ಚಿತ್ರದುರ್ಗ: ಕಳದ ಹತ್ತು ವರ್ಷಗಳಿಂದ ಸತತ ಬರಕ್ಕೆ ತುತ್ತಾಗುತ್ತಿರುವ ಚಿತ್ರದುರ್ಗ ಜಿಲ್ಲೆಯನ್ನು ಶಾಶ್ವತ ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸಿ ಬೆಳೆ ವಿಮೆ ಪಾವತಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಆಂಧ್ರಪ್ರದೇಶ ಮಾದರಿಯಲ್ಲಿ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಬೇಕು. ಆಂಧ್ರಪ್ರದೇಶದ ಹಿಂದೂಪುರ, ಕರ್ನೂಲ್, ಕಡಪ ಹಾಗೂ ಅನಂತಪುರ ಜಿಲ್ಲೆಗಳನ್ನು ಕೇಂದ್ರ ಸರ್ಕಾರ ಶಾಶ್ವತ ಬರಗಾಲಕ್ಕೆ ತುತ್ತಾದ ಜಿಲ್ಲೆಗಳು ಎಂದು ಘೋಷಿಸಿದೆ. ಅದೇ ಮಾದರಿಯಲ್ಲಿ ಚಿತ್ರದುರ್ಗ ಜಿಲ್ಲೆಯನ್ನೂ ಘೋಷಣೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಜಿಲ್ಲೆಯಲ್ಲಿ ಅಂತರ್ಜಲ ಬರಿದಾಗಿ ಕುಡಿಯುವ ನೀರಿಗೂ ತತ್ವಾರ ಉಂಟಾಗಿದೆ. ರಾಜ್ಯ ಸರ್ಕಾರ ಎಂಟು ಬಾರಿ ಬರಗಾಲಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದೆ. ಕೇಂದ್ರದಿಂದ ಸಾಕಷ್ಟು ಸಲ ಬರ ಅಧ್ಯಯನ ತಂಡಗಳು ಬಂದು ಹೋಗಿವೆ. ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಜಿಲ್ಲಾಡಳಿತ ಪ್ರತಿ ಸಲವೂ ಅಧ್ಯಯನ ತಂಡಕ್ಕೆ ವರದಿ ಸಲ್ಲಿಸಿದೆ. ಹೀಗಿದ್ದರೂ ವಿಮಾ ಕಂಪನಿಗಳು ವಿಮೆ ಪಾವತಿಸಲು ಸತಾಯಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಆರ್. ವಿನೋತ್ ಪ್ರಿಯಾ ಅವರಿಗೆ ಮನವಿ ಸಲ್ಲಿಸಲಾಯಿತು. ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ನುಲೇನೂರು ಎಂ. ಶಂಕ್ರಪ್ಪ, ಜಿಲ್ಲಾ ಉಪಾಧ್ಯಕ್ಷ ಕೆ.ಪಿ. ಭೂತಯ್ಯ, ತಾಲೂಕು ಅಧ್ಯಕ್ಷ
ಬಸ್ತಿಹಳ್ಳಿ ಸುರೇಶ್‌ಬಾಬು, ಸಿ.ಆರ್. ತಿಮ್ಮಣ್ಣ, ಧನಂಜಯ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಎಂ.ಬಿ. ತಿಪ್ಪೇಸ್ವಾಮಿ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.