆದಿದ್ದಾರೆ. ಇದರಿಂದ ದೇಶದ ಪ್ರಧಾನಿಯ ಘನತೆಗೆ ಧಕ್ಕೆ ತಂದಂತಾಗಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಕೂಡಾ ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿದೆ ಎಂದರು.
ರಫೇಲ್ ಯುದ್ಧ ವಿಮಾನ ಖರೀದಿ ವಿಚಾರದಲ್ಲಿ ರಾಹುಲ್ ಗಾಂಧಿ ಒಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದುಕೊಂಡು ಅತ್ಯಂತ ಬಾಲಿಶವಾಗಿ ನಡೆದುಕೊಂಡಿದ್ದಾರೆ. ದೇಶದ ರಕ್ಷಣೆಯ ಆಂತರಿಕ ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. ಸುಖಾ ಸುಮ್ಮನೆ ರಫೇಲ್ ವಿಚಾರವನ್ನು ಬೀದಿಗೆ ತಂದು ವಿವಾದ ಎಬ್ಬಿಸಿದ್ದಾರೆ ಎಂದು ಟೀಕಿಸಿದರು.
ರಾಹುಲ್ ಗಾಂಧಿ ಅವರ ಅಪ್ರಬುದ್ಧ ಹೇಳಿಕೆಗಳನ್ನು ಖಂಡಿಸಿ ಬಿಜೆಪಿಯ ದೆಹಲಿ ಸಂಸದೆ ಮೀನಾಕ್ಷಿ ಲೇಖೀ ಸುಪ್ರೀಂ ಕೋರ್ಟ್‌ನಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ವಿಚಾರಣೆ ನಡೆಸಿದ ಕೋರ್ಟ್, ರಾಹುಲ್ ಅವರನ್ನು ತರಾಟಗೆ ತೆಗೆದುಕೊಂಡಿದೆ.
ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ತಕ್ಷಣ ದೇಶದ ಜನರ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು. ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ್, ಮುರಳಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶ್ಯಾಮಲಾ, ಮುಖಂಡರಾದ ಕೆ. ತಿಪ್ಪೇಸ್ವಾಮಿ, ಶಿವಣ್ಣಾಚಾರ್, ಜಿತೇಂದ್ರ, ನಾಗರಾಜ್ ಬೇದ್ರೆ, ಶಿವಪ್ರಕಾಶ್ ದಗ್ಗೆ, ಶಶಿಧರ, ಸೇತುರಾಂ, ಬಸಮ್ಮ, ಸಂಪತ್ ಕುಮಾರ್, ವೆಂಕಟೇಶ್ ಯಾದವ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.