ಚಿತ್ರದುರ್ಗ: ಲಾಕ್‌ಡೌನ್ ಸಂದರ್ಭದಲ್ಲಿ ಕೃಷಿ ಹಾಗೂ ಕೂಲಿ ಕಾರ್ಮಿಕರಿಗೆ ಸರ್ಕಾರ ಯಾವ ಕೊಡುಗೆಯನ್ನೂ ನೀಡಿಲ್ಲ. ಕೇವಲ ಅನ್ನಭಾಗ್ಯ ಯೋಜನೆಯ ಅಕ್ಕಿ ಕೊಟ್ಟು ಸುಮ್ಮನಾಗಿದೆ ಎಂದು ಮಾಜಿ ಸಚಿವ ಎಚ್. ಆಂಜನೇಯ ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡವರು, ಕಾರ್ಮಿಕರಿಗೆ ಲಾಕ್‌ಡೌನ್ ಸಂಕಷ್ಟವಿದೆ. ಅವರಿಗೆ ಎಣ್ಣೆ, ಸೋಪು, ಸಾಂಬಾರ್ ಪುಡಿ ಸೇರಿದಂತೆ ದಿನಬಳಕೆ ವಸ್ತುಗಳನ್ನು ಪಡಿತರ ವ್ಯವಸ್ಥೆಯಲ್ಲಿ ವಿತರಿಸಬೇಕು ಎಂದು ಒತ್ತಾಯಿಸಿದರು. ಪೌರಕಾರ್ಮಿಕರು ದಿನವೂ ಬೀದಿಗಿಳಿದು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸರಿಯಾದ ಮಾಸ್ಕ್, ಸ್ಯಾನಿಟೈಸರ್ ಕೊಟ್ಟಿಲ್ಲ ಎಂದು ವಾಗ್ಧಾಳಿ ನಡೆಸಿದರು.
ಉಸ್ತುವಾರಿ ಸಚಿವರು ಸಮಸ್ಯೆ ಆಲಿಸಲಿ: ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಅವರು ಒಂದು ದಿನ ಜಿಲ್ಲೆಗೆ ಬಂದು ಇಲ್ಲಿನ ಜನರ ಸಮಸ್ಯೆ ಆಲಿಸಬೇಕು. ರೈತರು, ಕಾರ್ಮಿಕರು, ವಿಪಕ್ಷ ನಾಯಕರು, ಪತ್ರಕರ್ತರ ಜತೆ ಚರ್ಚಿಸಿ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಂಜನೇಯ ಒತ್ತಾಯಿಸಿದರು. ಕಾಂಗ್ರೆಸ್‌ನ ಹಾಲಿ ಹಾಗೂ ಮಾಜಿ ಶಾಸಕರು ಕೂಡಾ ಒಂದು ಸಭೆ ನಡೆಸಿ, ಜಿಲ್ಲೆಗೆ ತಕ್ಷಣ ಆಗಬೇಕಾದ ಕೆಲಸಗಳ ಬಗ್ಗೆ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸುತ್ತೇವೆ ಎಂದರು.
ಜಿಲ್ಲೆಯಲ್ಲಿ ಕಬ್ಬಿಣದ ಅದಿರು ಕಂಪನಿಗಳಿವೆ. ಇಲ್ಲಿನ ಭೂಗರ್ಭ ಬಗೆದು ಕೋಟ್ಯಂತರ ರೂಪಾಯಿ ಲಾಭ ಮಾಡಿಕೊಂಡಿದ್ದಾರೆ. ಜತೆಗೆ ಕಲ್ಲು ಕ್ವಾರಿಗಳಿಂದಲೂ ಲಾಭ ಮಾಡಿಕೊಂಡವರಿದ್ದಾರೆ.ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಅವರು ಎಷ್ಟು ದೇಣಿಗೆ ಕೊಟ್ಟಿದ್ದಾರೆ ಎನ್ನುವುದನ್ನು ಜಿಲ್ಲಾಡಳಿತ ಬಹಿರಂಗಪಡಿಸಲಿ ಎಂದು ಒತ್ತಾಯಿಸಿದರು.