ಚಿತ್ರದುರ್ಗ: ದೇಶದಲ್ಲಿ ಹಲವು ದಶಕಗಳಿಂದ ಕಗ್ಗಂಟಾಗಿದ್ದ ಜ್ವಲಂತ ಸಮಸ್ಯೆಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಮರ್ಥವಾಗಿ ಪರಿಹಾರ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎ. ಮುರುಳಿ ಹೇಳಿದರು.
ಎರಡನೇ ಅವಧಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಶನಿವಾರ ಬಿಜೆಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅವರು ಮಾತನಾಡಿದರು. ವಿಶ್ವದ ಬಲಿಷ್ಠ ರಾಷ್ಟ್ರಗಳೇ ಕೋವಿಡ್ ವೈರಸ್‌ನಿಂದ ನಲಗುತ್ತಿರುವ ಸಂದರ್ಭದಲ್ಲಿ ಪ್ರಧಾನಿ ಮೋದಿ ತೆಗೆದುಕೊಂಡ ಲಾಕ್‌ಡೌನ್ ನಂತಹ ದಿಟ್ಟ ತೀರ್ಮಾನಗಳ ಕಾರಣಕ್ಕೆ ಭಾರತದಲ್ಲಿ ಕೋವಿಡ್ ಹದ್ದುಬಸ್ತಿನಲ್ಲಿದೆ ಎಂದರು.
60 ದಿನಗಳ ಲಾಕ್‌ಡೌನ್‌ನಿಂದ ದೇಶ ಸಂಕಷ್ಟಕ್ಕೆ ಸಿಲುಕಿತ್ತು. ಇಂತಹ ಸಂದರ್ಭದಲ್ಲಿ ಎದೆಗುಂದದೆ ಪ್ರಧಾನಮಂತ್ರಿಗಳು ಬಡವರು, ಶ್ರಮಿಕರು, ದೀನದಲಿತರು, ರೈತರು, ಕೃಷಿ ಕಾರ್ಮಿಕರು ಸೇರಿದಂತೆ ಎಲ್ಲಾ ವಲಯಗಳಿಗೆ 20 ಲಕ್ಷ ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ಸ್ಲಂ ಮೋರ್ಚಾ ರಾಜ್ಯ ಉಪಾಧ್ಯಕ್ಷ ಸಿದ್ದೇಶ್ ಯಾದವ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಒಂದು ವರ್ಷದ ಕಾರ್ಯಕ್ರಮವನ್ನು ಕೊರೊನಾ ಹಾವಳಿ ಕಾರಣಕ್ಕೆ ಪಕ್ಷದ ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಕೋವಿಡ್ ವೈರಸ್ ವ್ಯಾಪಕವಾಗಿ ಹರಡದಂತೆ ನಿಯಂತ್ರಣದಲ್ಲಿದೆ. ಕಳೆದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳಲ್ಲಿ ಸಾಕಷ್ಟು ಈಡೇರಿದೆ. ಆದ್ದರಿಂದ ಮೋದಿ ಎರಡನೇ ಬಾರಿಗೆ ದೇಶದ ಪ್ರಧಾನಿಯಾಗಿದ್ದಾರೆ ಎಂದರು.
ಚಿತ್ರದುರ್ಗಕ್ಕೆ ಕೇಂದ್ರ ಸರ್ಕಾರದಿಂದ ಮೆಡಿಕಲ್ ಕಾಲೇಜು ಮಂಜೂರಾಗುವ ವಿಶ್ವಾಸವಿದೆ. ಲಾಕ್‌ಡೌನ್ ಸಂಕಷ್ಟ ನಿವಾರಣೆಗಾಗಿ 20 ಲಕ್ಷ ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿರುವುದನ್ನು ಟೀಕಿಸಿ ಕಾಂಗ್ರೆಸ್‌ನವರು ಸವಾಲು ಹಾಕಿದ್ದಾರೆ. ಆದರೆ, ನೇರವಾಗಿ ಬಂದು ಕೇಳಿದರೆ ಅವರಿಗೆ ಲೆಕ್ಕ ಕೊಡುತ್ತೇವೆ ಎಂದು ಹೇಳಿದರು.
ಬಿಜೆಪಿ ನಗರ ಘಟಕದ ಅಧ್ಯಕ್ಷ ಶಶಿಧರ್ ಮಾತನಾಡಿ, ಪ್ರಧಾನಿ ಮೋದಿ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್, ಸರ್ಜಿಕಲ್ ಸ್ಟ್ರೈಕ್ , ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ಆರ್ಟಿಕಲ್ 370 ರದ್ದು, ನೋಟ್ ಬಂದ್ ಸೇರಿದಂತೆ ಹಲವು ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಸಿದ್ದಾಪುರ, ಗ್ರಾಮಾಂತರ ಅಧ್ಯಕ್ಷ ನಂದಿ ನಾಗರಾಜ್, ಯುವಮೋರ್ಚಾ ಜಿಲ್ಲಾಧ್ಯಕ್ಷ ಹನುಮಂತೇಗೌಡ, ರೈತ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಯಾದವ್, ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ರೆಡ್ಡಿ, ಮುಖಂಡ ಸೇತುರಾಂ, ಶಿವಣ್ಣಾಚಾರ್, ನಾಗರಾಜ್ ಬೇದ್ರೆ, ದಗ್ಗೆ ಶಿವಪ್ರಕಾಶ್ ಇದ್ದರು .